ಗುರುವಾರ , ಡಿಸೆಂಬರ್ 2, 2021
19 °C
ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಆಗ್ರಹ

‘ಪುತ್ತೂರು ಚಲೋ’ ಪ್ರತಿಭಟನೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ‘ಸಂಘ ಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕೊಂಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದಲ್ಲಿ ಸಿಎಫ್ಐ ಸಂಘಟನೆಯ ವತಿಯಿಂದ ‘ಪುತ್ತೂರು ಚಲೋ’ ಪ್ರತಿಭಟನೆ ನಡೆಸಲಾಗುವುದು’ ಎಂದು ಸಿಎಫ್ಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಎಚ್ಚರಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಂಬೆಟ್ಟು ಕಾಲೇಜಿನಲ್ಲಿ ನಡೆದಿರುವ ಪ್ರಕರಣವನ್ನು ಗಮನಿಸಿದಾಗ, ಸಂಘ ಪರಿವಾರವು ವಿದ್ಯಾರ್ಥಿಗಳ ಕೈಗೆ ಆಯುಧಗಳನ್ನು ನೀಡಿ ಕೋಮು ಗಲಭೆ ನಡೆಸಲು ಪ್ರಚೋದನೆ ನಡೆಸುತ್ತಿರುವುದು ಸ್ಪಷ್ಟವಾಗುತ್ತದೆ. ಹೀಗೆ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಮೌನವಾಗಿರುವುದು ಅನುಮಾನಾಸ್ಪದವಾಗಿದೆ. ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಈವರೆಗೆ ಪ್ರಕರಣ ದಾಖಲಾಗಿಲ್ಲ’ ಎಂದರು.

‘ಘಟನೆ ಬಗ್ಗೆ ತನಿಖೆ ನಡೆಸಲು ಉನ್ನತ ಅಧಿಕಾರಿಗಳನ್ನು ನೇಮಿಸಬೇಕು. ತ್ರಿಶೂಲದಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ, ಶಿಕ್ಷೆ ನೀಡಿ ಅಮಾಯಕ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇತ್ತೀಚೆಗೆ ಸಂಘ ಪರಿವಾರದ ಇಬ್ಬರು ಪ್ರಮುಖರು ಮಾಡಿದ ಪ್ರಚೋದನಕಾರಿ ಭಾಷಣವೇ ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಕಾರಣವಾಗಿದೆ. ಕೊಂಬೆಟ್ಟು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ನಾಲ್ಕು ಹಲ್ಲೆ ಪ್ರಕರಣಗಳು ನಡೆದಿವೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳ ಜತೆಗೆ ಪ್ರಚೋದನೆ ನೀಡಿದವರನ್ನೂ ಬಂಧಿಸಬೇಕು’ ಎಂದು ಆಗ್ರಹಿಸಿದರು.

ಕೊಂಬೆಟ್ಟು ಕಾಲೇಜಿನಲ್ಲಿ ಮೊದಲ ಬಾರಿ ಹಲ್ಲೆ ನಡೆದಾಗ, ಪ್ರಾಂಶುಪಾಲದ ಜತೆ ಮಾತುಕತೆ ನಡೆಸಿದ್ದೆವು. ಈ ವೇಳೆ ಅವರು ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದರು. ಆದರೆ ಸಂಘ ಪರಿವಾರವು ಗೂಂಡಾಗಿರಿ ನಡೆಸಿದ್ದೇವೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಎಬಿವಿಪಿ ಮೂಲಕ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಗೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಮತ್ತೆ ಮೂವರ ಮೇಲೆ ತ್ರಿಶೂಲದಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದರು. ಸಿಎಫ್‌ಐ ಪ್ರಮುಖರಾದ ಸವಾದ್ ಕಲ್ಪರ್ಪ, ರಿಯಾಝ್ ಅಂಕತಡ್ಕ, ಮುಸ್ತಫಾ ಕೊಡಿಪ್ಪಾಡಿ, ಫಾರೂಕ್ ಕಬಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು