ಭಾನುವಾರ, ಜೂಲೈ 5, 2020
23 °C

ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆ ಹಿಂಪಡೆಯಲು ರೈತ ಸಂಘಗಳ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ರೈತ ವಿರೋಧಿಯಾಗಿರುವ, ಕಾರ್ಪೊರೇಟ್‌ ಕಂಪನಿಗಳ ಪರವಾಗಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಜಿಲ್ಲಾ ಘಟಕವು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಬುಧವಾರ ಪ್ರತಿಭಟಿಸಿದ ಸಮಿತಿಯ ಸದಸ್ಯರು, ಲಾಕ್‌ಡೌನ್‌ನಿಂದ ಕೃಷಿ ರಂಗವು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕಾರ್ಪೊರೇಟ್‌ ಕಂಪನಿಗಳ ಪರವಾಗಿ ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು.

ಕೃಷಿ ವಲಯ ಬಿಕ್ಕಟ್ಟಿನಿಂದ ಇರುವ ಸಂದರ್ಭದಲ್ಲಿ ಕೃಷಿ ಮಾರುಕಟ್ಟೆಗಳನ್ನು ಹಾಗೂ ರೈತರನ್ನು ಮತ್ತಷ್ಟು ಬಲಪಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಮಾರುಕಟ್ಟೆಗೆ ಮತ್ತಷ್ಟು ವ್ಯಾಪಾರಿಗಳು ಬರುವಂತೆ ಪ್ರೋತ್ಸಾಹಿಸಬೇಕು. ಅಕ್ರಮ ಕಮಿಷನ್‌ ವಸೂಲಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆಗೆ ಸಾಗಿಸುವ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಮಾರುಕಟ್ಟೆಗಳನ್ನು ಪ್ರಜಾಸತ್ತಾತ್ಮಕಗೊಳಿಸಬೇಕು ಎಂದು ಮನವಿ ಮಾಡಿದರು.

ಸ್ಪರ್ಧಾತ್ಮಕ ಮಾರುಕಟ್ಟೆ ಹೆಸರಿನಲ್ಲಿ ನಿಯಂತ್ರಿತ ಮಾರುಕಟ್ಟೆ ವ್ಯವಸ್ಥೆಯನ್ನು ನಾಶ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಯನ್ನು ಮೆಟ್ರೊ, ಮೋರ್‌, ರಿಲಯನ್ಸ್‌ ಫ್ರೆಶ್‌, ಡಿಮಾರ್ಟ್‌, ಬಿಗ್‌ ಬ್ಯಾಸ್ಕೆಟ್‌ನಂತಹ ಕಾರ್ಪೊರೇಟ್‌ ಕಂಪನಿಗಳಿಗೆ ಒಪ್ಪಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಪೊರೇಟ್‌ ಕೃಷಿ ಪದ್ಧತಿಯನ್ನು ಜಾರಿಗೊಳಿಸುವ ಮೂಲಕ ಕೃಷಿ ಹಾಗೂ ಕೃಷಿಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಕೂಡಲೇ ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರಾದ ಬಲ್ಲೂರು ರವಿಕುಮಾರ್‌, ಹುಚ್ಚವ್ವನಹಳ್ಳಿ ಮಂಜುನಾಥ್‌, ಆಲೂರು ಪರಶುರಾಮ, ತಿಪ್ಪೇಸ್ವಾಮಿ ಅಣಬೇರು, ಎಚ್‌.ಜಿ. ಉಮೇಶ್‌, ಸಿ.ಟಿ. ನಿಂಗಪ್ಪ, ಚಿಕ್ಕನಹಳ್ಳಿ ರೇವಣಸಿದ್ದಪ್ಪ, ಗುಮ್ಮನೂರು ಬಸವರಾಜ, ಕುಕ್ಕವಾಡ ಪರಮೇಶ ಅವರೂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು