ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ತಗ್ಗಿಸಲು ಇನ್ನಷ್ಟು ಕಟ್ಟುನಿಟ್ಟು: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ನಗರ, ತಾಲ್ಲೂಕು ಮಟ್ಟದಲ್ಲಿ ವಿಚಕ್ಷಣಾ ದಳಗಳು
Last Updated 8 ಜೂನ್ 2021, 4:21 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 5 ಕ್ಕೆ ಇಳಿಸುವ ನಿಟ್ಟಿನಲ್ಲಿ ಜೂನ್‌ 14 ರವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಇನ್ನಷ್ಟು ಕಟ್ಟುನಿಟ್ಟು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯಕ್ಕೆ ಪಾಸಿಟಿವಿಟಿ ದರ ಶೇ 20ರಿಂದ 21ರಷ್ಟಿದ್ದು, ಅದನ್ನು ಶೇ. 5ಕ್ಕೆ ಇಳಿಸಿ, ಲಾಕ್‌ಡೌನ್‌ ಸಡಿಲಿಸಲು ಜನರ ಸಹಕಾರ ಅಗತ್ಯವಾಗಿದೆ ಎಂದರು.

ಜಿಲ್ಲೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಜನರ ಅನಗತ್ಯ ಸಂಚಾರ ತಡೆಯುವಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಅವಧಿ ಮೀರಿ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುವುದು, ಕೋವಿಡ್ ನಿಯಮ ಪಾಲನೆ ಮಾಡದಿರುವ ಕುರಿತು ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ 10 ವಿಚಕ್ಷಣ ದಳಗಳು ಕಾರ್ಯ ನಿರ್ವಹಿ ಸಲಿವೆ. ಗ್ರಾಮಾಂತರದಲ್ಲಿ ತಾಲ್ಲೂಕು ಮಟ್ಟದಲ್ಲಿ 2 ರಿಂದ 3ರಷ್ಟು ವಿಚಕ್ಷಣಾ ತಂಡಗಳು ಕಾರ್ಯ ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.

ಹೋಂ ಐಸೊಲೇಷನ್‌ನಲ್ಲಿ ಇರುವ ಸೋಂಕಿತರಿಗೆ ಮನೆಗಳಲ್ಲಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು, ರಕ್ತದೊತ್ತಡ, ಮಧುಮೇಹದಂತಹ ಇತರ ಅನಾರೋಗ್ಯ ಸಮಸ್ಯೆಗಳಿದ್ದಲ್ಲಿ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಪಡೆಗಳು ಕಾರ್ಯ ನಿರ್ವಹಿ ಸುತ್ತಿದ್ದು, ಈ ಕಾರ್ಯಪಡೆಗಳಿಗೆ ಸರ್ಕಾರೇತರ ಸಂಸ್ಥೆಗಳ ಸದಸ್ಯರ ಸಹಕಾರದೊಂದಿಗೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. ಕೋವಿಡ್ ಮುಕ್ತ ಗ್ರಾಮಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ತಿಳಿಸಿದರು.

ಲಸಿಕಾ ಕಾರ್ಯಕ್ರಮ: 18ರಿಂದ 44 ವರ್ಷ ವಯಸ್ಸಿನ 10,92,144 ಮಂದಿ ಅರ್ಹರಲ್ಲಿ 51,919 ಮಂದಿ ಪ್ರಥಮ ಡೋಸ್ ಪಡೆಯುವ ಮೂಲಕ ಶೇ. 4.75ರಷ್ಟು ಮಾತ್ರ ಸಾಧನೆಯಾಗಿದೆ. 118 ಮಂದಿ ದ್ವಿತೀಯ ಡೋಸ್ ಪಡೆದಿದ್ದಾರೆ. 45ರಿಂದ 60 ವರ್ಷ ವಯಸ್ಸಿನವರಲ್ಲಿ 1,37,993 ಜನರಿಗೆ ಪ್ರಥಮ ಡೋಸ್ (ಶೇ. 33.16 ಸಾಧನೆ) ಹಾಗೂ 27,314 ಮಂದಿ ದ್ವಿತೀಯ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲಿನ ಅರ್ಹರಲ್ಲಿ 1,29,686 ಮಂದಿ ಪ್ರಥಮ (ಶೇ. 64.52) ಹಾಗೂ 56,696 ಮಂದಿ ದ್ವಿತೀಯ ಡೋಸ್ ಲಸಿಕೆ ನೀಡಲಾಗಿದೆ ಎಂದು ಎಂದು ಡಾ.ರಾಜೇಂದ್ರ ಮಾಹಿತಿ ನೀಡಿದರು.

ಕಮಿಷನರ್ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾ ಧಿಕಾರಿ ಋಷಿಕೇಶ್ ಸೋನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಇದ್ದರು.

‘2,410 ವಾಹನ ವಶಕ್ಕೆ’

ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಈವರೆಗೆ 2,410 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್ ಎನ್‌. ಶಶಿಕುಮಾರ್ ತಿಳಿಸಿದರು.

ಮಾಸ್ಕ್ ನಿಯಮ ಉಲ್ಲಂಘನೆ ಕುರಿತಂತೆ 13,578 ಪ್ರಕರಣಗಳು ದಾಖಲಾಗಿದ್ದು, ಸುರಕ್ಷಿತ ಅಂತರಕ್ಕೆ ಉಲ್ಲಂಘನೆಗೆ ಸಂಬಂಧಿಸಿದಂತೆ 91, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ 253 ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 286 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

2ನೇ ಅಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 92 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದು, ಸದ್ಯ 22 ಸಕ್ರಿಯ ಪ್ರಕರಣಗಳಿವೆ. ಲಾಕ್‌ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸಿ ಕೋವಿಡ್‌ ನಿಯಂತ್ರಣದಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT