ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ, ಕಾಲೇಜುಗಳಲ್ಲಿ ಮಕ್ಕಳ ಸಂಭ್ರಮ

ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆ ಶುರು
Last Updated 1 ಜನವರಿ 2021, 15:07 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಕಾರಣ ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆ ಶುಕ್ರವಾರ ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಶಾಲಾ–ಕಾಲೇಜುಗಳಲ್ಲಿ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.

ಸರ್ಕಾರಿ ಹಾಗೂ ಖಾಸಗಿ ಶಾಲಾ–ಕಾಲೇಜುಗಳನ್ನು ತಳಿರು–ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಗಳ ಎದುರು ಬಣ್ಣ ಬಣ್ಣದ ರಂಗೋಲಿ ಹಾಕಲಾಗಿತ್ತು. ಕೆಲ ಶಾಲೆಗಳಲ್ಲಿ ವಾದ್ಯಗಳೊಂದಿಗೆ ಮಕ್ಕಳನ್ನು ಸ್ವಾಗತಿಸಲಾಯಿತು. ಇನ್ನು ಕೆಲ ಶಾಲೆಗಳಲ್ಲಿಮಕ್ಕಳಿಗೆ ಸಿಹಿ ಹಂಚಿ, ಗುಲಾಬಿ ಹೂ ನೀಡಿ ಬರಮಾಡಿಕೊಳ್ಳಲಾಯಿತು.

ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಸಂಭ್ರಮ ಕಂಡುಬಂತು. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನಿಂಗ್‌, ಸ್ಯಾನಿಟೈಸರ್‌ ನೀಡಿ, ಬರಮಾಡಿ
ಕೊಳ್ಳಲಾಯಿತು. ಎಲ್ಲೆಡೆ ಕೋವಿಡ್‌ ನಿಯಮ ಪಾಲಿಸಿ, ಸ್ವಚ್ಛತೆಗೆ ಆದ್ಯತೆ ನೀಡಲಾಯಿತು.ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಾಠ ನಡೆದರೆ, 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾಗಮ ನಡೆಯಿತು.

‘ನಗರದ ಬಾಪೂಜಿ ಸಿಬಿಎಸ್‌ಸಿ ಶಾಲೆಯಲ್ಲಿ ಹಬ್ಬದ ವಾತಾವರಣ ಕಂಡುಬಂತು. ಶಾಲೆಗಳ ಕೊಠಡಿ
ಗಳನ್ನು ದಿನಕ್ಕೆ ಎರಡು ಬಾರಿ ಸ್ಯಾನಿಟೈಸ್‌ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಆರೋಗ್ಯ ಸಮಿತಿ ಸಿಬ್ಬಂದಿ ಗಮನಹರಿಸಲಿದ್ದಾರೆ. ಶೇ 80 ರಷ್ಟು ಹಾಜರಾತಿ ಇತ್ತು’ ಎಂದು ಮುಖ್ಯಶಿಕ್ಷಕರು ತಿಳಿಸಿದರು.

ಮೋತಿವೀರಪ್ಪ ಕಾಲೇಜಿನಲ್ಲಿ ಸರಸ್ವತಿ ಪೂಜೆ ಮಾಡಿ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳನ್ನು ಗೂಲಾಬಿ ಹೂವು, ಚಾಕೊಲೇಟ್‌ ನೀಡಿ ಸ್ವಾಗತಿಸಲಾಯಿತು.

‘ಸಿದ್ಧಗಂಗಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಗೆ ಶೇ 70 ರಷ್ಟು ಮಕ್ಕಳು ಹಾಜರಾಗಿದ್ದರು. ಗುಂಪು ಗುಂಪು ಮಾಡಿ ಪಾಠ ಮಾಡುತ್ತಿದ್ದೇವೆ. ಪಿಯುಗೆ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇದೆ. ಸೋಮವಾರದಿಂದ ಹೆಚ್ಚಿನ ತರಗತಿ ಆರಂಭಿಸುತ್ತೇವೆ’ ಎಂದು ಸಂಸ್ಥೆ ಮುಖ್ಯಸ್ಥೆ ಜಸ್ಟಿನ್‌ ಡಿಸೋಜ ಹೇಳಿದರು.

ಇಲ್ಲಿನ ನಿಟುವಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಕಪ್ಪು ಹಲಗೆ ಮೇಲೆ ‘ನಹಿ ಜ್ಞಾನೇನ ಸದೃಶಂ’ ಎಂಬ ವಾಕ್ಯ ಬರೆಯುವ ಮೂಲಕ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು.

‘ಹಲವು ತಿಂಗಳುಗಳಿಂದ ಮನೆಯಲ್ಲೇ ಇದ್ದು ಬೇಸರವಾಗಿರಬಹುದು. ಈಗ ಸಿಗುವ ಪ್ರತಿ ಕ್ಷಣವನ್ನು ಉಪಯೋಗಿಸಿಕೊಂಡು ಚೆನ್ನಾಗಿ ಓದಿ ಸಾಧನೆ ಮಾಡಿ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲೆಗೆ ದಾನಿಗಳು ₹ 25 ಸಾವಿರದಿಂದ ದತ್ತಿ ನಿಧಿ ನೀಡಿದರು. ಇದನ್ನು ಕೇಳಿದ ಜಿಲ್ಲಾಧಿಕಾರಿ, ‘ನಾನೂ ₹ 25 ದೇಣಿಗೆ ನೀಡುತ್ತೇನೆ’ ಎಂದು ಹೇಳಿದರು.

ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ, ಡಯಟ್‌ ಪ್ರಾಚಾರ್ಯ ಎಚ್‌.ಕೆ. ಲಿಂಗರಾಜ್‌, ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ್‌ ಎಂ., ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಚಂದ್ರಪ್ಪ, ಉಮಾಪ್ರಕಾಶ್, ಸವಿತಾ ಹುಲ್ಲುಮನಿ, ಜನಪ್ರತಿನಿಧಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಇದ್ದರು.

‘ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಮಕ್ಕಳು ಹಾಜರಾಗಿದ್ದರೆ ಖಾಸಗಿ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು.ಮಕ್ಕಳು ಪೋಷಕರ ಒಪ್ಪಿಗೆ ಪತ್ರ ತಂದಿದ್ದರು’ ಎಂದು ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ‘ಪ್ರಜಾವಾಣಿ’ಗೆತಿಳಿಸಿದರು.

‘ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಕಾಲೇಜಿನ ವಾತಾವರಣ ಕಂಡು ಮಕ್ಕಳಲ್ಲಿ ಧೈರ್ಯ ಮೂಡಿದೆ. ಸೋಮವಾರದಿಂದ ಮಕ್ಕಳ ಹಾಜರಾತಿ ಹೆಚ್ಚಳವಾಗಬಹುದು’ ಎಂದು ಡಿಡಿಪಿಯು ನಾಜರಾಜಪ್ಪ ಆರ್. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT