ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಿದರೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರ

Last Updated 20 ಜುಲೈ 2020, 15:08 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಸೋಂಕಿತರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ನಿರಾಕರಿಸಿ ವಾಪಸ್‌ ಕಳುಹಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಗರದ ಫಾದರ್‌ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಅವರು, ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆ ಹಾಗೂ ದಾಖಲಾಗಿರುವವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಪರಿಶೀಲನೆ ನಡೆಸಿದರು.

ಬಳಿಕ ಆಸ್ಪತ್ರೆಯ ಪ್ರಮುಖರೊಂದಿಗೆ ಸಭೆ ನಡೆಸಿದ ಸಚಿವರು, ‘ಜಿಲ್ಲೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಇಲ್ಲಿ ಕೋವಿಡ್‌ ಸೋಂಕಿತರು ಆಸ್ಪತ್ರೆ ಹುಡುಕಿಕೊಂಡು ಅಲೆದಾಡುವುದನ್ನು ಸರ್ಕಾರ ಸಹಿಸುವುದಿಲ್ಲ. ಯಾವುದೇ ಖಾಸಗಿ ಆಸ್ಪತ್ರೆಯೂ ಚಿಕಿತ್ಸೆ ನಿರಾಕರಿಸಿ ಸೋಂಕಿತರನ್ನು ವಾಪಸ್‌ ಕಳುಹಿಸುವಂತಿಲ್ಲ’ ಎಂದರು.

ರೋಗಿಯ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ಚಿಕಿತ್ಸೆಗೆ ದಾಖಲಿಸಿಕೊಳ್ಳುವ ಕ್ರಮವನ್ನು ಆಸ್ಪತ್ರೆಗಳು ಅನುಸರಿಸುವಂತಿಲ್ಲ. ಬಿಪಿಎಲ್‌, ಎಪಿಎಲ್‌ ಮತ್ತು ಸಾಮಾನ್ಯ ಕುಟುಂಬಗಳ ಎಲ್ಲ ಜನರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನೀಡುವಂತೆ ಸರ್ಕಾರ ಸೂಚಿಸಿದೆ. ಎಲ್ಲ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಶೇ 50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯ. ಕೋವಿಡ್‌ ಸೋಂಕಿತರ ಚಿಕಿತ್ಸೆಯ ಮೇಲೆ ನೇರವಾಗಿ ನಿಗಾ ಇರಿಸಲಾಗುವುದು ಎಂದು ತಿಳಿಸಿದರು.

ತಾಲೂಕುಗಳಲ್ಲೂ ಕೋವಿಡ್ ಕೇಂದ್ರ: ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ‘ಯಾವುದೇ ಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಆಸ್ಪತ್ರೆಗಳ ಮೇಲಿನ ಒತ್ತಡ ತಗ್ಗಲಿದೆ. ಜಿಲ್ಲಾ ಕೇಂದ್ರ ಮಾತ್ರವಲ್ಲದೇ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಕೋವಿಡ್‌ ಸೋಂಕಿತರ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದರು.

‘ನಮ್ಮ ಆಸ್ಪತ್ರೆಯಲ್ಲಿ ಸರ್ಕಾರದ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಇಲ್ಲಿಗೆ ಬರುವ ಎಲ್ಲ ಕೋವಿಡ್‌ ಸೋಂಕಿತರನ್ನು ದಾಖಲಿಸಿಕೊಂಡು, ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಫಾದರ್‌ ಮುಲ್ಲರ್ ವೈದ್ಯಕೀಯ ಕಾಲೇಜಿನ ನಿರ್ದೇಶಕ ರಿಚರ್ಡ್‌ ಕುಯೆಲ್ಲೋ ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರತ್ನಾಕರ್, ಆಸ್ಪತ್ರೆ ಆಡಳಿತಾಧಿಕಾರಿ ರುಡಾಲ್ಫ್ ರವಿ ಡೇಸಾ ಸಭೆಯಲ್ಲಿದ್ದರು.

ಕಡಿಮೆ ದರದಲ್ಲಿ ವೆಂಟಿಲೇಟರ್‌

‘ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳ ಸಂಖ್ಯೆ ಕಡಿಮೆ ಇರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆ ಪರಿಹರಿಸಲು ಕಡಿಮೆ ವೆಚ್ಚದ ವೆಂಟಿಲೇಟರ್‌ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಸುವ ಕುರಿತು ತಕ್ಷಣ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ 25,000 ರ‍್ಯಾಪಿಡ್‌ ಆಂಟಿಜೆನ್‌ ಪರೀಕ್ಷಾ ಕಿಟ್‌ ಮತ್ತು 50 ವೆಂಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮತ್ತು ಪೊಲೀಸರು ಬಂಧಿಸುವ ಆರೋಪಿಗಳಲ್ಲಿ ಸೋಂಕು ಪತ್ತೆಯಾದಾಗ ಅವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT