ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹2 ಸಾವಿರ ದರದಲ್ಲಿ ಮರಳು ಒದಗಿಸಿ

ಸಂಸದ ನಳಿನ್‌ಕುಮಾರ್‌ಗೆ ಶಾಸಕ ಖಾದರ್‌ ಆಗ್ರಹ
Last Updated 18 ಅಕ್ಟೋಬರ್ 2020, 6:41 IST
ಅಕ್ಷರ ಗಾತ್ರ

ಮಂಗಳೂರು: ಸಂಸದ ನಳಿನ್‌ಕುಮಾರ್ ಕಟೀಲ್ ₹2 ಸಾವಿರಕ್ಕೆ ಮರಳು ಒದಗಿಸುವುದಾಗಿ ಭರವಸೆ ನೀಡಿ ತಿಂಗಳು ಕಳೆದಿದೆ. ಇನ್ನೂ ಕೊಟ್ಟ ಭರವಸೆ ಈಡೇರಿಸಿಲ್ಲ. ಕೂಡಲೇ ಮರಳು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಾಗುತ್ತಾ ಬಂದಿದೆ. ಈಗಾಗಲೆ ಮನೆ ಸೇರಿದಂತೆ ಕಟ್ಟಡಗಳ ನಿರ್ಮಾಣಕ್ಕೆ ಮರಳು ಪೂರೈಕೆಯ ವ್ಯವಸ್ಥೆ ಮಾಡಬೇಕಿತ್ತು. ಆದರೆ ಬಿಜೆಪಿ ಜನಪ್ರತಿ ನಿಧಿಗಳು ಅದನ್ನು ಮಾಡದೆ ಕಾಲಹರಣ ಮಾಡುತ್ತಿದ್ದಾರೆ’ ಎಂದು ದೂರಿದರು.

ಇದೀಗ ಕರಾವಳಿಗೆ ಪ್ರತ್ಯೇಕ ನೀತಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿ ಏನು, ಕರ್ನಾಟಕದಿಂದ ಹೊರತಾಗಿದೆಯೇ ಎಂದು ಪ್ರಶ್ನಿಸಿದ ಅವರು, ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವರು ಮರಳು ಗಣಿಗಾರಿಕೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಸಭೆ ಕರೆಯಬೇಕು. ಶೀಘ್ರ ಜನಸಾಮಾನ್ಯರಿಗೆ ಮರಳು ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಏನು ಮಾಡಬಹುದು ಎಂಬ ಸ್ಪಷ್ಟತೆಯೇ ಇನ್ನೂ ಸರ್ಕಾರಕ್ಕೆ ಇಲ್ಲ ಎಂದು ಖಾದರ್‌ ದೂರಿದರು.

ದಿನಕ್ಕೊಂದು ಹೇಳಿಕೆ ನೀಡುವುದರಿಂದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ಮಂಡಳಿಯ ಮುಖ್ಯಸ್ಥರನ್ನು ಗೊಂದಲಕ್ಕೆ ಸಿಲುಕಿಸುತ್ತಿದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಮೈಲುಗಲ್ಲಾಗಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಕರಿಗೆ ವೇತನ ನೀಡಲಾಗದೇ ಇತರರ ಮುಂದೆ ಕೈಚಾಚುವಂತಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಡ್ಡಿರಹಿತ ಸಾಲ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡದೇ ಸೂಕ್ತ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್, ಟಿ.ಕೆ.ಸುಧೀರ್, ಶುಭೋದಯ ಆಳ್ವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT