ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಕೋವಿಡ್–19 ಬಾಧಿಸಿರುವ 9 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಿಗೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದರು.
ಸಂಸದ ನಳಿನ್‌ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ 29,351 ರೆಗ್ಯುಲರ್, 694 ಖಾಸಗಿ, 2,050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 32,636 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿರುವ ಮಕ್ಕಳು ಒಂದು ವೇಳೆ ಕೋವಿಡ್–19 ದೃಢಪಟ್ಟಲ್ಲಿ ಪೋಷಕರು ಶನಿವಾರದೊಳಗೆ ಮಾಹಿತಿ ನೀಡುವಂತೆ ತಿಳಿಸಲಾಗಿತ್ತು. ಅದರಂತೆ 9 ಮಂದಿ ಹೆಸರು ನೋಂದಾಯಿಸಿದ್ದಾರೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇರಳದ 441 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ, 121 ಮಕ್ಕಳು ತಲಪಾಡಿ ಮೂಲಕ ಬರಲಿದ್ದು, ಅವರಿಗೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳಲ್ಲಿ ಪ್ರವೇಶ ಪತ್ರದ ಆಧಾರದಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮನವಿ ಮಾಡಲಾಗಿದೆ. ಶಿಕ್ಷಣ ಇಲಾಖೆಯು 4 ಬಸ್‌ಗಳನ್ನು ತಲಪಾಡಿ ಗಡಿಯಲ್ಲಿ ಇರಿಸಲು ಸೂಚಿಸಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ವಾಸವಿರುವ ಪ್ರತಿ 4 ಕಿ.ಮೀ. ವ್ಯಾಪ್ತಿಯಲ್ಲೇ ಪರೀಕ್ಷಾ ಕೇಂದ್ರಗಳಿವೆ. ಈಗಾಗಲೇ ಸುಮಾರು 50 ವಿದ್ಯಾರ್ಥಿಗಳು ಬಸ್ ವ್ಯವಸ್ಥೆಗಾಗಿ ಬೇಡಿಕೆ ಸಲ್ಲಿಸಿದ್ದು, ಅವರಿಗೆ ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಈ ಬಾರಿ ಮಕ್ಕಳ ಜೊತೆಗೆ ಶಿಕ್ಷಕರಿಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಹೊಸತಾಗಿದ್ದು, ಒಎಂಆರ್ ಶೀಟ್ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಮಾದರಿ ಪರೀಕ್ಷೆಯನ್ನು ಕೂಡಾ ನಡೆಸಲಾಗಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳೂ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲ, ಆತಂಕವಿಲ್ಲದೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯಿಂದ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.
ವಸತಿ ಸಂಕೀರ್ಣಗಳು, ವಸತಿ ನಿವೇಶನಗಳ ಹಂಚಿಕೆ ವೇಳೆ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಕ್ರಮಗಳೊಂದಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿರ್ದೇಶನ ನೀಡಿದರು.
ಕೋಟೆಕಾರು ಗ್ರಾಮದಲ್ಲಿ ವಾರದೊಳಗೆ ನಿಗದಿತ ಜಾಗದಲ್ಲಿ ತ್ಯಾಜ್ಯ ಘಟಕ ನಿರ್ಮಾಣದ ಪ್ರಗತಿಯನ್ನು ಆಡಳಿತಾಧಿಕಾರಿ ಮೂಲಕ ಮಾಡಿಸಬೇಕು. ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ರಾಜೇಶ್ ನಾಯ್ಕ, ಉಮಾನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ಅಧಿಕಾರಿಗಳು ಭಾಗವಹಿಸಿದ್ದರು.
‘ಬಿ.ಸಿ.ರೋಡ್–ಅಡ್ಡಹೊಳೆ ಕಾಮಗಾರಿ ಸೆಪ್ಟೆಂಬರ್‌ನಲ್ಲಿ’
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಬಿ.ಸಿ.ರೋಡ್‌ನಿಂದ ಪೆರಿಯಶಾಂತಿಯವರೆಗೆ 48 ಕಿ.ಮೀ. ಹಾಗೂ ಪೆರಿಯಶಾಂತಿಯಿಂದ ಗುಂಡ್ಯ ಅಡ್ಡಹೊಳೆವರೆಗೆ 15 ಕಿ.ಮೀ. ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶುಮೋಹನ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ₹1450 ಕೋಟಿ ವೆಚ್ಚದ ಯೋಜನೆಗೆ ಎರಡು ಹಂತದಲ್ಲಿ ಟೆಂಡರ್ ಮಾಡಲಾಗಿದೆ ಎಂದರು.
ಬಿ.ಸಿ.ರೋಡ್‌ನಿಂದ ಪೆರಿಯ ಶಾಂತಿವರೆಗಿನ ಕಾಮಗಾರಿಗೆ ತಾಂತ್ರಿಕ ಬಿಡ್ ಅಂತಿಮವಾಗಿದೆ. ಪೆರಿಯಶಾಂತಿಯಿಂದ ಅಡ್ಡಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ರಸ್ತೆ ತಿರುವಿಗೆ ಅನುಮತಿ ಕೋರಲಾಗಿದೆ. ಕಾಮಗಾರಿಯು ಮಹಾರಾಷ್ಟ್ರದ ಎಸ್‌ಎಂ ಔಟೆಡ್ ಕಂಪನಿಗೆ ನೀಡಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಕಾಮಗಾರಿ ಆರಂಭವಾಗಲಿದೆ. ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.