ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ ಕಾಮಗಾರಿ ವರ್ಷಾಂತ್ಯಕ್ಕೆ ಪೂರ್ಣ

ಸರ್ವಿಸ್ ಬಸ್‌ಸ್ಟ್ಯಾಂಡ್‌ಗೆ ಶಾಶ್ವತ ಕಾಯಕಲ್ಪ: ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರಗತಿ ಪರಿಶೀಲನೆ
Last Updated 30 ಮೇ 2022, 4:08 IST
ಅಕ್ಷರ ಗಾತ್ರ

ಮಂಗಳೂರು: ‘ಮಂಗಳೂರು ನಗರ ದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ₹ 931 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮುಂಬರುವ ಡಿಸೆಂಬರ್ ಅಥವಾ ಜನವರಿಯೊಳಗೆ ಪೂರ್ಣಗೊಳ್ಳಲಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ನಂತರನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

‘48 ಕಾಮಗಾರಿಗಳು ಪ್ರಾರಂಭ ವಾಗಿದ್ದು, ಕೆಲವು ಭಾಗಶಃ ಹಾಗೂ ಮತ್ತೆ ಕೆಲವು ಪೂರ್ಣಗೊಳ್ಳುವ ಹಂತದಲ್ಲಿವೆ. ಈ ಕಾಮಗಾರಿಗಳು ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿಲ್ಲ, ಅವುಗಳ ಲಾಭ ಸಂಪೂರ್ಣವಾಗಿ ಜಿಲ್ಲೆಯ ಜನರಿಗೆ ದೊರೆಯಬೇಕು. ಕೆಲವು ಕಾಮಗಾರಿಗಳನ್ನು ಇಡೀ ರಾಜ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ವಹಿಸಲಾಗುತ್ತಿದೆ. ಅವುಗಳಿಗೆ ವೇಗ ನೀಡಿ, ಡಿಸೆಂಬರ್ ಅಥವಾ ಜನವರಿ ವೇಳೆಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.

‘ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಮುಖವಾಗಿ ಅಂತರರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣವಾಗುತ್ತಿದೆ. ಬಹುಶಃ ರಾಜ್ಯದಲ್ಲಿರುವ ಅತಿ ಪ್ರಮುಖ ಈಜುಕೊಳದಲ್ಲಿ ಇದು ಒಂದಾಗಲಿದೆ. ಅದು ಉತ್ತಮವಾಗಿ ಬಳಕೆ ಯಾಗಬೇಕು. ಹಾಗಾದಲ್ಲಿ ರಾಜ್ಯ ಹಾಗೂ ಅಂತರರಾಜ್ಯ ಕ್ರೀಡಾಪಟುಗಳನ್ನು ಸೆಳೆಯಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

‘ಕದ್ರಿ ಉದ್ಯಾನದ ಕಾಮಗಾರಿ ಶೇ 90ರಷ್ಟು ಪೂರ್ಣಗೊಂಡಿರುವುದು, ಸಾರ್ವಜನಿಕ ಉಪಯೋಗಕ್ಕೆ ಬಳಕೆಯಾಗುತ್ತಿದೆ. ಕುಟುಂಬದ ಸದಸ್ಯರು ಇಲ್ಲಿ ವಿಹರಿಸಲು ಸಾಧ್ಯವಾಗುವ ಉನ್ನ ತೀಕರಣ ಕಾಮಗಾರಿಗಳನ್ನು ಕೈಗೊಳ್ಳ ಲಾಗಿದೆ. ವಾಹನ ನಿಲುಗಡೆ ಸಮಸ್ಯೆ ಬಗೆ ಹರಿಸಲು ಚರ್ಚೆ ನಡೆದಿದ್ದು, ಪರಿಹಾರ ಕಲ್ಪಿಸಿಕೊಡಲಾಗುವುದು’ ಎಂದರು.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಗರದ ಸರ್ವಿಸ್ ಬಸ್‌ಸ್ಟ್ಯಾಂಡ್‌ ಸಮಸ್ಯೆಗಳನ್ನು ಬಗೆಹರಿಸಿ, ಶಾಶ್ವತ ಕಾಯಕಲ್ಪ ನೀಡಲು ವ್ಯವಸ್ಥಿತ ಕಾಮಗಾರಿಗಳು ನಡೆಯುತ್ತಿದೆ. ಇದು ವರೆಗೆ ಇದ್ದ ಕೊರತೆಗಳನ್ನು ನೀಗಿಸಿ, ಉತ್ತಮ ಬಸ್ ಸ್ಟ್ಯಾಂಡ್‌ ಕೆಲವೇ ತಿಂಗಳಲ್ಲಿ ನಿರ್ಮಾಣವಾಗಲಿದೆ’ ಎಂದರು.

‘ಕಾಮಗಾರಿಗಳ ಪರಿಶೀಲನೆಗೆ ಹೋದಾಗ ಕೆಲವೆಡೆ ಸಮಸ್ಯೆಗಳ ಬಗ್ಗೆ ಸ್ಥಳೀಯರು ಗಮನ ಸೆಳೆದಿದ್ದಾರೆ. ಕೆಲವೊಂದು ಕಡೆ ಮಾರ್ಪಾಡುಗಳನ್ನು ಮಾಡಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಮುಖವಾಗಿ ಮಳೆಗಾಲದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದಾಗಿ ಜನಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರ ವಹಿಸಲು ತಿಳಿಸಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಸಹಕಾರವೂ ಅಗತ್ಯ’ ಎಂದು ಸಚಿವರು ಕೋರಿದರು.

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಸ್ಮಾರ್ಟ್ ಸಿಟಿ ಎಂ.ಡಿ. ಪ್ರಶಾಂತ್ ಕುಮಾರ್ ಮಿಶ್ರ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್‌, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳಾದ ಅರುಣ್ ಪ್ರಭಾ, ಕೆ.ಎಸ್. ಲಿಂಗೇಗೌಡ, ಚಂದ್ರಕಾಂತ್, ರಾಘವೇಂದ್ರ, ಮಂಜುಕೀರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT