ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಪ್ರವಾಸಕ್ಕೆ ಹಸಿರು ನಿಶಾನೆ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧಾರ * ಡಿವಿಎಸ್‌, ಶೆಟ್ಟರ್‌, ಕಟೀಲ್‌ ನೇತೃತ್ವದಲ್ಲೂ ಪ್ರವಾಸ
Last Updated 19 ಸೆಪ್ಟೆಂಬರ್ 2021, 4:44 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯದಾದ್ಯಂತ ಪ್ರವಾಸ ಮಾಡಲು ಬಿ.ಎಸ್‌. ಯಡಿಯೂರಪ್ಪ ಕೈಗೊಂಡಿರುವ ನಿಲುವಿಗೆ ಅಡ್ಡಿ ಪಡಿಸದಿರಲು ಶನಿವಾರ ರಾತ್ರಿ ಅಪೂರ್ವ ರೆಸಾರ್ಟ್‌ ಸಭಾಂಗಣದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಎಸ್‌ವೈ ಅಲ್ಲದೇ ಇನ್ನೂ ಮೂರು ತಂಡಗಳು ಪ್ರವಾಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಕೇಂದ್ರ ಮಾಜಿ ಸಚಿವ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಇನ್ನೂ ಮೂರು ತಂಡಗಳು ಕೂಡ ಪ್ರವಾಸ ಕೈಗೊಳ್ಳಬೇಕು ಎಂದು ನಿರ್ಧರಿಸುವ ಮೂಲಕ ಪ್ರವಾಸದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಮುಂದೆ ಬರುವ ವಿಧಾನ ಪರಿಷತ್‌ ಚುನಾವಣೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಸೋಮವಾರದಿಂದಲೇ ಪ್ರಚಾರ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಯಿತು. ದೇವಸ್ಥಾನಗಳ ತೆರವು ಕಾರ್ಯಾಚರಣೆ ಬಗ್ಗೆ ಕೂಡ ಚರ್ಚೆಗಳು ನಡೆದವು ಎಂದು ಮುಖಂಡರು ತಿಳಿಸಿದ್ದಾರೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಉಪಸ್ಥಿತರಿದ್ದರು.

ಮುಂದಿನ ಚುನಾವಣೆಗಳಿಗೆ ರಣತಂತ್ರ: ಪಕ್ಷದ ಬಲವರ್ಧನೆ ಮತ್ತು ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳನ್ನು ಎದುರಿಸಲು ರಣತಂತ್ರವನ್ನು ರೂಪಿಸುವ ದೃಷ್ಟಿಯಿಂದ ಈ ಕಾರ್ಯಕಾರಿಣಿ ಪ್ರಮುಖವಾದುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ತ್ರಿಶೂಲ್ ಕಲಾಭವನದಲ್ಲಿ ಶನಿವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಪ್ರಯುಕ್ತ ಏರ್ಪಡಿಸಿದ್ದ ಅಂತ್ಯೋದಯ ಛಾಯಾಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪಕ್ಷವನ್ನು ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಬಲಪಡಿಸುವ ಬಗ್ಗೆ ಸೆ.19ರಂದು ಕಾರ್ಯಕಾರಿಣಿಯಲ್ಲಿ ಚರ್ಚೆಗಳಾಗಲಿವೆ ಎಂದು ವಿವರಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಯನ್ನು ಬಿಂಬಿಸುವ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ, ಈಗ ನಾನು ತಂದಿರುವ ಹಲವು ಜನೋಪಯೋಗಿ ಕೆಲಸಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಾಡಿರುವ ಕೆಲಸಗಳು, ಬೇಟಿ ಬಚಾವೊ- ಬೇಟಿ ಪಡಾವೊ, ಆಯುಷ್ಮಾನ್ ಭಾರತ್, ಕೃಷಿ ಸಿಂಚಾಯಿ, ಕೃಷಿ ಸಮ್ಮಾನ್, ಸಬ್‌ಕಾ ಸಾತ್‌ ಸಬ್‌ಕಾ ವಿಕಾಸ್‌ ಸೇರಿ ಎಲ್ಲ ಯೋಜನೆಗಳ ವಿವರಗಳು ಇಲ್ಲಿವೆ. ಮಹಿಳೆಯರು, ಮಕ್ಕಳ ರಕ್ಷಣೆಯ ಕಾರ್ಯಗಳ ಯೋಜನೆ ಇಲ್ಲಿ ಬಿಂಬಿತವಾಗಿದೆ. ಉತ್ತಮ ಪ್ರದರ್ಶನ ಇದು ಎಂದು ಶ್ಲಾಘಿಸಿದರು.

ಬಳಿಕ ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸದೇ ಮುಂದೆ ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT