ಮಂಗಳವಾರ, ಸೆಪ್ಟೆಂಬರ್ 28, 2021
21 °C
ಜಿಲ್ಲೆಯಾದ್ಯಂತ ಪರೀಕ್ಷೆ ಸುಗಮ, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ

ಎಸ್ಸೆಸ್ಸೆಲ್ಸಿ: 28,014 ವಿದ್ಯಾರ್ಥಿಗಳು ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಭಾಷಾ ವಿಷಯಗಳಿಗೆ ಸಂಬಂಧಿಸಿದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಜಿಲ್ಲೆಯಾದ್ಯಂತ ಗುರುವಾರ ಸುಗಮವಾಗಿ ನಡೆಯಿತು.

ಬೆಳಗಿನ ವೇಳೆ ಸಣ್ಣ ಮಳೆಯಿಂದ ಕಾರಣ ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ಕೊಂಚ ತೊಂದರೆ ಅನುಭವಿಸಿದರು. ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 28,014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆ ಮುಗಿಸಿದ ಖುಷಿಯಲ್ಲಿ ಮಕ್ಕಳು ಸ್ನೇಹಿತರೊಂದಿಗೆ ಹರಟುತ್ತಿದ್ದ ದೃಶ್ಯ, ಕೇಂದ್ರಗಳ ಹೊರಗೆ ಕಂಡುಬಂತು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಮಕ್ಕಳ ಥರ್ಮಲ್ ಸ್ಕ್ಯಾನಿಂಗ್ ನಡೆಸಿ, ಕೊಠಡಿಗೆ ಕಳುಹಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದವರು ವಿದ್ಯಾರ್ಥಿಗಳಿಗೆ ನೆರವಾದರು. ಪರೀಕ್ಷಾ ಕೊಠಡಿಗಳ ಸಿದ್ಧತೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ವೀಕ್ಷಿಸಿದರು. ಡಿಡಿಪಿಐ ಮಲ್ಲೇಸ್ವಾಮಿ ಅವರ ಜೊತೆಗಿದ್ದರು. 

ಅನಾರೋಗ್ಯದ ಕಾರಣ 37 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು. 116 ವಿದ್ಯಾರ್ಥಿಗಳು ಸರ್ಕಾರಿ, ಖಾಸಗಿ ವಸತಿ ನಿಲಯಗಳಲ್ಲಿ ಉಳಿದು, ಪರೀಕ್ಷೆಗೆ ಬಂದಿದ್ದರು. ಕೋವಿಡ್ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡಿದ್ದ 161 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ನೆರೆಯ ರಾಜ್ಯಗಳಿಂದ ಬಂದಿದ್ದ 331 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.

ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ

ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಗಳಲ್ಲಿ ಒಟ್ಟು 15 ವಿದ್ಯಾರ್ಥಿಗಳು ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆದರು. ಆರೋಗ್ಯ ಸಿಬ್ಬಂದಿ ಕೊಠಡಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದರು.

ಕೋವಿಡ್ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರಲು ಆಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿತ್ತು. ಇವುಗಳ ಹೊಣೆಗಾರಿಕೆಯನ್ನು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗೆ ವಹಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು