ಮಂಗಳೂರು: ಶಿಕ್ಷಕರ ಬಡ್ತಿ, ವರ್ಗಾವಣೆಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ 750ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದರು.
ಕೆಲ ಶಾಲೆಗಳಲ್ಲಿ ಇಬ್ಬರು ಮೂವರು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದು, ಅಂತಹ ಶಾಲೆಗಳಲ್ಲಿ ಪಾಠ ಪ್ರವಚನಕ್ಕೆ ಸಮಸ್ಯೆ ಎದುರಾಯಿತು.
‘ಸರ್ಕಾರಿ ಪ್ರಾಥಮಿಕ ಶಾಲೆಗಳ ಪದವೀಧರ ಪ್ರಾಥಮಿಕ ಶಿಕ್ಷಕರು ಮುಷ್ಕರದಲ್ಲಿ ಭಾಗವಹಿಸಿಲ್ಲ. ರಜೆ ಹಾಕಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಶಿಕ್ಷಕರ ಬದಲು ಬೇರೆ ಶಿಕ್ಷಕರು ತರಗತಿ ನಡೆಸುವ ಮೂಲಕ ಪಾಠ– ಪ್ರವಚನಕ್ಕೆ ಸಮಸ್ಯೆ ಆಗದಂತೆ ನೋಡಿಕೊಂಡಿದ್ದಾರೆ. ಪ್ರತಿಭಟನೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಶಾಲೆಯಲ್ಲೂ ತರಗತಿಗಳು ಸ್ಥಗಿತಗೊಂಡಿಲ್ಲ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.
‘ಕೆಲವೊಂದು ಶಾಲೆಗಳಲ್ಲಿ ಎರಡಕ್ಕಿಂತಲೂ ಹೆಚ್ಚು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದು, ಅಂತಹ ಶಾಲೆಗಳಲ್ಲಿ ತರಗತಿಗಳ ನಿರ್ವಹಣೆಗೆ ಸೋಮವಾರ ಸಮಸ್ಯೆ ಎದುರಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಶಿಕ್ಷಕರೊಬ್ಬರು ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಿವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಪಟಗಾರ ‘ಪ್ರಜಾವಾಣಿ‘ಗೆ ತಿಳಿಸಿದರು.