ಗುರುವಾರ , ಮೇ 19, 2022
24 °C
ತನಿಖೆಗೆ ಶಿಕ್ಷಣಾಧಿಕಾರಿ ನೇತೃತ್ವದ ತಂಡ ರಚನೆ

1,591 ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ‘ಬೇಡ ಜಂಗಮ’ ನಮೂದು

ವಿನಾಯಕ ಭಟ್‌ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯ, ಹರಿಹರ ಹಾಗೂ ಹೊನ್ನಾಳಿ ವಲಯಗಳಲ್ಲಿ 2015ರಿಂದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1,591 ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ‘ಬೇಡ ಜಂಗಮ’ ಪರಿಶಿಷ್ಟ ಜಾತಿ ಎಂದು ನಮೂದಿಸಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಆರ್‌. ತಿಪ್ಪೇಶಪ್ಪ ಅವರು ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಶಿಕ್ಷಣಾಧಿಕಾರಿ ನೇತೃತ್ವದ ತಂಡ ರಚಿಸಿದ್ದಾರೆ.

ಶಾಲೆಗೆ ಸೇರಿಸುವಾಗ ಪೋಷಕರು ಜಾತಿ ಕಾಲಂನಲ್ಲಿ ‘ಬೇಡ ಜಂಗಮ’ ಎಂದು ಬರೆಸಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ದಾಖಲೆಗಳನ್ನು ಪಡೆದುಕೊಂಡಿದ್ದ ಪರಿಶಿಷ್ಟ ಜಾತಿಗಳ ರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಚಿನ್ನಸಮುದ್ರ ಶೇಖರ ನಾಯ್ಕ ಅವರು ಶಾಲೆಗಳ ಮುಖ್ಯ ಶಿಕ್ಷಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಈ ಬಗ್ಗೆ ತನಿಖೆ ನಡೆಸಲು ಶಿಕ್ಷಣಾಧಿಕಾರಿ ಸಿ.ನಾಗರಾಜ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ. ವಿಷಯ ಪರಿವೀಕ್ಷಕರನ್ನು ಒಳಗೊಂಡ ತಂಡವು ಸಂಬಂಧಪಟ್ಟ ಶಾಲೆಗೆ ತೆರಳಿ ದಾಖಲಾತಿಗಳನ್ನು ಪರಿಶೀಲಿಸಿ ನೈಜ ವರದಿಯನ್ನು ಸಲ್ಲಿಸಬೇಕು. ತಂಡದ ವರದಿ ಆಧರಿಸಿ ಶಿಕ್ಷಣಾಧಿಕಾರಿಯು ಸ್ಪಷ್ಟ ಅಭಿಪ್ರಾಯದೊಂದಿಗೆ ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಡಿಡಿಪಿಐ ಆದೇಶಿಸಿದ್ದಾರೆ.

‘ಶಾಲಾ ದಾಖಲಾತಿಯಲ್ಲಿ ಬೇಡಜಂಗಮ ಪರಿಶಿಷ್ಟ ಜಾತಿ ಎಂದು ನಮೂದಿಸಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ಬಂದಿದ್ದರಿಂದ ತನಿಖೆ ನಡೆಸಲಾಗುತ್ತಿದೆ. ಏಳು ದಿನಗಳ ಒಳಗೆ ವರದಿ ನೀಡುವಂತೆ ತನಿಖಾ ತಂಡಕ್ಕೆ ಸೂಚಿಸಿದ್ದೇನೆ. ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಬೇಡ ಜಂಗಮ ಹೆಸರು ನಮೂದಿಸಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಕಲೆ ಹಾಕುವಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ’ ಎಂದು ಡಿಡಿಪಿಐ ಜಿ.ಆರ್‌.ತಿಪ್ಪೇಶಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ಶಾಲೆಗೆ ಮಕ್ಕಳನ್ನು ದಾಖಲಿಸುವಾಗ ಪೋಷಕರು ಜಾತಿ ಪ್ರಮಾಣಪತ್ರ ಸಲ್ಲಿಸುತ್ತಾರೆ, ಇಲ್ಲವೇ ಸ್ವಯಂ ಘೋಷಣಾ ಪ್ರಮಾಣಪತ್ರವನ್ನು ನೀಡುತ್ತಾರೆ. ಮಕ್ಕಳಿಗೆ ಪ್ರವೇಶ ನಿರಾಕರಿಸುವಂತಿಲ್ಲ ಎಂಬ ಕಾರಣಕ್ಕೆ ಅರ್ಜಿಯಲ್ಲಿ ನಮೂದಿಸಿದ ಜಾತಿಯನ್ನೇ ಶಿಕ್ಷಕರು ದಾಖಲಾತಿಯಲ್ಲಿ ನಮೂದಿಸಿಕೊಂಡು ಪ್ರವೇಶ ನೀಡುತ್ತಾರೆ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು