ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣಬೂರು ಗ್ರಾ.ಪಂ ಅವ್ಯವಹಾರ: ಮುಂದುವರಿದ ತನಿಖೆ

Last Updated 7 ಡಿಸೆಂಬರ್ 2019, 10:00 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಅಣಬೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಖಾತ್ರಿ ಯೋಜನೆ ಅಡಿ ಭಾರಿ ಅವ್ಯವಹಾರ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯಿಂದ ಮೂರು ದಿನಗಳಿಂದ ತೀವ್ರ ತನಿಖೆ ನಡೆಯುತ್ತಿದೆ.

2015ರಿಂದ 2019ನೇ ಸಾಲಿನವರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಗ್ರಿ ಅನುದಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್‌ಟಿಐ ಕಾರ್ಯಕರ್ತ ಬಸವರಾಜ್ ದೂರು ನೀಡಿದ್ದರು. ಹೀಗಾಗಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ತನಿಖೆಗೆ ಆದೇಶಿಸಿದ್ದಾರೆ.

ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ. ಲಕ್ಷ್ಮಿಕಾಂತ್ ಅವರು ತನಿಖೆಯ ನೇತೃತ್ವ ವಹಿಸಿದ್ದಾರೆ. ಎರಡು ದಿನಗಳಿಂದ ದಾಖಲೆಗಳ ತಪಾಸಣೆ ನಡೆಯುತ್ತಿದೆ. ನಾಲ್ಕು ವರ್ಷಗಳ ಅವಧಿಯಲ್ಲಿ ಇಲ್ಲಿ ಕಾರ್ಯನಿರ್ವಹಿಸಿದ್ದ ಪಿಡಿಒ ಹಾಗೂ ಎಂಜಿನಿಯರ್ ಅವರಿಂದ ಮಾಹಿತಿ ಹಾಗೂ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉದ್ಯೋಗ ಖಾತ್ರಿ ಕಾಮಗಾರಿಗಳ ಸಾಮಗ್ರಿ ಹಾಗೂ ಕೂಲಿ ಮೊತ್ತದ 60:40 ಅನುಪಾತದಲ್ಲಿ ಭಾರಿ ವ್ಯತ್ಯಾಸ ಆಗಿದೆ. ಸಾಮಗ್ರಿ ಪೂರೈಕೆಗಾಗಿ ವೆಂಡರ್‌ಗಳನ್ನು ಬೇಕಾಬಿಟ್ಟಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ಪಾರದರ್ಶಕ ಕಾಯ್ದೆಯನ್ನು ಧಿಕ್ಕರಿಸಿ ತಮಗೆ ಬೇಕಾದವರನ್ನು ವೆಂಡರ್ ಆಗಿ ನೇಮಕ ಮಾಡಿಕೊಂಡು ಕೋಟಿಗಟ್ಟಲೆ ಹಣ ಲೂಟಿ ಮಾಡಲಾಗಿದೆ. ‘ಸುಮತಿ ಎಂಟರ್ ಪ್ರೈಸಸ್’ ಎಂಬ ಗುತ್ತಿಗೆದಾರರಿಗೆ ಅಕ್ರಮವಾಗಿ ₹ 61 ಲಕ್ಷ ಮಂಜೂರು ಮಾಡಲಾಗಿದೆ. ಈ ಹೆಸರಿನ ಸಂಸ್ಥೆ ಅಸ್ತಿತ್ವದಲ್ಲೇ ಇಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಉಪ ನಿರ್ದೇಶಕ ಬಿ. ಲಕ್ಷ್ಮಿಕಾಂತ್, ‘ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಆದರೆ ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು ಪಂಚಾಯಿತಿ ಕಚೇರಿಯಲ್ಲಿ ಲಭ್ಯವಿಲ್ಲ. ಈ ಹಿಂದೆ ಅವ್ಯವಹಾರ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಾದ ಕಾರಣ ಎಲ್ಲಾ ದಾಖಲೆಗಳನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT