ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತಂಕವಿಲ್ಲದೇ ಪರೀಕ್ಷೆಗೆ ಹಾಜರಾಗಿ

ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸಲಹೆ
Last Updated 20 ಜೂನ್ 2020, 13:51 IST
ಅಕ್ಷರ ಗಾತ್ರ

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಯಪಡುವ ಅಗತ್ಯವಿಲ್ಲ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಈಗಾಗಲೇ ಮಾಡಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದರು.

ನಗರದ ಕಪಿತಾನಿಯೋ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಆಧ್ಯಕ್ಷತೆ ವಹಿಸಿ, ಕರಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಕೊರೊನಾ ವೈರಸ್‌ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಟಿಯಿಂದ ಪ್ರತಿ ಕೇಂದ್ರದ ಪ್ರತಿಯೊಂದು ಕೊಠಡಿಗಳನ್ನು ನಿತ್ಯವು ಸ್ಯಾನಿಟೈಸ್‌ ಮಾಡುವುದು ಕಡ್ಡಾಯವಾಗಿದೆ. ಪರೀಕ್ಷೆ ಕೇಂದ್ರದಲ್ಲಿ ಆರೋಗ್ಯ ಕೌಂಟರ್ ಸ್ಥಾಪಿಸಿ, ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ ಮೂಲಕ ಪರೀಕ್ಷಿಸಿದ ನಂತರ ಕೊಠಡಿಗೆ ತೆರಳಲು ಅವಕಾಶ ಮಾಡಿ ಕೋಡಬೇಕು ಎಂದು ಹೇಳಿದರು.

ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಕೊಠಡಿಗಳ ವ್ಯವಸ್ಥೆ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಾಸ್ಕ್ ಧರಿಸದೇ ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಗಡಿ ಭಾಗದ ಮಕ್ಕಳು ಸಮಯಕ್ಕೆ ಸರಿಯಾಗಿ ಬರುವಂತೆ ಆಯಾ ಶಾಲೆಯ ಶಿಕ್ಷಕರು ಜವಾಬ್ದಾರಿ ವಹಿಸಬೇಕು. ಎಲ್ಲ ಕೊಠಡಿಗಳಿಗೂ ಜನರೇಟರ್, ಸಿಸಿಟಿವಿ ಕ್ಯಾಮೆರಾ ಅವಳವಡಿಕೆ ಮಾಡುವುದರ ಜತೆಗೆ ಶಾಲೆಯಲ್ಲಿ ಶೌಚಾಲಯ ಸ್ವಚ್ಛವಾಗಿರಬೇಕು ಎಂದು ತಿಳಿಸಿದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ವಿದ್ಯಾರ್ಥಿಗಳು ಮೊಬೈಲ್‌ ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು.

ಯಾವುದೇ ವಿದ್ಯಾರ್ಥಿಗೆ ಕೆಮ್ಮು,, ಶೀತ, ನೆಗಡಿ ಸೇರಿದಂತೆ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಸಂಬಂಧಿಸಿದ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕು. ಇದರ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರದ್ದಾಗಿರುತ್ತದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿದರು. ಡಿಡಿಪಿಐ ಮಲ್ಲೇಸ್ವಾಮಿ, ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ಕೇರಳದ 367 ವಿದ್ಯಾರ್ಥಿಗಳು

ಮಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಇದೇ 25 ರಿಂದ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವಿವಿಧ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಕೇರಳದ ಸುಮಾರು 367 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್‌ ಮೂಲಕ ಪ್ರವೇಶ ಪತ್ರವನ್ನು ರವಾನಿಸಿದ್ದು, ಪ್ರವೇಶ ಪತ್ರ ಸಿಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ನೋಡಲ್ ಅಧಿಕಾರಿಗಳ ಮೂಲಕ ನಿಗದಿಪಡಿಸಿದ ಗಡಿ ಪ್ರದೇಶದಲ್ಲೇ ಪ್ರವೇಶ ಪತ್ರ ವಿತರಿಸಲಾಗುವುದು. ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಪ್ರವೇಶ ಪತ್ರ (ವಾಟ್ಸ್‌ಆ್ಯಪ್‌ ಮೂಲಕ ಅಥವಾ ಮೂಲ ಪ್ರತಿ, ಜೆರಾಕ್ಸ್ ಪ್ರತಿ) ಹಾಜರುಪಡಿಸಿದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಕರ್ನಾಟಕಕ್ಕೆ ಪ್ರವೇಶಿಸಲು ಅವಕಾಶವಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವ್ಯವಸ್ಥೆ ಮಾಡಲಾಗುವ ಬಸ್‌ಗಳ ಮೂಲಕ ಪ್ರಯಾಣಿಸಿ, ಪರೀಕ್ಷೆ ಮುಗಿದ ಬಳಿಕ ವಾಪಸ್‌ ಕೇರಳಕ್ಕೆ ಮರಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಊಟ ತರಬೇಕು

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಊಟ, ನೀರನ್ನು ಕಡ್ಡಾಯ ತರಬೇಕು. ಪರೀಕ್ಷೆಯ ಸಮಯದಲ್ಲಿ ಅಂತರ ಪಾಲಿಸುವುದರ ಜತೆಗೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT