ಸೋಮವಾರ, 10 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | 4 ತಿಂಗಳಲ್ಲಿ 87 ಡೆಂಗಿ ಪ್ರಕರಣ

ಜಿಲ್ಲೆಯಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 29 ಪ್ರಕರಣ; ಈ ವರ್ಷ ಪ್ರಕರಣಗಳ ಸಂಖ್ಯೆ ಏರುಗತಿ
Published 15 ಮೇ 2024, 14:11 IST
Last Updated 15 ಮೇ 2024, 14:11 IST
ಅಕ್ಷರ ಗಾತ್ರ

ದಾವಣಗೆರೆ: ಆರೋಗ್ಯ ಇಲಾಖೆಯ ನಿರಂತರ ಜಾಗೃತಿ, ಮುಂಜಾಗ್ರತಾ ಕ್ರಮದ ಹೊರತಾಗಿಯೂ ಈ ಬಾರಿ ವರ್ಷದ ಆರಂಭದಲ್ಲೇ ಡೆಂಗಿ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ.

2023ರ ಜನವರಿಯಿಂದ ಏಪ್ರಿಲ್‌ವರೆಗೆ 29 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದವು. ಕಳೆದ ವರ್ಷ ಒಟ್ಟಾರೆ 219 ಪ್ರಕರಣಗಳು ದೃಢಪಟ್ಟಿದ್ದವು. ಈ ವರ್ಷದ ಜನವರಿಯಿಂದ ಏಪ್ರಿಲ್‌ವರೆಗಿನ ಅವಧಿಯಲ್ಲಿ 87 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ.

4 ತಿಂಗಳ ಆರಂಭಿಕ ಅವಧಿಯಲ್ಲೇ ಡೆಂಗಿ ಪ್ರಕರಣಗಳು ಹೆಚ್ಚಾಗಿರುವುದರಿಂದ ವರ್ಷದ ಅಂತ್ಯದ ವೇಳೆಗೆ ಡೆಂಗಿ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುವ ಆತಂಕವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಸೋಂಕಿತ ಈಡೀಸ್ ಈಜಿಫ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಗಿ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ.

ಡೆಂಗಿ ಲಕ್ಷಣಗಳು:

ಇದ್ದಕ್ಕಿದ್ದಂತೆ ತೀವ್ರಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ, ಒಸಡುಗಳಲ್ಲಿ ರಕ್ತಸ್ರಾವ ಆಗುವುದು ಇವು ಡೆಂಗಿ ಜ್ವರದ ಲಕ್ಷಣಗಳಾಗಿವೆ.

ಡೆಂಗಿ ಜ್ವರವನ್ನು ತಡೆಗಟ್ಟಲು ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾದ ಚಿಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡುಬಂದ ಕೂಡಲೇ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸುವ ಸಾಧ್ಯತೆಯೂ ಇರುತ್ತದೆ ಎನ್ನುತ್ತಾರೆ ವೈದ್ಯರು.

ಆರೋಗ್ಯ ಇಲಾಖೆಯ ದಾಖಲೆಗಳ ಪ್ರಕಾರ 2017ರಿಂದ ಇದುವರೆಗೂ ಜಿಲ್ಲೆಯಲ್ಲಿ ಡೆಂಗಿ ಜ್ವರದಿಂದ ಮೃತಪಟ್ಟ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. ಆದರೆ, ಡೆಂಗಿ ಜ್ವರ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿ ಮಾತ್ರ ಪ್ರತೀ ವರ್ಷವೂ ಏರಿಳಿಕೆ ಆಗುತ್ತಲೇ ಇದೆ.

ಡೆಂಗಿ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಮುದಾಯದ ಅಗತ್ಯ ಸಹಕಾರಕ್ಕಾಗಿ ಆಗಸ್ಟ್‌ ಹಾಗೂ ಸೆಪ್ಟೆಂಬರ್‌ನಲ್ಲಿ ‘ಡೆಂಗಿ ರಥ’ವು ಜಿಲ್ಲೆಯಾದ್ಯಂತ ಸಂಚರಿಸಲಿದೆ. ಆಡಿಯೊ ಮತ್ತು ಫಲಕದ ಪ್ರದರ್ಶನದೊಂದಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಮಾತ್ರವಲ್ಲದೇ ಜಾಥಾ, ರ‍್ಯಾಲಿ, ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲ್ಲೂಕು ಮಟ್ಟದಲ್ಲಿ ತರಬೇತಿ ಕಾರ್ಯಾಗಾರವನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಡೆಂಗಿ ಜ್ವರದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಡೆಂಗಿ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ವ್ಯಾಪಕ ಜನಜಾಗೃತಿ ಅಭಿಯಾನದ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಮೇ 16ರಂದು ‘ರಾಷ್ಟ್ರೀಯ ಡೆಂಗಿ ದಿನ’ ಆಚರಿಸಲಾಗುತ್ತಿದೆ. ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ’ ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT