ಶನಿವಾರ, ಸೆಪ್ಟೆಂಬರ್ 18, 2021
30 °C
ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ

ಜಿಲ್ಲಾಧಿಕಾರಿಗೆ ಮನವಿ ನೀಡಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಸರ್ಕಾರದ ಕೋವಿಡ್ ನಿಯಮಾವಳಿಯಿಂದ ಈಗಾಗಲೇ ಉದ್ಯಮ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಆಗ್ರಹಿಸಿ ಪುತ್ತೂರು, ನೆಲ್ಯಾಡಿ, ಕಡಬ, ಕುಂಬ್ರ, ಕೆಯ್ಯೂರು, ತಿಂಗಳಾಡಿ ಹಾಗೂ ಈಶ್ವರಮಂಗಲದ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂವಿನಿಂದ ಶೇ 75ರಷ್ಟು ವ್ಯವಹಾರ ಕುಂಠಿತಗೊಂಡಿರುವ ಕಾರಣ, ಮಳಿಗೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಂಬಳ ಕೊಡಲು, ಕಟ್ಟಡ ಬಾಡಿಗೆ ನೀಡಲು ಮತ್ತು ಸಾಲ ತೀರಿಸಲು ಕಷ್ಟವಾಗಿದೆ. ಇದೇ ರೀತಿ ಮುಂದುವರಿದಲ್ಲಿ ಉದ್ಯಮಿಗಳು ಮಾನಸಿಕ ಅಘಾತಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಲಿದೆ. ವಾರಾಂತ್ಯ ಕರ್ಫ್ಯೂ ವೇಳೆ ಎಲ್ಲ ಮಳಿಗೆಗಳಿಗೂ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ತೆರವುಗೊಳಿಸುವ ಜತೆಗೆ ಎಲ್ಲರಿಗೂ ಲಸಿಕೆ ಸಿಗುವ ವ್ಯವಸ್ಥೆಯಾಗಬೇಕು. ಇದಕ್ಕಾಗಿ ಜಿಲ್ಲಾಡಳಿತ ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದರು.
ಉಪ್ಪಿನಂಗಡಿ ವರ್ತಕ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತಾ ಮಾತನಾಡಿ, ಕರ್ಫ್ಯೂ ಸಂದರ್ಭದಲ್ಲಿ ವರ್ತಕರನ್ನು ಪೊಲೀಸರು ಗೌರವದಿಂದ ಕಾಣಬೇಕು ಎಂದರು. ವರ್ತಕ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಭಗವಾನ್ ರೈ, ನೆಲ್ಯಾಡಿ ಸಂಘದ ಅಧ್ಯಕ್ಷ ರಫೀಕ್, ಪುತ್ತೂರು ಸಂಘದ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.