ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಜು.30ರವರೆಗೆ ನಿಷೇಧಾಜ್ಞೆ

Last Updated 28 ಜುಲೈ 2022, 18:56 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಕಡೆಗಳಲ್ಲಿ ಗುರುವಾರ ರಾತ್ರಿ 10 ಗಂಟೆಯಿಂದ ಜು.30ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

ಶುಕ್ರವಾರ ಎಲ್ಲ ಮದ್ಯದ ಅಂಗಡಿಗಳನ್ನು‌ ಮುಚ್ಚಲು ಆದೇಶಿಸಲಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್‌ಪೋಸ್ಟ್ ಗಳನ್ನು ಹಾಕಿ, ಕೇರಳ‌ ಗಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಪ್ರತಿ ವಾಹನವನ್ನು ತಪಾಸಣೆ ಮಾಡಲಾಗುತ್ತದೆ. ರಾತ್ರಿ 10 ಗಂಟೆಯ ನಂತರ ಅನವಶ್ಯಕವಾಗಿ ವಾಹನದಲ್ಲಿ ಅಥವಾ ನಡೆದುಕೊಂಡು ಹೋಗುವವರನ್ನು ವಶಕ್ಕೆ ಪಡೆಯಲಾಗುವುದು. ಅಂತಹವರ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದಿದ್ದಾರೆ.

ನಗರದ ಹೊರವಲಯದ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಹಲವು ರೀತಿಯ ಚರ್ಚೆಗಳು ಸಾಮಾಜಿಕ‌ ಜಾಲತಾಣಗಳಲ್ಲಿ ನಡೆಯುತ್ತಿವೆ.

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು 'ಅಂತಹ ಯಾವುದೇ ಮಾಹಿತಿ ಲಭ್ಯವಾಗಿಲ್ಲ.‌ ವಿನಾಕಾರಣ ವಿಷಯಗಳನ್ನು ಚರ್ಚಿಸಬಾರದು. ಶಾಂತಿಯನ್ನು ಕಾಪಾಡಬೇಕು ಎಂದು‌ ವಿನಂತಿಸಿದ್ದಾರೆ.

ಸುರತ್ಕಲ್ ಭಾಗ ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಸುರತ್ಕಲ್, ಬಜಪೆ, ಮೂಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.30ರ ಬೆಳಿಗ್ಗೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಗತ್ಯವಿದ್ದಲ್ಲಿ ಉಳಿದ ಪ್ರದೇಶಗಳಿಗೂ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದವರಿಗೆ ಶುಕ್ರವಾರ ಪವಿತ್ರ ದಿನ. ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಹೋಗಬೇಕಾಗುತ್ತದೆ. ನಿಷೇಧಾಜ್ಞೆ ‌ಇರುವ ಠಾಣೆಗಳ ವ್ಯಾಪ್ತಿಯ ಮುಸ್ಲಿಂ ಬಾಂಧವರು ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಅಥವಾ ಅತಿ ಹತ್ತಿರದ‌ ಮಸೀದಿಯಲ್ಲಿ ಕಾನೂನು ಪಾಲನೆ ಮಾಡಿ ಪ್ರಾರ್ಥನೆ ನಡೆಸಬೇಕು ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಶಾಂತಿ ಸುವ್ಯವಸ್ಥೆ ಕಾಪಾಡಲು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ನಿರ್ದೇಶನ ನೀಡಲಾಗಿದೆ. ಆರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸುವ ಯಾರನ್ನೇ ಆದರೂ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದುಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT