ಭಾನುವಾರ, ಆಗಸ್ಟ್ 1, 2021
23 °C
ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯರ ಆರೋಪ

ಸ್ಮಾರ್ಟ್‌ ಸಿಟಿ ಕಾಮಗಾರಿಗಳಲ್ಲಿ ವ್ಯಾಪಕ ಅಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಮತ್ತು ಹೊಸ ಕಾಮಗಾರಿಗಳ ಟೆಂಡರ್‌ನಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಾಂಗ್ರೆಸ್‌ನ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್‌ ರವೂಫ್‌, ‘ಸ್ಮಾರ್ಟ್‌ ಸಿಟಿಯ ಮೂಲ ಯೋಜನೆಗೆ ತಕ್ಕಂತೆ ಕಾಮಗಾರಿಗಳು ನಡೆಯುತ್ತಿಲ್ಲ. ವಿಸ್ತೃತ ಯೋಜನಾ ವರದಿಗೆ ವಿರುದ್ಧವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಅಕ್ರಮ ನಡೆಯುತ್ತಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ’ ಎಂದರು.

ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ₹ 7.5 ಕೋಟಿ ವೆಚ್ಚದ ಸ್ಮಾರ್ಟ್‌ ರಸ್ತೆ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿತ್ತು. ದಿಢೀರನೆ ಕಾಮಗಾರಿ ರದ್ದುಪಡಿಸಿ, ಅದೇ ಗುತ್ತಿಗೆದಾರರಿಗೆ ಸೆಂಟ್ರಲ್‌ ಮಾರುಕಟ್ಟೆಯ ವ್ಯಾಪಾರಿಗಳಿಗೆ ₹ 6.5 ಕೋಟಿ ವೆಚ್ಚದಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸುವ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಿದರು.

ಕದ್ರಿ ರಸ್ತೆ ನಿರ್ಮಾಣ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆಯಲ್ಲಿ ₹ 100 ಮೌಲ್ಯದ ವಸ್ತುಗಳಿಗೆ ₹ 500 ದರ ನಿಗದಿ ಮಾಡಲಾಗಿದೆ. ಪ್ರಭಾವಿ ವ್ಯಕ್ತಿಗಳ ಹೆಸರನ್ನು ಟೆಂಡರ್‌ನಲ್ಲಿ ನಮೂದಿಸುವ ಮೂಲಕ ಅಕ್ರಮ ಎಸಗಲಾಗಿದೆ. ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಗೆ ₹ 35 ಕೋಟಿ ವೆಚ್ಚದ ಕಾಮಗಾರಿಗೆ ತಾಂತ್ರಿಕ್‌ ಬಿಡ್‌ ತೆರೆದು, ಒಪ್ಪಿಗೆ ನೀಡಲಾಗಿತ್ತು. ಈಗ ಆರ್ಥಿಕ ಬಿಡ್‌ ರದ್ದು‍ಪಡಿಸಲು ಹೊರಟಿದ್ದಾರೆ’ ಎಂದು ರವೂಫ್‌ ದೂರಿದರು.

ಪಾಲಿಕೆ ಸದಸ್ಯರಾದ ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್ ಪಿಂಟೋ, ಪ್ರವೀಣ್ ಚಂದ್ರ ಆಳ್ವ, ಎ.ಸಿ.ವಿನಯ ರಾಜ್, ಕೇಶವ ಮರೋಳಿ, ಜೆಸಿಂತಾ ವಿಜಯ ಅಲ್ಪ್ರೆಡ್, ನವೀನ್ ಡಿಸೋಜ, ಭಾಸ್ಕರ ಕೆ., ಝೀನತ್ ಬಂದರ್, ಅನಿಲ್ ಕುಮಾರ್, ಸಂಶುದ್ದೀನ್ ಕುದ್ರೋಳಿ, ಅಶ್ರಫ್‌ ಬಜಾಲ್ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು