ಬುಧವಾರ, ಸೆಪ್ಟೆಂಬರ್ 18, 2019
25 °C
ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

28 ಅಧಿಕಾರಿ, ಸಿಬ್ಬಂದಿಗೆ ನೋಟಿಸ್

Published:
Updated:
Prajavani

ದಾವಣಗೆರೆ: ತಾಲ್ಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.

ಸೋಮವಾರ ಕಚೇರಿಗೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ನಿಗದಿತ ಕಚೇರಿ ವೇಳೆಗೆ ಬಾರದಿದ್ದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು.

ಸಾರ್ವಜನಿಕರು ತಮ್ಮ ಅಗತ್ಯ ಕಾರ್ಯಗಳ ನಿಮಿತ್ತ ತಾಲ್ಲೂಕು ಕಚೇರಿಗೆ ಭೇಟಿ ನೀಡಿದಾಗ ಸಿಬ್ಬಂದಿ ಕಚೇರಿಯಲ್ಲಿ ಲಭ್ಯವಿಲ್ಲದಿದ್ದರೆ ಅವರ ಕೆಲಸ ಕಾರ್ಯಗಳು ಆಗುವುದಾದರೂ ಹೇಗೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದರೆ ಮುಂದಿನ ದಿನಗಳಲ್ಲಿ ಅಂತಹ ನೌಕರರ ವಿರುದ್ಧ ಕಾನೂನು  ಕ್ರಮಗಳನ್ನು ಕೈಗೊಳ್ಳಲಾಗುವುದು. ಕರ್ತವ್ಯಲೋಪ ಎಸಗಿದ ಸಿಬ್ಬಂದಿ ವೇತನ ತಡೆ ಹಿಡಿಯಲಾಗುವುದು ಎಂದು ಎಚ್ಚರಿಸಿದರು.

ಆಧಾರ್ ಕೇಂದ್ರದ ಬಳಿ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದ ಸಾರ್ವಜನಿಕರು, ಪುಟ್ಟ ಮಕ್ಕಳೊಂದಿಗೆ ಬಂದ ಮಹಿಳೆಯರ ಅಹವಾಲು ಆಲಿಸಿದ ಡಿಸಿ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ನಗರದ ವಿವಿಧೆಡೆ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಆಧಾರ್ ಕೇಂದ್ರಗಳಿದ್ದು, ನೂತನವಾಗಿ ಆಧಾರ್ ಕಾರ್ಡ್ ಮಾಡಿಸುವವರು ಹಾಗೂ ತಿದ್ದುಪಡಿ ಕೆಲಸಗಳಿದ್ದರೆ  ಸಮೀಪದಲ್ಲಿರುವ ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ಭೇಟಿ ನೀಡಿ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಯಾವ ಸಮಯದಲ್ಲಾದರೂ ಭೇಟಿ ನೀಡಿ, ಕರ್ತವ್ಯ ಲೋಪ ಮತ್ತು ಗೈರು ಹಾಜರಿ ಕಂಡುಬಂದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

Post Comments (+)