ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು: ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಿ

Last Updated 7 ಜನವರಿ 2020, 15:32 IST
ಅಕ್ಷರ ಗಾತ್ರ

ದಾವಣಗೆರೆ: 2009ರ ಸೆಪ್ಟೆಂಬರ್ 29ರ ನಂತರ ಸಾರ್ವಜನಿಕ ಸ್ಥಳಗಳು, ರಸ್ತೆ, ಉದ್ಯಾನಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ಸರ್ವೆ ನಡೆಸಿ ಅವುಗಳನ್ನು ಜ.7ರಿಂದಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಪ್ರೀಂ ಕೋರ್ಟ್‌ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಹಶೀಲ್ದಾರರು ಹಾಗೂ ಇಒಗಳು, ಗ್ರಾಮ ಲೆಕ್ಕಿಗರು, ಪಿಡಿಒಗಳು, ಬಿಲ್ ಕಲೆಕ್ಟರ್‍ಗಳನ್ನು ಒಳಗೊಂಡು ಎಲ್ಲ ತಾಲ್ಲೂಕುಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳ ತಂಡ ರಚಿಸಿಕೊಂಡು ವ್ಯವಸ್ಥಿತವಾಗಿ ಯೋಜನೆ ಹಾಕಿಕೊಂಡು ಸರ್ವೇ ಕಾರ್ಯ ನಡೆಸಬೇಕು ಜೊತೆಗೆ ಪೊಲೀಸರ ಭದ್ರತೆಯಲ್ಲಿ ತೆರವು ಕಾರ್ಯ ಕೈಗೊಳ್ಳಬೇಕು. ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿರುವುದರಿಂದ ತೆರವುಗೊಳಿಸುವ ವೇಳೆ ಸ್ಥಳೀಯರು, ಸಂಬಂಧಿಸಿದ ಧರ್ಮದವರನ್ನು ಮನವೊಲಿಸಿ ಅಥವಾ ಅಂತಹ ಕಟ್ಟಡಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಜ.7 ರಿಂದಲೇ ಸರ್ವೇ ಜೊತೆಗೆ ತೆರವು ಕಾರ್ಯಾಚರಣೆ ಆರಂಭಿಸಬೇಕು. ಅವಶ್ಯಕತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಸಿಇಒ ಅವರೂ ಸಹಕರಿಸುವರು. ಈ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದಾಗಿದ್ದು, ಸರ್ಕಾರ ಹಾಗೂ ಹೈಕೋರ್ಟ್‌ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದೆ’ ಎಂದರು.

‘ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೊಲೀಸ್ ಭದ್ರತೆ ಒದಗಿಸುವರು’ ಎಂದರು.

‘ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳು ಸ್ಥಾಪನೆಯಾಗಿರುವ ಕುರಿತು ಸಾರ್ವಜನಿಕರು ಮಾಹಿತಿ ನೀಡಬಹುದು. ಈ ಕುರಿತು ಮಾಹಿತಿ ನೀಡಿದ ವ್ಯಕ್ತಿಯ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಈ ರೀತಿ ಸಂಗ್ರಹಿಸಿದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲಾಧಿಕಾರಿಗಳಿಗೆ ಫೆ.15 ರೊಳಗೆ ಸಲ್ಲಿಸಬೇಕು. ಇದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಮಾರ್ಚ್ 15 ರೊಳಗೆ ಸರ್ಕಾರಕ್ಕೆ ಸಲ್ಲಿಸುವರು’ ಎಂದು ಹೇಳಿದರು.

ಸರ್ವೇ ಮತ್ತು ತೆರವು ಕಾರ್ಯಾಚರಣೆ ಕುರಿತು ನನ್ನ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳ 1ನೇ ಸೋಮವಾರ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು. ಆದ್ದರಿಂದ ನಾಳೆಯಿಂದಲೇ ಸರ್ವೇ ಕಾರ್ಯ ಆರಂಭಿಸಬೇಕು. ಪ್ರತಿ ದಿನ ಕಟ್ಟುನಿಟ್ಟಾಗಿ ನನಗೆ ವರದಿ ಸಲ್ಲಿಸಬೇಕೆಂದರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಸಂತೋಷ್‍ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT