ಗುರುವಾರ , ಜೂನ್ 4, 2020
27 °C
ದ.ಕ. ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿನ ಮೂಲ ಪತ್ತೆ

ಆರೋಗ್ಯ ವಿವಿ ತಜ್ಞರ ತಂಡ ಜಿಲ್ಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ವ್ಯಾಪಕವಾಗಿ ಹರಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಈ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸಲು ಮುಂದಾಗಿದೆ. ಇದಕ್ಕಾಗಿ ಬೆಂಗಳೂರಿನಿಂದಲೂ ಪರಿಣತರ ತಂಡವೊಂದು ಜಿಲ್ಲೆಗೆ ಬರಲಿದೆ.

ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕು ಹರಡಲು ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆ ಹಾಗೂ ಬಂಟ್ವಾಳದ ಕಸಬಾ ಪ್ರದೇಶ ಕಾರಣವಾಗಿದ್ದು, ಈ ಎರಡೂ ಸ್ಥಳಗಳಿಗೆ ಸೋಂಕು ಎಲ್ಲಿಂದ ಬಂದಿದೆ ಎನ್ನುವುದನ್ನು ಈವರೆಗೆ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಈ ಆಸ್ಪತ್ರೆಯ ಸಂಪರ್ಕದಿಂದ ದಕ್ಷಿಣ ಕನ್ನಡದಲ್ಲಿ 18, ಭಟ್ಕಳದಲ್ಲಿ 21 ಹಾಗೂ ಉಡುಪಿ ಜಿಲ್ಲೆಯಲ್ಲಿ ಎರಡು ಕೋವಿಡ್‌–19 ಪ್ರಕರಣಗಳು ಸೇರಿ ಒಟ್ಟು 41 ಮಂದಿಗೆ ಸೋಂಕು ತಗಲಿದೆ.

ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ತಂಡವು, ಈಗಾಗಲೇ ಪರಿಶೀಲನೆ ನಡೆಸಿ, ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಸೋಂಕು ಕೇರಳದಿಂದ ಹರಡಿರಬಹುದು ಎಂಬ ಶಂಕೆ ವರದಿಯಲ್ಲಿ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆಗಾಗಿ ಕೇರಳ ಸರ್ಕಾರದಿಂದ ಮಾಹಿತಿ ಪಡೆಯಬೇಕಾಗಿದೆ. ಈ ಹಿಂದೆ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಕೇರಳದ ಜನರ ಮಾಹಿತಿ ಒದಗಿಸಲು ಕೋರಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಈಗಾಗಲೇ ರಾಜ್ಯ ಸರ್ಕಾರ ಪತ್ರ ಬರೆಯಲಾಗಿದೆ.

ಕೇರಳದಲ್ಲಿ ಕೋವಿಡ್‌–19 ಮೊದಲ ಪ್ರಕರಣ ಜನವರಿ 30 ರಂದು ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಫೆಬ್ರುವರಿ 1 ರಿಂದ ಏ.20 ರವರೆಗೆ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳ ಮಾಹಿತಿಯನ್ನು ಆರೋಗ್ಯ ಇಲಾಖೆ ಕಲೆ ಹಾಕಿದೆ.

ಈ ಅವಧಿಯಲ್ಲಿ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಒಟ್ಟು 1,100 ಮಂದಿ ಹೊರರೋಗಿಗಳು ಮತ್ತು 177 ಮಂದಿ ಒಳರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ಎಲ್ಲಾ ಜನರನ್ನು ಕೋವಿಡ್–19 ಪರೀಕ್ಷೆಗೆ ಒಳಪಡಿಸಿದರೆ, ಸೋಂಕು ಎಲ್ಲಿಂದ ಪ್ರಾರಂಭವಾಯಿತು ಎನ್ನುವುದನ್ನು ಪತ್ತೆ ಹಚ್ಚಲು ಸಾಧ್ಯವಿದೆ ಎಂಬ ಅಭಿಪ್ರಾಯ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳದ್ದಾಗಿದೆ.

‘ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಅಂಕಿ ಅಂಶವನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿದ್ದು, ಕೇರಳ ಸರ್ಕಾರದಿಂದ ಈ ರೋಗಿಗಳ ಮಾಹಿತಿ ಪಡೆಯಬೇಕಾಗಿದೆ. ಆ ಬಳಿಕ ಸೋಂಕಿನ ಮೂಲದ ಬಗ್ಗೆ ಒಂದು ನಿರ್ಣಯಕ್ಕೆ ಬರಲು ಸಾಧ್ಯವಾಗಲಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಫಸ್ಟ್‌ ನ್ಯೂರೋ ಸಿಬ್ಬಂದಿಗೆ ಹೋಂ ಕ್ವಾರಂಟೈನ್‌

ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದ್ದು, ಅವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ಒಟ್ಟು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಇಲ್ಲಿನ ಜನರ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ವಿಳಂಬವಾಗಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಹೊರಬಿಡಲು ತಡವಾಗಿದೆ. ಇದೀಗ 22 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. ಪೂರ್ತಿ 28 ದಿನ ಮುಗಿಯುವವರೆಗೆ ಅವರು ಮನೆಯಲ್ಲಿ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ.

ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಲ್ಲಿದ್ದ ಬಂಟ್ವಾಳ ಪೇಟೆಯ 50 ವರ್ಷದ ಮಹಿಳೆ ಏ.19 ರಂದು ಮೃತಪಟ್ಟಿದ್ದು, ನಂತರ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗಿತ್ತು. ಅಲ್ಲದೇ, ಆಸ್ಪತ್ರೆಯನ್ನು ಕ್ವಾರಂಟೈನ್‌ ಕೇಂದ್ರವಾಗಿ ಮಾರ್ಪಡಿಸಿ, ಅಲ್ಲಿ ಇದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.