ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ವೆನ್ಲಾಕ್‌ನಲ್ಲಿ ಶೀಘ್ರ ಒಳರೋಗಿ ಸೇವೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೋವಿಡ್‌ ನಿರ್ವಹಣೆ ಸಭೆ
Last Updated 26 ಜೂನ್ 2020, 16:41 IST
ಅಕ್ಷರ ಗಾತ್ರ

ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವೇ ಒಳರೋಗಿ ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಪರಿಗಣಿಸಿದ್ದರಿಂದ ಇತರೆ ಸೇವೆಗಳನ್ನು ನಿಲ್ಲಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಶೀಘ್ರವೇ ಕನಿಷ್ಠ 100 ಒಳರೋಗಿಗಳ ಸೇವೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ 142 ಕೊರೊನಾ ಸಕ್ರಿಯ ಪ್ರಕರಣಗಳಿವೆ. 370 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 10 ಮಂದಿ ತೀರಿ ಹೋಗಿದ್ದಾರೆ. ಕೋವಿಡ್ ಪರೀಕ್ಷೆಗೆ ಜಿಲ್ಲೆಯಲ್ಲಿ 4 ಖಾಸಗಿ ಹಾಗೂ 1 ಸರ್ಕಾರಿ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೂ ನೇರವಾಗಿ ದಾಖಲಾಗಿ ಚಿಕಿತ್ಸೆ ಪಡೆಯಬಹುದು. ಆಸ್ಪತ್ರೆಯ ನಿಗದಿತ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ. ಆಯುಷ್ಮಾನ್ ಭಾರತ್‌ ಯೋಜನೆಯಡಿ ಚಿಕಿತ್ಸೆ ಪಡೆಯುವವರು ಆರೋಗ್ಯ ಇಲಾಖೆಯ ಶಿಫಾರಸಿನೊಂದಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ ಮಾತನಾಡಿ, ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳು ಈಗಾಗಲೇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿವೆ. ಜಿಲ್ಲೆಯಲ್ಲಿ ಈ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 800 ಹಾಸಿಗೆಗಳು ಕೋವಿಡ್ ಚಿಕಿತ್ಸೆಗೆ ಲಭ್ಯವಾಗಲಿವೆ. ಅಲ್ಲದೇ ಕೆಲವು ಖಾಸಗಿ ಆಸ್ಪತ್ರೆಗಳು ಕೂಡಾ ಕೋವಿಡ್ ಚಿಕಿತ್ಸೆ ನೀಡುತ್ತಿವೆ ಎಂದು ವಿವರಿಸಿದರು.

ವೆನ್‍ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಮಾತನಾಡಿ, ಹಾಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಪ್ರಕರಣಗಳಲ್ಲಿ 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಇದ್ದರು.

ಕ್ವಾರಂಟೈನ್ ಉಲ್ಲಂಘನೆ: 54 ಪ್ರಕರಣ

ಮಂಗಳೂರು: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ 54 ಮಂದಿಯ ಮೇಲೆ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿವೆ.

ನಿಯಮ ಉಲ್ಲಂಘಿಸಿ ಮನೆಯ ಹೊರಗಡೆ ಸಂಚರಿಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 10 ಪ್ರಕರಣ ಪುತ್ತೂರು ತಾಲ್ಲೂಕು ಹಾಗೂ ಉಳಿದ ಪ್ರಕರಣಗಳು ಮಂಗಳೂರು ತಾಲ್ಲೂಕಿಗೆ ಸಂಬಂಧಿಸಿವೆ.

ಪ್ರತಿಯೊಬ್ಬರ ಮೇಲೂ ನಿಗಾ ಇಡಲಾಗಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿ, ಇತರೆ ಇಲಾಖೆ ಅಧಿಕಾರಿ, ಸಿಬ್ಬಂದಿಯೊಂದಿಗೆ ಅಕ್ಕಪಕ್ಕದ ಮನೆಯವರಲ್ಲೂ ಕ್ವಾರಂಟೈನ್ ಇರುವವರ ಮೇಲೆ ನಿಗಾ ಇಡಲು ತಿಳಿಸಲಾಗಿದೆ.

ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಎಚ್ಚರಿಸಿದ್ದಾರೆ.

***

ಈಗಾಗಲೇ ವೆನ್ಲಾಕ್‌ನಲ್ಲಿ ಹೊರರೋಗಿ ಸೇವೆ ಆರಂಭಿಸಲಾಗಿದೆ. ನಿತ್ಯ 250ರಷ್ಟು ಮಂದಿ ರೋಗಿಗಳು ಈಗ ಬರುತ್ತಿದ್ದಾರೆ.

- ಕೋಟ ಶ್ರೀನಿವಾಸ ಪೂಜಾರಿ,ಜಿಲ್ಲಾ ಉಸ್ತುವಾರಿ ಸಚಿವ

***

ಕ್ವಾರಂಟೈನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಜಿಲ್ಲೆಯು ಕ್ವಾರೆಂಟೈನ್ ನಿಗಾ ಕಾರ್ಯದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.

-ಸಿಂಧೂ ಬಿ.ರೂಪೇಶ್‌,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT