ಮಂಗಳವಾರ, ಜೂನ್ 15, 2021
27 °C
ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ

ಜಿಲ್ಲೆಯಲ್ಲಿ 6 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರದ ಆರು ಪ್ರಕರಣಗಳು ವರದಿಯಾಗಿವೆ ಎಂದು ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.

ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಈ ವಿವರವನ್ನು ಜಿಲ್ಲಾಧಿಕಾರಿ ನೀಡಿದರು.

ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 1, ಎಸ್‍ಎಸ್ ಹೈಟೆಕ್‌ ಆಸ್ಪತ್ರೆಯಲ್ಲಿ 1 ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ 4 ರೋಗಿಗಳಲ್ಲಿ ಬ್ಲ್ಯಾಕ್‌ ಫಂಗಸ್‌ ಕಂಡುಬಂದಿದೆ. ಈ ಪ್ರಕರಣಗಳಿಗೆ ಚಿಕಿತ್ಸಾ ವಿಧಾನ ಹಾಗೂ ಔಷಧ ಸದ್ಯ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಗಮನಕ್ಕೆ ತಂದರು.

ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಗುರುವಾರ ಪ್ರಾರಂಭವಾಗಲಿದೆ. ಹಾಗಾಗಿ ಗುರುವಾರದವರೆಗೆ ಚಿಕಿತ್ಸೆ ನೀಡಿ, ಬಳಿಕ ಮೇಲೆ ತಿಳಿಸಿದ ಆಸ್ಪತ್ರೆಗಳಲ್ಲಿ ಯಾವುದು ಹತ್ತಿರ ಇದೆಯೋ ಅಲ್ಲಿಗೆ ರೋಗಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ನಿಯಂತ್ರಣಕ್ಕೆ ಸೂಚನೆ: ಇದಕ್ಕೂ ಮುನ್ನ ಮುಖ್ಯಮಂತ್ರಿ ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಬೇಕು. ಆಸ್ಪತ್ರೆಗಳನ್ನೂ ಬಲಪಡಿಸಬೇಕು. ತುರ್ತು ಸಂದರ್ಭದಲ್ಲಿ ನೆರೆಹೊರೆಯ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ಹೋಂ ಐಸೊಲೇಷನ್‍ನಲ್ಲಿ ಇರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ನಿರ್ಲಕ್ಷ್ಯದಿಂದ ಜೀವಹಾನಿ ಆಗಬಾರದು. ವೈದ್ಯರು, ಅಧಿಕಾರಿಗಳು ಮಾನವೀಯತೆಯೊಂದಿಗೆ ವರ್ತಿಸಿ, ಸ್ಪಂದಿಸಬೇಕು’ ಎಂದು ತಿಳಿಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್, ‘ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

ರೆಮ್‍ಡಿಸಿವಿರ್ ಔಷಧ ಸಮರ್ಪಕವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದಾರೆ. ಕೊರೊನಾ ನೆಗೆಟಿವ್ ಇದ್ದು, ಐಎಲ್‍ಐ ಪ್ರಕರಣಗಳಲ್ಲಿ 78 ಸಾವು ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ತರಳಬಾಳು ವಸತಿನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಇದಲ್ಲದೇ ಹಳೆ ದಾವಣಗೆರೆಯಲ್ಲಿ ತಾಜ್ ಪ್ಯಾಲೇಸ್, ಇಲ್ಲಿನ ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ. ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೆಎಲ್ ಆಮ್ಲಜನಕ ಹಂಚಿಕೆಯಾಗಿದೆ ಎಂದು ತಿಳಿಸಿದರು.

ವಿಡಿಯೊ ಕಾನ್ಫರೆನ್ಸ್‌ನಲ್ಲಿ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಸುಧಾಕರ್‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ್ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಡಿಎಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಅವರೂ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.