ಭಾನುವಾರ, ನವೆಂಬರ್ 28, 2021
20 °C
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ

ದಾವಣಗೆರೆ: ಪ್ರತಿ ಹಳ್ಳಿಯಲ್ಲಿ ಕಾನೂನಿನ ಅರಿವಿಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಲ್ಲರೂ ನೆಮ್ಮದಿಯುತ ಜೀವನ ನಡೆಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವಿನ ಕೊರತೆಯಿದೆ. ಪ್ರತಿ ಹಳ್ಳಿಯಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ವಕೀಲರ ಸಂಘ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ಸೋಮವಾರದಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಲಾಗಿದ್ದ ಪ್ಯಾನ್ ಇಂಡಿಯಾ ಅವೇರ್‌ನೆಸ್ ಮತ್ತು ಔಟ್‍ರೀಚ್ ಕಾರ್ಯಕ್ರಮ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ, ಭಾರತದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕುಗಳಲ್ಲಿ ಅ.2 ರಿಂದ ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿತ್ತು. ಈ ಕಾರ್ಯಕ್ರಮವು  ನ.14 ರ ವರೆಗೂ ಮುಂದುವರಿಯಲಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 823 ಗ್ರಾಮಗಳಿವೆ. ಅಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಕಾನೂನು ಅರಿವು ಮತ್ತು ನೆರವಿನ ಕಾರ್ಯಕ್ರಮಗಳು ಜರುಗಿದೆ. 80ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಾನೂನು ಮತ್ತು ಸಾರ್ವಜನಿಕರ ಮೂಲಭೂತ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮಗಳು ನಡೆದಿವೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ ನಾಯಕ್  ‘ಕಾನೂನು ಅರಿವು, ನೆರವಿನ ಬಗ್ಗೆ ಜಾಗೃತಿ ಮೂಡಿಸಲು ಅ. 2 ರಿಂದ ಅ. 11ರ ವರೆಗೆ ದಾವಣಗೆರೆ ತಾಲ್ಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಅ.11 ರಿಂದ 18ರ ವರೆಗೆ ಜಗಳೂರು ತಾಲ್ಲೂಕಿನಾದ್ಯಂತ ಕಾರ್ಯಕ್ರಮಗಳು ಚಾಲ್ತಿಯಲ್ಲಿವೆ. ಹರಿಹರ ತಾಲ್ಲೂಕಿನಲ್ಲಿ ಅ.19 ರಿಂದ 26ರ ವರೆಗೆ, ಹೊನ್ನಾಳಿ ಅ.27ರಿಂದ 31 ಹಾಗೂ ಚನ್ನಗಿರಿ ತಾಲ್ಲೂಕಿನಲ್ಲಿ ನ.4 ರಿಂದ 14 ರ ವರೆಗೆ ಚನ್ನಗಿರಿಯಲ್ಲಿ ಪ್ಯಾನ್ ಇಂಡಿಯಾ ಕಾರ್ಯಕ್ರಮಗಳು ನಡೆಯಲಿವೆ’ ಎಂದು ವಿವರಿಸಿದರು.

ಎರಡನೇ ಹಂತದಲ್ಲಿ ಜಿಲ್ಲೆಯಾದ್ಯಂತ ನ.10 ರಿಂದ 14ರವರೆಗೆ ಕಾನೂನು ಅರಿವು-ನೆರವು ಕಾರ್ಯಕ್ರಮಗಳು ಜರುಗಲಿವೆ. ಕಾನೂನು ಸೇವಾ ಪ್ರಾಧಿಕಾರದಲ್ಲಿ ನೆರವು ಪಡೆಯಲು ಯಾರು ಅರ್ಹರು, ನೆರವು ಪಡೆಯಲು ಯಾರನ್ನು ಸಂಪರ್ಕಿಸಬೇಕು ಎಂಬುದರ ಬಗ್ಗೆ ಕರಪತ್ರ ತಯಾರಿಸಿದ್ದು, ಪ್ರತಿಯೊಂದು ಹಳ್ಳಿಗೂ ಕರಪತ್ರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಸಮೀಪದ ನ್ಯಾಯಾಲದ ಆವರಣದಲ್ಲಿರುವ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅಥವಾ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಬಹುದು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಟೋಲ್ ಫ್ರೀ ನಂಬರ್‌ 1800-425-90900 ಸಂಖ್ಯೆಗೆ ಅಥವಾ 080-22111730 ಗೆ ಕರೆ ಮಾಡಿ ಉಚಿತ ಕಾನೂನು ಸಲಹೆ ಮತ್ತು ನೆರವು ಪಡೆಯಬಹುದು. ಎನ್‍ಎಎಲ್‍ಎಸ್‍ಎ (ನಾಲ್ಸಾ) ಮೊಬೈಲ್ ಆ್ಯಪ್ ಉಚಿತ ಕಾನೂನು ಸಲಹೆ ಮತ್ತು ನೆರವಿಗಾಗಿ ಮೊಬೈಲ್ ಪ್ಲೇ ಸ್ಟೋರ್‌ನಲ್ಲಿ ಅಥವಾ ಆ್ಯಪ್ ಸ್ಟೋರ್‌ನಲ್ಲಿ ಡೌನ್‍ಲೋಡ್ ಮಾಡಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಬಹುದು ಎಂದರು.

ಹಿರಿಯ ಸಹಾಯಕ ಸಾರ್ವಜನಿಕ ಅಭಿಯೋಜಕ ಎ.ಎಂ ಬಸವರಾಜ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು