ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ಗೆ 100 ಕೋಟಿ ಜನರಿಗೆ ಲಸಿಕೆ

ಬೃಹತ್‌ ಕೋವಿಡ್‌ ಲಸಿಕಾ ಮೇಳದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ
Last Updated 18 ಸೆಪ್ಟೆಂಬರ್ 2021, 3:55 IST
ಅಕ್ಷರ ಗಾತ್ರ

ದಾವಣಗೆರೆ: ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 100ಕೋಟಿ ಜನರಿಗೆ ಎರಡು ಡೋಸ್ ಕೋವಿಡ್‌ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಇಲ್ಲಿನ ವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಬೃಹತ್‌ ಕೋವಿಡ್‌ ಲಸಿಕಾ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಪಂಚದಲ್ಲೇ ಅತೀ ದೊಡ್ಡ ಲಸಿಕಾ ಮೇಳ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ.ಜಿಲ್ಲೆಯ 195 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ಹಾಕಲಾಗುತ್ತಿದೆ. ನಗರದ 57 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಗರದ 45 ವಾರ್ಡ್‌ಗಳು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 582 ಕೇಂದ್ರಗಳ‌ಲ್ಲಿ ಲಸಿಕೆ ಹಾಕಲಾಗುತ್ತಿದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ 200ರಿಂದ 500 ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಇಂದು 1 ಲಕ್ಷ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಈಗಾಗಲೇ 10.52 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, 11.5 ಲಕ್ಷದ ಗುರಿ ಸಾಧಿಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ’ ಎಂದರು.

ಬಳಿಕ ಮೋತಿವೀರಪ್ಪ ಕಾಲೇಜು, ಸೂಪರ್ ಮಾರ್ಕೆಟ್ ಬಳಿಕ ಕೇಂದ್ರ ಸೇರಿ ವಿವಿಧ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಎಚ್‌ಒ ಡಾ.ನಾಗರಾಜ್, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಮೀನಾಕ್ಷಿ,ಪಾಲಿಕೆ ಸದಸ್ಯೆ ಗೀತಾ ದಿಳ್ಯಪ್ಪ, ಮಾಜಿ ಶಾಸಕ ಎಂ. ಬಸವರಾಜ ನಾಯ್ಕ ಇದ್ದರು.

ಜಿಲ್ಲೆಯಲ್ಲಿ ಶುಕ್ರವಾರ 91,700 ಲಸಿಕೆ ನೀಡಲಾಗಿದೆ. ಇದುವರೆಗೆ ಮೊದಲ ಡೋಸ್‌ 8,72, 751 ಹಾಗೂ ಎರಡನೇ ಡೋಸ್‌ 2,94, 756 ಸೇರಿ ಒಟ್ಟು 11,67,507 ಲಸಿಕೆ ನೀಡಿದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಏಕಾಏಕಿ ದೇವಾಲಯ ತೆರವು ಖಂಡನೀಯ’:

‘ರಸ್ತೆ ಮತ್ತು ಪಾರ್ಕ್‌ಗಳಲ್ಲಿ ನಿರ್ಮಿಸಿರುವ ದೇವಾಲಯಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಆದರೆ, ತೆರವುಗೊಳಿಸುವ ಮುನ್ನ ಆಯಾ ಕ್ಷೇತ್ರದ ಸಂಸದರು, ಶಾಸಕರು ಮತ್ತು ಆ ದೇವಸ್ಥಾನದ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ, ವಿಶ್ವಾಸಕ್ಕೆ ಪಡೆದು ತೆರವು ಕಾರ್ಯಾಚರಣೆಗೆ ಮುಂದಾಗಬೇಕಿತ್ತು. ಏಕಾಏಕಿ ತೆರವುಗೊಳಿಸಿರುವುದು ಖಂಡನೀಯ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಲಸಿಕಾ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ತಾಲ್ಲೂಕಿನ ಎಚ್. ರಾಂಪುರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡಿಸಿದ್ದಾರೆ.ಲೋಕಸಭೆ ಚುನಾವಣೆಯ ವೇಳೆ ನನ್ನ ಪತ್ನಿ ಪ್ರಚಾರಕ್ಕಾಗಿ ಎಚ್. ರಾಂಪುರಕ್ಕೆ ಹೋಗಿದ್ದ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಮಾಡಿದ್ದರು. ನಾನು ಗೆದ್ದ ಮೇಲೆ ನಮ್ಮ ಮನೆಯವರು ಆ ರಸ್ತೆ ಮಾಡಿಸಬೇಕೆಂದು ಹೇಳಿದ್ದರು. ಆ ಬಳಿಕ ನಾನು ಮತ್ತು ಶಾಸಕ ಪ್ರೊ.ಎನ್. ಲಿಂಗಣ್ಣ ಆ ರಸ್ತೆಗೆ ಶಂಕುಸ್ಥಾಪನೆ ಮಾಡಿದ್ದೆವು. ಕಾಮಗಾರಿ ಅರ್ಧಕ್ಕೆ ನಿಂತು ಹೋಗಿತ್ತು. ಈಗ ಮತ್ತೆ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT