ಬುಧವಾರ, ನವೆಂಬರ್ 13, 2019
24 °C
ಧ್ವಜಾರೋಹಣ ನೆರವೇರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕನ್ನಡ ಹಿಂದುಳಿಯದಂತೆ ಜಾಗೃತಿ ವಹಿಸಿ

Published:
Updated:
Prajavani

ಮಂಗಳೂರು: ತಂತ್ರಜ್ಞಾನದ ವೇಗದಲ್ಲಿ ಹಾಗೂ ಡಿಜಿಟಲ್‌ ಲೋಕದಲ್ಲಿ ಕನ್ನಡ ಭಾಷೆ ಹಿಂದುಳಿಯದಂತೆ ಜಾಗೃತಿ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ನೆಹರು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ, ಕನ್ನಡದಲ್ಲಿ ಯೂನಿಕೋಡ್‌ ಅಕ್ಷರ ವಿನ್ಯಾಸ, ಪರಿವರ್ತಕಗಳು, ಮೊಬೈಲ್‌ನಲ್ಲಿ ಕನ್ನಡ ಬಳಕೆ, ಬ್ರೈಲ್‌ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ ಬಳಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆ ಆಗುತ್ತಿರುವುದು ಸಂತಸದ ಬೆಳವಣಿಗೆ ಆಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಹಾಗೂ ಇಂದಿನ ಯುವ ಜನಾಂಗದವರು ಮಾತೃಭಾಷೆಯಾದ ಕನ್ನಡವನ್ನು ಬೆಳೆಸಿ, ಉಳಿಸಿಕೊಂಡು ಹೋಗಬೇಕು. ಕನ್ನಡ ನುಡಿ, ಗಡಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ಸಂರಕ್ಷಣೆಗೆ ಹಾಗೂ ಜನಪದ, ಸಂಸ್ಕೃತಿ, ಸಾಹಿತ್ಯ, ರಂಗಭೂಮಿ, ಕಲೆಗಳನ್ನು ಪ್ರೋತ್ಸಾಹಿಸಬೇಕು. ರಾಜ್ಯದ ಸಮೃದ್ಧ ಪ್ರಾಚೀನ ಸ್ಮಾರಕಗಳು, ಪರಂಪರೆಯನ್ನು ರಕ್ಷಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

ಕನ್ನಡ ಬರಿ ಭಾಷೆಯಲ್ಲ, ಅದೊಂದು ಶಕ್ತಿ. ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿಗೆ 2 ಸಾವಿರ ವರ್ಷಗಳ ಇತಿಹಾಸವಿದೆ. ಆಡಳಿತದ ಎಲ್ಲ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದ್ದು, ಇದನ್ನು ಸಂಪೂರ್ಣವಾಗಿ ಜಾರಿಗೊಳಿಸಲು ನಾವೆಲ್ಲರೂ ಮುಂದಾಗಬೇಕು ಎಂದರು.

ಬಹುಭಾಷೆ, ಧರ್ಮ ಮತ್ತು ಬಹುಸಂಸ್ಕೃತಿಗಳ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ, ವಿವಿಧ ಕ್ಷೇತ್ರಗಳಲ್ಲಿ ಪರಿಣಿತರನ್ನು ಹೊಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಹಿರಿಮೆಯನ್ನು ಗಳಿಸಿದೆ. ಕನ್ನಡ ಸಾಹಿತ್ಯಕ್ಕೆ ಜಿಲ್ಲೆಯ ಹಲವಾರು ಶ್ರೇಷ್ಠ ಬರಹಗಾರರು, ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಕಡಲತಡಿಯ ಭಾರ್ಗವ ಡಾ. ಶಿವರಾಮ ಕಾರಂತರು ನಮ್ಮ ಜಿಲ್ಲೆಯ ಪುತ್ತೂರಿನಲ್ಲಿ ಸಾಹಿತ್ಯದ ಕೃಷಿ ಆರಂಭಿಸಿ, ಬಾಲಭವನದ ಮೂಲಕ ಕನ್ನಡದ ಮೆಟ್ಟಿಲುಗಳನ್ನು ಕೈ ಹಿಡಿದು ಹತ್ತಿಸಿದ್ದರು. ಡಾ. ಶಿವರಾಮ ಕಾರಂತ, ಡಾ.ವಿ.ಕೃ. ಗೋಕಾಕ, ಡಾ.ಚಂದ್ರಶೇಖರ ಕಂಬಾರ ಸೇರಿದಂತೆ 8 ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ಕನ್ನಡ ಶ್ರೇಷ್ಠತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಕನ್ನಡದ ಅಭಿವೃದ್ಧಿಗೆ ಆಶಾದಾಯಕ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯದಲ್ಲಿ ಕನ್ನಡ ಉಳಿಯಲು ಹಾಗೂ ಬೆಳೆಯಲು ರಾಷ್ಟ್ರೀಯ ಶಿಕ್ಷಣ ನೀತಿ ಆಶಾದಾಯಕವಾಗಿದೆ. ಈ ನೀತಿಯ ಪ್ರಕಾರ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶ ದೊರೆಯಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್‌, ಶಾಸಕರಾದ ಡಾ.ಭರತ್ ಶೆಟ್ಟಿ, ಐವನ್ ಡಿಸೋಜ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್‌.ಸೆಲ್ವಮಣಿ ಉಪಸ್ಥಿತರಿದ್ದರು.

 

ಪ್ರತಿಕ್ರಿಯಿಸಿ (+)