ಭಾನುವಾರ, ಫೆಬ್ರವರಿ 23, 2020
19 °C
ಕಾಂಗ್ರೆಸ್‌ ಜಾಗೃತಿ ಕಾರ್ಯಾಗಾರ

ಎಲ್ಲ ಧರ್ಮದ ನಿರಾಶ್ರಿತರಿಗೆ ಪೌರತ್ವ ನೀಡಿ: ಮಾಜಿ ಸಭಾಪತಿ ಬಿ.ಎಲ್‌. ಶಂಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಸದ್ಯದ ಸ್ಥಿತಿಯಲ್ಲಿ ಆಳುವವರ ಬಗ್ಗೆ ಪ್ರಜೆಗಳಿಗೆ ಅಪನಂಬಿಕೆ ಬಂದಿದೆ. ಇದನ್ನು ಕೇವಲ ಮಾತಿನಿಂದ ನಿವಾರಣೆ ಮಾಡಲು ಸಾಧ್ಯವಿಲ್ಲ. ಅದನ್ನು ಕೃತಿಯಲ್ಲಿ ತೋರಿಸಬೇಕು. ಅದಕ್ಕಾಗಿ ಪೌರತ್ವ ತಿದ್ದುಪಡಿ ಕಾಯ್ದೆಯ ಲೋಪವನ್ನು ನಿವಾರಿಸಿ, ಎಲ್ಲ ಧರ್ಮದ ನಿರಾಶ್ರಿತರಿಗೆ ಪೌರತ್ವ ನೀಡಬೇಕು' ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಿ.ಎಲ್‌. ಶಂಕರ್‌, ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ವತಿಯಿಂದ ಕುಲಶೇಖರದ ಕೊರ್ಡೆಲ್ ಚರ್ಚ್‌ ಹಾಲ್‌ನಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಮುಸ್ಲಿಮರು ಭಾರತದಲ್ಲಿ ಇರಲು ಬಯಸದೇ ಇದ್ದಿದ್ದರೆ, ವಿಭಜನೆಯ ಸಮಯದಲ್ಲಿಯೇ ಪಾಕಿಸ್ತಾನಕ್ಕೆ ತೆರಳುತ್ತಿದ್ದರು ಎಂಬುದನ್ನು ತಿಳಿದುಕೊಳ್ಳಬೇಕು. ಆದರೆ, ಅನೇಕರು ಭಾರತದ ಮೇಲಿನ ಪ್ರೀತಿಯಿಂದಾಗಿ ಇಲ್ಲಿಯೇ ಉಳಿದಿದ್ದಾರೆ ಎಂದು ಹೇಳಿದರು.

ಪೌರತ್ವ ಕಾಯ್ದೆಗೆ 1986, 1992, 2003, 2005 ಮತ್ತು 2015 ರಲ್ಲಿ ತಿದ್ದುಪಡಿ ತರಲಾಗಿದೆ. ಆ ತಿದ್ದುಪಡಿಗಳಲ್ಲಿ ಧರ್ಮದ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿರಲಿಲ್ಲ. ಆದರೆ ಇತ್ತೀಚಿನ ತಿದ್ದುಪಡಿಯು ಧರ್ಮದ ಆಧಾರದ ಮೇಲೆ ಪೌರತ್ವವನ್ನು ನೀಡುವ ಬಗ್ಗೆ ಮಾತನಾಡುವ ಮೂಲಕ ಭಾರತೀಯ ಸಂವಿಧಾನವನ್ನು ಅಪಹಾಸ್ಯ ಮಾಡಿದಂತಾಗಿದೆ ಎಂದು ದೂರಿದರು.

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಂದ ಹಲವು ಪ್ರಯೋಜನಗಳು ಆಗಿವೆ. ಭಾರತದ ಧ್ವಜವನ್ನು ಗೌರವಿಸದವರೂ ಈಗ ರಾಷ್ಟ್ರಧ್ವಜವನ್ನು ಎಲ್ಲಕ್ಕಿಂತ ಎತ್ತರದಲ್ಲಿ ಹಿಡಿಯುತ್ತಿದ್ದಾರೆ. ಭಾರತೀಯ ಸಂವಿಧಾನದ ಪ್ರತಿಯನ್ನು ತಮ್ಮ ಕೈಯಲ್ಲಿ ಹಿಡಿದುಕೊಳ್ಳುತ್ತಿದ್ದಾರೆ. ಜತೆಗೆ ಕೇಂದ್ರ ಸರ್ಕಾರವೂ ಎನ್‌ಆರ್‌ಸಿಯನ್ನು ಜಾರಿ ಮಾಡುವ ಚಿಂತನೆಯನ್ನು ಮಾಡಿಲ್ಲ ಎಂದು ಹೇಳಿರುವುದೇ ಹೋರಾಟಕ್ಕೆ ಸಿಕ್ಕಿರುವ ಗೆಲುವು ಎಂದು ವಿಶ್ಲೇಷಿಸಿದರು.

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಕುರಿತು ಮಾತನಾಡಿದ ಪ್ರಿಯದರ್ಶಿನಿ ಯುವ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ಭವ್ಯಾ ನರಸಿಂಹಮೂರ್ತಿ, ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನುಷ್ಠಾನಗೊಳಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಜನರು ತಮ್ಮ ಜಮೀನಿನ ದಾಖಲೆಗಳು ಮತ್ತು ಅವರ ಪಾಲಕರ ಜನನ ಪ್ರಮಾಣಪತ್ರಗಳ ಆಧಾರದ ಮೇಲೆ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಕೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಮುಂಬರುವ ದಿನಗಳಲ್ಲಿ ಹಿಂದೂಗಳೂ ಸಹ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ನಿಂದ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಸ್ಸಾಂನಲ್ಲಿ ನಡೆಸಿದ ಎನ್‌ಆರ್‌ಸಿಯಲ್ಲಿ ಒಟ್ಟು 19 ಜನರು ಹೊರಗುಳಿದಿದ್ದಾರೆ. ಆ ಪೈಕಿ ಏಳು ಲಕ್ಷ ಮುಸ್ಲಿಮರಿದ್ದಾರೆ. ಯಾವಾಗ ಹಿಂದೂಗಳೇ ಅಧಿಕ ಸಂಖ್ಯೆಯಲ್ಲಿ ಹೊರಗುಳಿದರೋ, ಆಗ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ ಮೂಲಕ ಅವರಿಗೆ ಪೌರತ್ವ ನೀಡಲು ಮುಂದಾಗಿದೆ ಎಂದು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಬಿ.ಎ. ಮೊಹಿಯುದ್ದೀನ್ ಬಾವ, ಶಕುಂತಳಾ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ, ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥನ್ ಇದ್ದರು. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು