ಮಂಗಳೂರು: ಜಾತ್ಯತೀತ ಪಕ್ಷವೆಂದು ಹೇಳಿಕೊಳ್ಳುತ್ತಿದ್ದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಆ ಪಕ್ಷದ ಅನೇಕರು ಬೇಸರ ಹೇಳಿಕೊಂಡಿದ್ದಾರೆ. ಅವರು ಕಾಂಗ್ರೆಸ್‌ಗೆ ಬರುವುದಾದರೆ ಮುಕ್ತ ಆಹ್ವಾನವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡಿರುವ, ಜಾತ್ಯತೀತ ಮನಸ್ಸಿನ ಬೇರೆ ಪಕ್ಷಗಳ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತವಿದೆ. ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ’ ಎಂದರು.
ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಮೇಲೆ ಹಲವರು ಒಲ್ಲದ ಮನಸ್ಸಿನಿಂದ ಅಲ್ಲೇ ಇದ್ದರೂ, ತಟಸ್ಥವಾಗಿದ್ದಾರೆ. ಕೋಮುಸೂಕ್ಷ್ಮಎಂಬ ಹಣೆಪಟ್ಟಿ ಹೊತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಗಟ್ಟಿಗೊಳಿಸಲು, ಸಮಾನ ಮನಸ್ಕ ಸಂಘಟನೆಗಳ ಜೊತೆ ಸೇರಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕೋಮು ಶಕ್ತಿಗಳ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವಿದೆ ಎಂದರು.
ಶೈಕ್ಷಣಿಕ ಕೇಂದ್ರವಾಗಿರುವ ಜಿಲ್ಲೆಗೆ ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಅವರ ಮೇಲೆ ಹಲ್ಲೆಯಾಗಿರುವ ಘಟನೆಗಳೂ ನಡೆದಿವೆ. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇವು ನಿಯಂತ್ರಣಕ್ಕೆ ಬಂದಿವೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಸೇರ್ಪಡೆಗೊಂಡಿರುವ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಮತ್ತೆ ಕಾಂಗ್ರೆಸ್‌ಗೆ ಬರಲಿದ್ದಾರೆಯೇ ಎಂಬ ಪ್ರಶ್ನೆಗೆ, ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತವಿದೆ ಎಂದಷ್ಟೇ ಹೇಳಿದರು.
ಪಕ್ಷದ ಮುಖಂಡರಾದ ಶಶಿಧರ ಹೆಗ್ಡೆ, ಹರಿನಾಥ, ನವೀನ್ ಡಿಸೋಜ, ಪ್ರಕಾಶ್ ಸಾಲ್ಯಾನ್, ಅಪ್ಪಿ, ಗಣೇಶ್ ಪೂಜಾರಿ, ಸಂತೋಷ್ ಕುಮಾರ್, ನಝೀರ್ ಬಜಾಲ್ ಇದ್ದರು.