ಮಂಗಳವಾರ, ಸೆಪ್ಟೆಂಬರ್ 28, 2021
22 °C
ಎರೆಹುಳ ಗೊಬ್ಬರ ತೊಟ್ಟಿ ನಿರ್ಮಾಣ ತರಬೇತಿ

‘ಪಂಚಾಯಿತಿಗೆ 25 ಎರೆಹುಳ ಗೊಬ್ಬರ ತೊಟ್ಟಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೈತ ಬಂಧು ಅಭಿಯಾನದ ಮೂಲಕ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 25 ಎರೆಹುಳು ಗೊಬ್ಬರ ತೊಟ್ಟಿ ನಿರ್ಮಿಸಿ, ಸಾವಯವ ಗೊಬ್ಬರ ಉತ್ಪಾದನೆಗೆ ರೈತರನ್ನು ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಆನಂದ ಕುಮಾರ್ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋದಲ್ಲಿ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ‘ರೈತಬಂಧು’ ಅಭಿಯಾನದಡಿ ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ಡಾ. ನವೀನ್ ಕುಮಾರ್ ಮಾತನಾಡಿ, ಎರೆಹುಳುಗಳು ಮಣ್ಣಿನಲ್ಲಿರುವ ತ್ಯಾಜ್ಯಗಳನ್ನು ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುತ್ತವೆ. ನೀರನ್ನು ಭೂಮಿಗೆ ಇಂಗುವಂತೆಯೂ ಮಾಡುತ್ತವೆ. ವಿಶೇಷವಾಗಿ 17 ರೀತಿಯ ಪೋಷಕಾಂಶಗಳು ಎರೆಗೊಬ್ಬರದಲ್ಲಿವೆ. ಕೃಷಿಕರು ಸಣ್ಣ ತೊಟ್ಟಿಗಳನ್ನು ರಚಿಸಿಕೊಂಡು ಸಾವಯವ ಎರೆಗೊಬ್ಬರ ತಯಾರಿಸಿ, ಬಳಸಿ ಹೆಚ್ಚಿನ ಇಳುವರಿ ಪಡೆಯಬಹುದು ಎಂದರು.

ಎರೆಹುಳು ಗೊಬ್ಬರ ತೊಟ್ಟಿ ರಚನೆ ಮತ್ತು ಎರೆಹುಳು ಸಾಕಣೆಯ ಪ್ರಾತ್ಯಕ್ಷಿಕೆ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ತ್ಯಾಜಗಳಿಂದ ಸಾವಯವ ಗೊಬ್ಬರವಾಗಿ ಮಾಡಬಹುದು ಎಂದರು.

ಜಿಲ್ಲಾ ಪಂಚಾಯಿತಿ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕಿಶನ್, ಜಿಲ್ಲಾ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕಿ ಸುನಿತಾ, ಇತರ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.