ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ಮುಸ್ಲಿಮರು, ಪರಿಶಿಷ್ಟರಿಗೆ ದ್ರೋಹ: ಎಸ್‌ಡಿಪಿಐ ಆರೋಪ

Published 5 ಜನವರಿ 2024, 13:32 IST
Last Updated 5 ಜನವರಿ 2024, 13:32 IST
ಅಕ್ಷರ ಗಾತ್ರ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ದಲಿತ ಸಮುದಾಯದವರು, ಮುಸ್ಲಿಮರ ಮತ ಬಲದೊಂದಿಗೆ ಅಧಿಕಾರ ಹಿಡಿದಿರುವ ರಾಜ್ಯದ ಕಾಂಗ್ರೆಸ್‌ ನೇತೃತ್ವದ ಸರ್ಕಾರವು, ಈ ಸಮುದಾಯಗಳಿಗೆ ಅನ್ಯಾಯ ಮಾಡುವ ಮೂಲಕ ಮಾತೃದ್ರೋಹ ಮಾಡುತ್ತಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ ಪ್ರಸಾದ್ ಆರೋಪಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ತನ್ನ ಸಾಧನೆಗಳಿಂದ ಅಧಿಕಾರಕ್ಕೆ ಬಂದಿದ್ದಲ್ಲ, ಬಿಜೆಪಿಯ ಆಡಳಿತ ವೈಫಲ್ಯದಿಂದ ಅಧಿಕಾರ ಹಿಡಿದಿದೆ. ಕಳೆದ ಚುನಾವಣೆಯಲ್ಲಿ ಶೇ 67ರಷ್ಟು ದಲಿತ ಮತಗಳು, ಶೇ 92ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್‌ಗೆ ದೊರೆತಿವೆ. ಆದರೆ, ಕಾಂಗ್ರೆಸ್‌ ಸರ್ಕಾರವು, ಮೀಸಲಾತಿ ಜಾರಿ ಸೇರಿದಂತೆ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಮುಸ್ಲಿಂ ಸಮುದಾಯಕ್ಕೆ ಶೇ 8ರಷ್ಟು ಮೀಸಲಾತಿ ನೀಡಬೇಕು ಎಂಬ ಆಗ್ರಹಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಜಾಬ್ ವಿಷಯ ಪ್ರಸ್ತಾಪಿಸಿ, ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ. ಪ್ಯಾಲೆಸ್ತೀನ್ ಪರ ಪ್ರಧಾನಿ ಕೂಡ ಬೆಂಬಲ ಸೂಚಿಸಿದ್ದಾರೆ, ಆದರೆ, ಪ್ಯಾಲಸ್ತೀನ್ ಶಾಂತಿಗಾಗಿ ಪ್ರತಿಭಟನೆ ನಡೆಸಿದವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ತನ್ನ ಮಾನಸಿಕತೆಯನ್ನು ಪ್ರದರ್ಶಿಸಿದೆ’ ಎಂದರು.

‘ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ಮಾತನಾಡಿದರೂ, ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದೆ ಅವಿವೇಕದಿಂದ ವರ್ತಿಸಿದೆ. ಕೋಮು ವಿವಾದ ಸೃಷ್ಟಿಸುವವರನ್ನು ನಿಯಂತ್ರಿಸುವ ತಾಕತ್ತು ಇಲ್ಲವೆಂದರೆ ಇವರ ಸಾಮರ್ಥ್ಯ ಏನೆಂದು ಅರ್ಥವಾಗುತ್ತದೆ’ ಎಂದು ಹೇಳಿದರು.

ಪಕ್ಷದ ಪ್ರಮುಖರಾದ ಅನ್ವರ್ ಸಾದತ್, ಅಬೂಬಕರ್, ಜಮಾಲ್, ಅಶ್ರಫ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT