ಮುಡಿಪು: ಗುಣಮಟ್ಟದ ಶಿಕ್ಷಣ ನಮ್ಮ ಜವಾಬ್ದಾರಿ: ಪ್ರೊ.ಎಂ.ಆರ್. ದೊರೆಸ್ವಾಮಿ

ಮುಡಿಪು: ‘ಇಂದಿನ ಮಕ್ಕಳು ನಾಳಿನ ರಾಷ್ಟ್ರ ನಿರ್ಮಾತೃಗಳು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಲ್ಲಿ ಯಾವುದೇ ಸೌಲಭ್ಯ ಅಥವಾ ಮೂಲಸೌಕರ್ಯದಿಂದ ವಂಚಿತರಾಗಬಾರದು. ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಪ್ರಮುಖ ಜವಾಬ್ದಾರಿಯೂ ಹೌದು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ಗುರುವಾರ ಅಸೋಸಿಯೇಷನ್ ಆಫ್ ಬ್ರಿಟಿಷ್ ಸ್ಕಾಲರ್ಸ್ ಮಂಗಳೂರು ವಿಭಾಗ ಇದರ ಸಹಯೋಗದೊಂದಿಗೆ ನಡೆದ ಪರಿಸರಸ್ನೇಹಿ ಶಾಲೆಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸಬೇಕಿದೆ. ಅಲ್ಲದೆ, ವಿಶ್ವವಿದ್ಯಾಲಯಗಳು ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ ಭಾಗವಾಗಿ ಪ್ರಮುಖ ಜವಾಬ್ದಾರಿಗಳನ್ನು ಹೊಂದಿವೆ. ಶಾಲಾ ದತ್ತು ಕಾರ್ಯಕ್ರಮದ ಮೂಲಕ ಕನ್ನಡ ಮಾಧ್ಯಮ ಶಾಲೆಗಳನ್ನು ಬೆಳೆಸಲು ಬಜೆಟ್ ವಿವರಣೆಯನ್ನು ಶಿಫಾರಸು ಮಾಡಲು ಮತ್ತು ಪೂರಕಗೊಳಿಸಲು ನಾನು ನನ್ನ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ’ ಎಂದರು.
42 ಸಾವಿರ ಸರ್ಕಾರಿ ಶಾಲೆಗಳಲ್ಲಿ 20 ಸಾವಿರ ಶಾಲೆಗಳು ಮೂಲಸೌಕರ್ಯಗಳು ಇಲ್ಲದೆ ವಂಚಿತವಾಗಿತ್ತು. ಈ ಸಂದರ್ಭದಲ್ಲಿ ಹಲವು ವರ್ಷಗಳ ಹಿಂದೆ ಈ ದತ್ತು ಸ್ವೀಕಾರ ಯೋಜನೆ ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆಯೂ ದೊರೆತಿದ್ದು, ಶಾಲೆ ಅಭಿವೃದ್ಧಿ ನಮ್ಮದೇ ಊರಿನ ಜವಾಬ್ದಾರಿ ಎಂಬ ನಿಟ್ಟಿನಲ್ಲಿ ಪ್ರೋತ್ಸಾಹ ದೊರೆತಿದೆ. ಮಂಗಳೂರು ವಿಶ್ವವಿದ್ಯಾಲಯ ಕೂಡಾ ಹಲವು ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿ ಎಂದರು.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯ ಗ್ರಾಮದೆಡೆಗೆ ಹೋಗಬೇಕು ಎನ್ನುವುದು ಕನಸಾಗಿತ್ತು. ಸಮಾಜಕ್ಕೆ ಪೂರಕವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಮುನ್ನಡೆದಿದೆ. ಪರಿಸರದ ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸುವ ಮೂಲಕ ವಿದ್ಯಾರ್ಥಿಗಳಿಗೆ, ಶಾಲೆಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದೀಗ ಪರಿಸರ ಸ್ನೇಹಿ ಶಾಲೆಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗಿದೆ ಎಂದರು.
ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ, ಅಸೋಸಿಯೇಷನ್ ಆಫ್ ಬ್ರಿಟಿಷ್ ಸ್ಕಾಲರ್ಸ್, ಮಂಗಳೂರು ವಿಭಾಗ ಉಪಾಧ್ಯಕ್ಷರಾದ ರಾಮಚಂದ್ರ ಭಟ್, ಶಿಕ್ಷಣಾಧಿಕಾರಿ ಡಾ.ಪ್ರಶಾಂತ್ ಇದ್ದರು.
ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಪ್ರಶಾಂತ್ ನಾಯ್ಕ್ ಸ್ವಾಗತಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ಉಪನಿರ್ದೇಶಕ ಸುಧಾಕರ ಕೆ. ವಂದಿಸಿದರು. ಸಹ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ನಿರೂಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.