ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಬಂಡಾಯದ ಬಿಸಿ?

Published : 13 ಮೇ 2024, 15:09 IST
Last Updated : 13 ಮೇ 2024, 15:09 IST
ಫಾಲೋ ಮಾಡಿ
Comments

ಮಂಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರ ಹೆಸರು ಅಂತಿಮಗೊಂಡಿದೆ. ಈ ಕ್ಷೇತ್ರದಲ್ಲಿ ಹಿಂದಿನಿಂದಲೂ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಆ ಪಕ್ಷದ ನಾಯಕರೊಬ್ಬರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಬಿವಿಪಿ ಮುಖಂಡರಾಗಿದ್ದ ಹರೀಶ್‌ ಆಚಾರ್‌ ಹಾಗೂ ರಮೇಶ್‌ ಕೆ. ಅವರು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಟಿಕೆಟ್‌ ಗಿಟ್ಟಿಸಲು ಕೊನೆಯ ಕ್ಷಣದವರೆಗೂ ಪ್ರಯತ್ನ ನಡೆಸಿದ್ದರು. ಆದರೆ, ಜೆಡಿಎಸ್‌ ಜೊತೆಗಿನ ಮೈತ್ರಿ ಪ್ರಕಾರ ಈ ಕ್ಷೇತ್ರದ ಹಾಲಿ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರಿಗೆ ಈ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ. ಈ ನಿರ್ಧಾರವು ಜಿಲ್ಲೆಯ ಟಿಕೆಟ್‌ ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ.

ಮತದಾರರ ಪಟ್ಟಿಯಲ್ಲಿ ಶಿಕ್ಷಕದ ಹೆಸರು ಸೇರ್ಪಡೆಗೆ ಅವಿರತ ಶ್ರಮಿಸಿದ್ದ ಹರೀಶ್‌ ಆಚಾರ್‌ ಟಿಕೆಟ್‌ ಕೈತಪ್ಪಿದ್ದರಿಂದ ಬಂಡಾಯವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್‌ ಸದಸ್ಯರಾಗಿ ಎರಡು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಪ್ರಸ್ತುತ ವಿಶ್ವಕರ್ಮ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರು ಆಗಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವ ವಿಶ್ವಾಸದಿಂದ ಶಿಕ್ಷಕರ ಸಮಸ್ಯೆಗಳಿಗೆ ಸಂಬಂಧಿಸಿದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಹಿಸುತ್ತಿದ್ದರು. 

ಟಿಕೆಟ್‌ ಕೈತಪ್ಪಿದ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷಕ್ಕಾಗಿ ಕೆಲಸ ಮಾಡಿದ್ದೆ. ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆ ಇತ್ತು’ ಎಂದರು. ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಲು ನಿರಕರಿಸಿದರು. ಪಕ್ಷದ ಮೂಲಗಳ ಪ್ರಕಾರ ಅವರು ಬಂಡಾಯವಾಗಿ ಸ್ಪರ್ಧೆ ಮಾಡುವುದು ಖಚಿತ. ಹಾಗೂ ಅದಕ್ಕೆ ಬೇಕಾದ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ.

ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿಯ ಇನ್ನೊಬ್ಬ ಮುಖಂಡ ರಮೇಶ್‌ ಕೆ. ‘ಪಕ್ಷೇತರವಾಗಿ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಸಂಘ ಪರಿವಾರ ಹಾಗೂ ಎಬಿವಿಪಿ ಸಂಘಟನೆಗಾಗಿ ಕೆಲಸ ಮಾಡುತ್ತಾ ಬೆಳೆದವ ನಾನು. ಈ ಸಲ ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್‌  ಆಕಾಂಕ್ಷಿ ಆಗಿದ್ದುದ್ದು ನಿಜ. ಸಾಕಷ್ಟು ಶಿಕ್ಷಕರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಶ್ರಮಿಸಿದ್ದೇನೆ. ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯು ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಈ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ’ ಎಂದು ಅವರು ‘ಪ್ರಜಾವಾಣಿ‘ಗೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT