ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಿವ ಮಳೆಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್ ಬಂಧನಕ್ಕೆ ವಿರೋಧ
Last Updated 5 ಸೆಪ್ಟೆಂಬರ್ 2019, 12:19 IST
ಅಕ್ಷರ ಗಾತ್ರ

ಮಂಗಳೂರು: ಶಾಸಕ ಡಿ.ಕೆ.ಶಿವಕುಮಾರ್‌ ಅವರ ಬಂಧನ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಬುಧವಾರ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ನಡುವಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯ ಕಾರ್ಯಕರ್ತರು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ, ಶಿವಕುಮಾರ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ಪ್ರತಿಕೃತಿಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮುಖಂಡರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌ ನಾಯಕರಾದ ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್‌ ಅವರನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳ ಮೂಲಕ ಬಂಧಿಸಲಾಗಿದೆ. ಹಬ್ಬ ಆಚರಣೆಗೂ ಅವಕಾಶ ನೀಡದೇ ಕಿರುಕುಳ ನೀಡಲಾಗಿದೆ’ ಎಂದರು.

ಬಿಜೆಪಿ ನಾಯಕರು ಮಾಡಿದ ಅಕ್ರಮಗಳ ಕುರಿತು ಯಾವುದೇ ಸಂಸ್ಥೆಯೂ ತನಿಖೆ ನಡೆಸುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಡೆಸಿದ ಶಾಸಕರ ಖರೀದಿಯ ಕುರಿತು ಮಾಹಿತಿ ಇದ್ದರೂ ತನಿಖೆ ನಡೆಸಿಲ್ಲ. ಅಕ್ರಮದ ಕುರಿತು ತನಿಖೆ ನಡೆಸುವ ಬದ್ಧತೆ ಇದ್ದರೆ ಆ ಬಗ್ಗೆಯೂ ತನಿಖೆಗೆ ಆದೇಶಿಸಲಿ ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ಕುಮಾರ್‌ ಮಾತನಾಡಿ, ‘ಕೇಂದ್ರ ಸರ್ಕಾರವಯ ಕಾಂಗ್ರೆಸ್‌ ನಾಯಕರ ವಿರುದ್ಧ ಅಧಿಕಾರಿಗಳನ್ನು ಬಳಸಿಕೊಂಡು ದ್ವೇಷ ಸಾಧಿಸುತ್ತಿದೆ. ಇತ್ತೀಚೆಗೆ ನಮ್ಮ ಶಾಸಕರ ಖರೀದಿಗೆ ನಡೆದ ಪ್ರಯತ್ನ ಕುರಿತ ಸಾಕ್ಷ್ಯಗಳು ಇದ್ದರೂ ಏಕೆ ತನಿಖೆ ನಡೆಯುತ್ತಿಲ್ಲ’ ಎಂದು ಪ್ರಶ್ನಿಸಿದರು.

ಶಿವಕುಮಾರ್‌ ಅವರನ್ನು ವಿಚಾರಣೆ ನಡೆಸಿದಂತೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆಯೂ ವಿಚಾರಣೆ ನಡೆಯಲಿದೆ. ₹ 3,000 ಸಂಬಳ ಪಡೆಯುತ್ತಿದ್ದವರ ಬಳಿ ₹ 3,000 ಕೋಟಿ ಮೌಲ್ಯದ ಆಸ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಜೆ.ಆರ್‌.ಲೋಬೊ ಮಾತನಾಡಿ, ‘ಶಿವಕುಮಾರ್‌ ಅವರು ಜಾರಿ ನಿರ್ದೇಶನಾಲಯದ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದರು. ನಾಲ್ಕು ದಿನಗಳಿಂದ ಸತತ ವಿಚಾರಣೆಗೆ ಹಾಜರಾಗಿದ್ದರು. ಆದರೆ, ರಾಜಕೀಯ ದುರುದ್ದೇಶದಿಂದ ಅವರನ್ನು ಬಂಧಿಸಲಾಗಿದೆ’ ಎಂದು ದೂರಿದರು.

ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ವೈಫಲ್ಯ ಮುಚ್ಚಿಕೊಳ್ಳಲು ವಿರೋಧ ಪಕ್ಷಗಳ ನಾಯಕರ ವಿರುದ್ಧ ದ್ವೇಷ ಸಾಧಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದರು.

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಗಟ್ಟಿ, ಮಾಜಿ ಮೇಯರ್‌ ಶಶಿಧರ ಹೆಗ್ಡೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT