ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಹೆಸರಲ್ಲಿ ಅವಹೇಳನ, ಪ್ರಚೋದನೆಯ ಜಾಲ: ಇಬ್ಬರ ಬಂಧನ

Last Updated 15 ಏಪ್ರಿಲ್ 2020, 4:54 IST
ಅಕ್ಷರ ಗಾತ್ರ

ಮಂಗಳೂರು: ಕೊರೊನಾ ವೈರಸ್‌ ಸೋಂಕಿನ ವಿಷಯವನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಗಣ್ಯ ವ್ಯಕ್ತಿಗಳನ್ನು ಅವಹೇಳನ ಮಾಡುತ್ತಿದ್ದ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹಾಕುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ನಗರದ ಸೈಬರ್‌ ಅಪರಾಧ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಪುತ್ತೂರು ತಾಲ್ಲೂಕಿನ ಕಬಕ ಸಮೀ‍ಪದ ಉರಿಮಜಲು ನಿವಾಸಿ ಅಬ್ದುಲ್ ಬಶೀರ್‌ ಅಲಿಯಾಸ್‌ ನಿಸಾರ್‌ ಅಹ್ಮದ್ ಮತ್ತು ಬೆಳ್ತಂಗಡಿ ತಾಲ್ಲೂಕಿನ ಪಣಕಜೆ ನಿವಾಸಿ ಮೊಹ್ಮದ್‌ ಇಲ್ಯಾಸ್ ಬಂಧಿತರು. ತಾವು ಎಸ್‌ಡಿಪಿಐ ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಜೊತೆ ನಿಕಟ ನಂಟು ಹೊಂದಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ.

ಈ ರೀತಿಯ ಅವಹೇಳನ ಮತ್ತು ಪ್ರಚೋದನಕಾರಿ ಕೃತ್ಯಗಳ ಹಿಂದೆ ಬೃಹತ್‌ ಜಾಲವೊಂದು ಕಾರ್ಯನಿರ್ವಹಿಸುತ್ತಿರುವ ಮಾಹಿತಿಯನ್ನು ಆರೋಪಿಗಳು ನೀಡಿದ್ದಾರೆ. ಕೆಲವರು ವಿದೇಶಗಳಲ್ಲಿ ಕುಳಿತು ಈ ಕೆಲಸ ಮಾಡುತ್ತಿರುವ ಮಾಹಿತಿ ಲಭಿಸಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳು ‘ಮೈಕಾಲ್ತೊ ಬಿಸಯಾ’ ಎಂಬ ಫೇಸ್‌ಬುಕ್‌ ಪುಟವನ್ನು ತೆರೆದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಗರ ಪೊಲೀಸ್‌ ಕಮಿಷನರ್‌ ಡಾ.ಹರ್ಷ ಸೇರಿದಂತೆ ಹಲವರ ವಿರುದ್ಧ ಅವಹೇಳನಕಾರಿ ‍ಪೋಸ್ಟ್‌ಗಳನ್ನು ಹಾಕಿದ್ದರು.

ಆರೋಪಿಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ– 1897, ಮಾಹಿತಿ ತಂತ್ರಜ್ಞಾನ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ–2005 ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT