ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಪ್‌ವೆಲ್ - ಪಡೀಲ್ ರಸ್ತೆ ಅಭಿವೃದ್ಧಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ
Last Updated 5 ಜೂನ್ 2020, 16:23 IST
ಅಕ್ಷರ ಗಾತ್ರ

ಮಂಗಳೂರು: ನಗರ ಪ್ರವೇಶಿಸುವ ಪಂಪ್‌ವೆಲ್‌ನಿಂದ ಪಡೀಲ್‌ವರೆಗೆ ಪ್ರಮುಖ ರಸ್ತೆಯನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ₹26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಸಂಸದ ನಳಿನ್‌ಕುಮಾರ್ ಕಟೀಲ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಮಾರ್ಟ್‌ಸಿಟಿ ನಗರ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ಸುಮಾರು 2,800 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ತುರ್ತು ಅಗತ್ಯವಾಗಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಇದಕ್ಕೆ ಅನುದಾನ ಕಾದಿರಿಸಲಾಗಿದೆ. ಹಲವು ಕಡೆಗಳಲ್ಲಿ ರಸ್ತೆ ವಿಸ್ತಾರ ಕಷ್ಟಸಾಧ್ಯವಾಗಿದ್ದು, ಈ ಕಾಮಗಾರಿಗಳಲ್ಲಿ ಉಳಿಕೆಯಾಗುವ ಮೊತ್ತದಲ್ಲಿ ಹೆಚ್ಚುವರಿ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲು ನಿರ್ಧರಿಸಲಾಯಿತು.

ಪಂಪ್‌ವೆಲ್‌ನಲ್ಲಿ ಪಿ.ಪಿ.ಪಿ. ಮಾದರಿಯಡಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಟೆಂಡರ್ ಸಲ್ಲಿಸಲು ಜುಲೈ 27ರವರೆಗೆ ಕಾಲಾವಕಾಶ ಇದೆ. ಸ್ಟೇಟ್‌ಬ್ಯಾಂಕ್ ಬಳಿ ಇರುವ ಸರ್ವಿಸ್‌ ಬಸ್ ನಿಲ್ದಾಣ ನವೀಕರಣ ಕಾಮಗಾರಿಯೂ ಅಗತ್ಯವಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲು ನಳಿನ್‌ಕುಮಾರ್ ಕಟೀಲ್‌ ಸೂಚಿಸಿದರು.

ನಗರದ ಕ್ಲಾಕ್ ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗೆ ಏಕಮುಖ ರಸ್ತೆ ಪ್ರಾಯೋಗಿಕವಾಗಿ ಸಾಧುವಲ್ಲ ಎಂದ ಅವರು, ಸ್ಟೇಟ್‌ಬ್ಯಾಂಕ್ ಮಾರ್ಕೆಟ್ ಪರಿಸರದಲ್ಲಿ ರಸ್ತೆಯಲ್ಲಿ ಜನಸಂದಣಿ ಹೆಚ್ಚಿರುವುದರಿಂದ ಏಕಮುಖ ರಸ್ತೆಯಾದರೆ, ಸಂಚಾರ ಸಮಸ್ಯೆ ಇನ್ನಷ್ಟು ದಟ್ಟಣೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಗುಜ್ಜರಕೆರೆಯನ್ನು ₹4 ಕೋಟಿ ವೆಚ್ಚದಲ್ಲಿ ಹಾಗೂ ಕಾವೂರು ಕೆರೆಯನ್ನು ₹8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಕದ್ರಿ ಉದ್ಯಾನವನ್ನು ₹12 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ. ಎಮ್ಮೆಕೆರೆಯಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಹಾಗೂ ಸಮುದಾಯ ಮಟ್ಟದ ಸೌಲಭ್ಯಗಳ ಅಭಿವೃದ್ಧಿಗೆ ₹24.94 ಕೋಟಿ ವಿನಿಯೋಗಿಸಲಾಗುವುದು ಎಂದು ಸ್ಮಾರ್ಟ್‌ ಸಿಟಿ ವ್ಯಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್ ತಿಳಿಸಿದರು.

ಮಂಗಳಾ ಕ್ರೀಡಾಂಗಣದಲ್ಲಿ ₹10 ಕೋಟಿ ವೆಚ್ಚದಲ್ಲಿ ಉನ್ನತೀಕರಣ ಹಾಗೂ ಸೆಂಟ್ರಲ್ ಮಾರುಕಟ್ಟೆಯನ್ನು ₹145 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಹನಗರಪಾಲಿಕೆ ವ್ಯಾಪ್ತಿಯಲ್ಲಿ 24x7 ನೀರು ಸರಬರಾಜು ಅನುಷ್ಠಾನಕ್ಕೆ ವಿತರಣಾ ವ್ಯವಸ್ಥೆಗೆ ₹114 ಕೋಟಿ ವೆಚ್ಚ ಮಾಡಲಾಗುವುದು ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್, ಸ್ಮಾರ್ಟ್‌ ಸಿಟಿ ಸಲಹಾ ಸಮಿತಿ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT