ಮಂಗಳವಾರ, ಜನವರಿ 31, 2023
26 °C

ಪರೀಕ್ಷಾ ಫಲಿತಾಂಶ ವಿಳಂಬ: ಎನ್‌ಎಸ್‌ಯುಐ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬ ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಣೆ ಹಾಗೂ ವಿದ್ಯಾರ್ಥಿವೇತನ ಬಿಡುಗಡೆಯಲ್ಲೂ ವಿಳಂಬ ಆಗುತ್ತಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್‌ಎಸ್‌ಯುಐ) ಆರೋಪಿಸಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಎನ್‌ಎಸ್‌ಯುಐ ಕರ್ನಾಟಕ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್‌ ಎನ್‌.ಜಿ, ‘ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ಭಾರಿ ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಇದನ್ನು ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ ಹಮ್ಮಿಕೊಳ್ಳಲಿದೆ’ ಎಂದರು.

‘ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕುರಿತು ಸ್ಪಷ್ಟತೆ ಇಲ್ಲದೆಯೇ ರಾಜ್ಯ ಸರ್ಕಾರವು ಅದನ್ನು ಜಾರಿಗೊಳಿಸಿದೆ.  ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಉನ್ನತ ಶಿಕ್ಷಣ ಸಚಿವರು ವಿಫಲವಾಗಿದ್ದಾರೆ. ಡಬಲ್‌ ಎಂಜಿನ್‌ ಸರ್ಕಾರ ಎಂದು ಬಡಾಯಿಕೊಚ್ಚಿಕೊಳ್ಳುವ ಸರ್ಕಾರದ ಗೊಂದಲಮಯ ನೀತಿಗಳನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಎನ್‌ಎಸ್‌ಯುಐ ಹೋರಾಡಲಿದೆ’ ಎಂದರು. 

‘ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಪಡೆದುಕೊಳ್ಳುವ ಅನೇಕ ಖಾಸಗಿ ಕಾಲೇಜುಗಳು ಅವುಗಳನ್ನು ಮರಳಿಸುತ್ತಿಲ್ಲ. ಕೋವಿಡ್‌ ಸಂದರ್ಭದಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ವಿದ್ಯಾರ್ಥಿಗಳು ಇದರಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಮೂಲದಾಖಲೆಗಳನ್ನು ವಿದ್ಯಾರ್ಥಿಗಳಿಗೆ ಮರಳಿಸಲು ನಿರಾಕರಿಸುವುದು ಕಾನೂನುಬಾಹಿರ. ಈ ಕಾರಣಕ್ಕಾಗಿಯೇ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ’ ಎಂದರು.

‘ಬಿಜೆಪಿ ನೇತೃತ್ವದ ಸರ್ಕಾರವು ವಿದ್ಯಾರ್ಥಿಗಳ ಮನಸ್ಸಿನಲ್ಲೂ ಕೋಮುದ್ವೇಷ ತುಂಬುತ್ತಿದೆ’ ಎಂದು ಟೀಕಿಸಿದರು. 

‘ಕಾಲೇಜು ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಪ್ರಾತಿನಿಧ್ಯ ಸಿಗುತ್ತಿಲ್ಲ. ಕಾಲೇಜು ವಿದ್ಯಾರ್ಥಿ ಸಂಘಗಳಿಗೆ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವುದನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸುವಂತೆ ಎನ್‌ಎಸ್‌ಯುಐ ಒತ್ತಾಯಿಸಿದೆ’ ಎಂದರು.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು