ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 25 ಗ್ರಾಮಗಳು ಕಂಟೆನ್ಮೆಂಟ್ ಜೋನ್

ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಹೆಚ್ಚಿರುವ ಗ್ರಾಮಗಳಲ್ಲಿ ಈ ಕ್ರಮ: ಜಿಲ್ಲಾಧಿಕಾರಿ
Last Updated 12 ಜೂನ್ 2021, 16:28 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಸಕ್ರಿಯ ಪ್ರಕರಣಗಳು 10ಕ್ಕಿಂತ ಅಧಿಕ ಇರುವ ಜಿಲ್ಲೆಯ 25 ಗ್ರಾಮಗಳನ್ನು ಕಂಟೈನ್‌ಮೆಂಟ್‌ ವಲಯ ಎಂದು ಗುರುತಿಸಿ ಸೀಲ್‌ಡೌನ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಎಲ್ಲ ಹೊರ, ಒಳ ಹೋಗುವ ಮಾರ್ಗಗಳನ್ನು ಬಂದ್‌ ಮಾಡಲಾಗುವುದು. ಒಂದೇ ಒಂದು ದಾರಿ ತೆರೆದಿರುತ್ತದೆ. ಅನಿವಾರ್ಯ ಕಾರಣಕ್ಕೆ ಆಂಬುಲೆನ್ಸ್‌ ಸಹಿತ ಅಗತ್ಯ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ’ ಎಂದು ವಿವರಿಸಿದರು.

ದಾವಣಗೆರೆ ತಾಲ್ಲೂಕಿನ ಅಣಬೇರು, ಕುಕ್ಕುವಾಡ, ಕೈದಾಳೆ, ಕುರ್ಕಿ, ತುರ್ಚಘಟ್ಟ, ಬೇತೂರು, ಕಾಶೀಪುರ, ಮಳಲಕೆರೆ ಗ್ರಾಮಗಳು, ಹರಿಹರ ತಾಲ್ಲೂಕಿನ ಗುತ್ತೂರು, ಕೆ. ಬೇವಿನಹಳ್ಳಿ, ನಂದಿತಾವರೆ, ಭಾನುವಳ್ಳಿ, ಹೊಳೆಸಿರಿಗೆರೆ, ಹಾಲಿವಾಣ ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಕುಳಗಟ್ಟೆ, ಹನುಮನಹಳ್ಳಿ, ಕೂಲಂಬಿ, ಗೊಲ್ಲರಹಳ್ಳಿ, ಐನೂರು ಗ್ರಾಮಗಳು, ನ್ಯಾಮತಿ ತಾಲ್ಲೂಕಿನ ದಾನಿಹಳ್ಳಿ, ಕುಂಕೊವ, ಫಲವನಹಳ್ಳಿ, ಸುರಹೊನ್ನೆ ಗ್ರಾಮಗಳು, ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮ ಹಾಗೂ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮ ಕಂಟೈನ್‌ಮೆಂಟ್ ವಲಯಗಳಾಗಿವೆ ಎಂದರು.

ನರೇಗಾ ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಉಳಿದ ದಿನ ಹಾಲು ಮೊಟ್ಟೆ, ಮೆಡಿಕಲ್ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ತರಕಾರಿ ಹಣ್ಣುಗಳನ್ನು ತಳ್ಳುಗಾಡಿ ಮೂಲಕ ಮನೆ ಮನೆಗೆ ಹೋಗಿ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

10ಕ್ಕಿಂತ ಕಡಿಮೆ 5ಕ್ಕಿಂತ ಅಧಿಕ ಪ್ರಕರಣಗಳಿರುವ 64 ಗ್ರಾಮಗಳಲ್ಲಿ ಸರ್ವೇಕ್ಷಣೆಯನ್ನು ತೀವ್ರಗೊಳಿಸ‌ಲಾಗಿದೆ. ಸ್ಥಳೀಯ ಗ್ರಾಮ ಪ್ರತಿನಿಧಿಗಳು, ಪಿಡಿಒ ಜಾಗೃತಿ ಮೂಡಿಸಿ ಟೆಸ್ಟ್ ಗಳನ್ನು ಹೆಚ್ಚು ಮಾಡಲು ನಿರ್ದೇಶಿಸಲಾಗಿದೆ. ಜಿಲ್ಲೆಯಲ್ಲಿ ಜೂನ್‌ 1ರಂದು ಶೇ 23.47, ಜೂನ್‌ 9ರಂದು ಶೇ 12.65, ಜೂನ್‌ 10ರಂದು ಶೇ 10.23, ಜೂ.11 ರಂದು ಶೇ.6.81 ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಇದು ಹೀಗೆ ಮುಂದುವರಿಯಬೇಕು ಎಂದರೆ ನಿರ್ಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ತಿಳಿಸಿದರು.

ಅನಗತ್ಯವಾಗಿ ಮನೆಯಿಂದ ಯಾರು ಹೊರ ಬರಬಾರದು ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರ ಜತೆಗೆ ಇರುವ ಆರೈಕೆದಾರರು ಸಬೂಬು ಹೇಳಿಕೊಂಡು ಹೊರಬರಬಾರದು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ರಿಷ್ಯಂತ್, ‘ಜಿಲ್ಲೆಯಲ್ಲಿ 26 ಕಡೆ ಚೆಕ್‍ಪೋಸ್ಟ್ ಇದೆ. ಅಲ್ಲಿ ಸಿಬ್ಬಂದಿಗಳನ್ನು ಹೆಚ್ಚಳ ಮಾಡಲಾಗುವುದು. ಇಬ್ಬರು ಸಿಬ್ಬಂದಿ ಅಲ್ಲಿ ಸುಮ್ಮನೆ ಕುಳಿತಿರುತ್ತಿದ್ದರು. ಮುಂದೆ ಹಾಗಿರುವುದಿಲ್ಲ. ಹೋಂ ಗಾರ್ಡ್‌ಗಳನ್ನು, ಸಿಬ್ಬಂದಿಯನ್ನು ಹೆಚ್ಚಿಸಿಕೊಂಡು ತಪಾಸಣೆ ನಡೆಸಲಾಗುವುದು. ಗ್ರಾಮೀಣ ಭಾಗದಲ್ಲಿ ಪೆಟ್ರೋಲಿಂಗ್‌ ವಾಹನ ಮೂಲಕ ಗಸ್ತು ತಿರುಗಲಾಗುವುದು. ಆಸ್ಪತ್ರೆಗಳಲ್ಲಿ ರೋಗಿಗಳನ್ನು ನೋಡಿಕೊಳ್ಳುವವರು ಅಡ್ಡಾಡುವುದನ್ನು ನಿಲ್ಲಿಸಲಾಗುವುದು’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ ದಾನಮ್ಮನವರ್, ‘ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಲಾಗುತ್ತಿದ್ದು, ಟೆಸ್ಟ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕಂಟೈನ್‌ಮೆಂಟ್‌ ವಲಯ ಮಾಡುವುದರಿಂದ ನಮ್ಮಲ್ಲೂ ಇಂಥದ್ದಾಗಬಾರದು ಎಂದು ಜನರಿಗೆ ಜಾಗೃತಿ ಬರುತ್ತದೆ. ಈಗ ಪಾಸಿಟಿವ್ ದರ ಕಡಿಮೆಯಾಗುತ್ತಿದೆ. ಸೋಂಕಿತರನ್ನ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಕಳುಹಿಸಲಾಗುತ್ತದೆ’ ಎಂದರು.

ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ ನಾಯಕ, ಡಿಎಚ್‍ಒ ಡಾ. ನಾಗರಾಜ್, ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ನಗರಾಭಿವೃದ್ಧಿ ಯೋಜನಾಧಿಕಾರಿ ನಜ್ಮಾ, ಎಎಸ್‍ಪಿ ರಾಜೀವ್, ಡಾ.ನಟರಾಜ್, ಡಾ.ಯತೀಶ್, ಡಾ. ಮುರಳೀಧರ್‌ ಅವರೂ ಇದ್ದರು.

21 ರವರೆಗೆ ಲಾಕ್‍ಡೌನ್ ಮುಂದುವರಿಕೆ
ಜಿಲ್ಲೆಯಲ್ಲಿ ಜೂನ್ 14 ರವರೆಗೆ ಇದ್ದ ಲಾಕ್‍ಡೌನ್ ಅನ್ನು ಜೂನ್ 21ರ ಬೆಳಿಗ್ಗೆ 6 ರವೆರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಈ ಹಿಂದಿನ ಮಾರ್ಗಸೂಚಿಯಂತೆ ಲಾಕ್‍ಡೌನ್‍ನ ಎಲ್ಲಾ ನಿರ್ಬಂಧಗಳು ಮುಂದುವರಿಯಲಿದೆ. ಜೂನ್ 14, 16, 18 ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಅದಕ್ಕೆ ಬೇಕಾದ ಸಿಮೆಂಟ್‌, ಕಬ್ಬಿಣ ಸಹಿತ ಅಗತ್ಯ ವಸ್ತುಗಳನ್ನು ತರಲು ಸಡಿಲಿಕೆಯ ಮೂರು ದಿನಗಳಲ್ಲಿ ಅವಕಾಶ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT