ಶನಿವಾರ, ಜನವರಿ 22, 2022
16 °C

ಕರಾವಳಿಯಲ್ಲಿ ತ್ರಿಶೂಲ ದೀಕ್ಷೆ: ಪೊಲೀಸರು ತನಿಖೆ ನಡೆಸಲಿ ಎಂದ ಯು.ಟಿ.ಖಾದರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರಾವಳಿಯಲ್ಲಿ ಕೆಲವು ಕಡೆ ತ್ರಿಶೂಲದಿಂದ ಹಲ್ಲೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು. ತ್ರಿಶೂಲ ವಿತರಣೆಯ ಕಾರಣದಿಂದ ಹಲ್ಲೆ ನಡೆದಿದ್ದರೆ ಈ ದೀಕ್ಷೆ ನೀಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಟಿ. ಖಾದರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಅಹಿತಕರ ಘಟನೆಗಳು ಹೆಚ್ಚುತ್ತಿದೆ ಪೊಲೀಸರ ಮೇಲೆ ರಾಜಕೀಯ ಒತ್ತಡ ಹೆಚ್ಚುತ್ತಿದೆ. ಇದರಿಂದಾಗಿ ಸಮಾಜಘಾತುಕ ಶಕ್ತಿಗಳು ಸಮಾಜದ ಶಾಂತಿ ಭಂಗ ಉಂಟುಮಾಡುವ ಹೇಳಿಕೆಯನ್ನು ಬಹಿರಂಗವಾಗಿ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರಕಾರದ ಗೃಹ ಸಚಿವರು ಜಿಲ್ಲಾಮಟ್ಟದಲ್ಲಿ ತುರ್ತು ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಬೇಕು ಅಥವಾ ಈ ಬಗ್ಗೆ ವಿಧಾನಸಭೆಯಲ್ಲಿ ನನಗೆ ವಿಷಯ ಮಂಡಿಸಲು ಅವಕಾಶ ನೀಡಬೇಕು ಎಂದು ಖಾದರ್ ತಿಳಿಸಿದರು.

ಓದಿ: ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ

ಕೇಂದ್ರ ಸರ್ಕಾರದ ಅಸಮರ್ಪಕ ನೀತಿಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕ ಒತ್ತಡದಿಂದ ಬಳಲುವಂತಾಗಿದೆ. ಎಂಬಿಬಿಎಸ್ ಪರೀಕ್ಷೆ ಮುಗಿಸಿದವರು ಕೌನ್ಸಿಲಿಂಗ್ ನಡೆಯದೇ ಇದ್ದ ಕಾರಣ ಕಾಯುತ್ತಿದ್ದಾರೆ. ನೀಟ್ ಪರೀಕ್ಷೆ ಬರೆದವರು ಸೀಟು ಹಂಚಿಕೆ ಆಗದೇ ಇರುವ ಕಾರಣ ಒತ್ತಡಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಮೌನವಹಿಸಿ ವಿದ್ಯಾರ್ಥಿಗಳಿಗೆ ದ್ರೋಹವೆಸಗಿದೆ ಎಂದರು.

ರಾಜ್ಯ ಸರ್ಕಾರಕ್ಕೆ ವೈದ್ಯಕೀಯ ಕ್ಷೇತ್ರದ ಬಗ್ಗೆ ಆಸಕ್ತಿ ಇದ್ದರೆ  ರಾಜ್ಯದಲ್ಲಿ ಸಿಇಟಿ ಮಾತ್ರ ಜಾರಿ ಮಾಡುತ್ತೇವೆ ಎಂದು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಕೇಂದ್ರ ಸರಕಾರದ ತಪ್ಪು ನೀತಿಯಿಂದ  ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುಳುವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್ ನಜೀರ್ ಬಜಾಲ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು