ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್

ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಮನೂರು ಶಿವಶಂಕರಪ್ಪ
Last Updated 17 ಜನವರಿ 2021, 0:46 IST
ಅಕ್ಷರ ಗಾತ್ರ

ದಾವಣಗೆರೆ: ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ ಗಾದಿಗೆ ಏರಲು ಹಲವು ಆಮಿಷಗಳನ್ನು ಒಡ್ಡುತ್ತಾರೆ. ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದಕ್ಕೆ ಒಳಗಾಗಬಾರದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.

ದಾವಣಗೆರೆ ಉತ್ತರ –ದಕ್ಷಿಣ ಮತ್ತು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಇಲ್ಲಿನ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಶನಿವಾರ ನಡೆದ ಅಭಿನಂದನಾ ಸಮಾರಂಭ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವು ಬಿಜೆಪಿಗಿಂತ ಹೆಚ್ಚು ಸ್ಥಾನ ಗಳಿಸಿದ್ದೇವೆ. ಆದರೆ ವಿರೋಧ ಪಕ್ಷದವರು ತಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದು ಹೇಳುತ್ತಿದ್ದಾರೆ. ಯಾರೂ ಆಮಿಷಕ್ಕೆ ಒಳಗಾಗದೇ ಎಲ್ಲ ಕಡೆಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸ್ಥಾನ ಬರುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಬಡವರು, ಹಿಂದುಳಿದ ವರ್ಷಗಳ ಜನರು ಅಧಿಕಾರಕ್ಕೆ ಬರಲು ರಾಜೀವ್ ಗಾಂಧಿ ಅವರು ಜಾರಿಗೊಳಿಸಿದ ಮೀಸಲಾತಿಯೇ ಕಾರಣ. ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡುವ ಮೂಲಕ ಅವರು ಅಧಿಕಾರಕ್ಕೆ ಬರಲು ಕಾರಣರಾದರು. ಇಂತಹ ಒಳ್ಳೆಯ ಕೆಲಸ ಕಾಂಗ್ರೆಸ್ ಪಕ್ಷದಿಂದ ಆಗಿದೆಯೇ ಹೊರತು ಬೇರೆ ಪಕ್ಷಗಳಿಂದ ಆಗಿಲ್ಲ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ವೇಳೆ ಹಲವು ಕಿತ್ತಾಟಗಳು ನಡೆದಿವೆ. ಮುಂದೆಯೂ ಸಚಿವ ಸ್ಥಾನಕ್ಕಾಗಿ ಕಿತ್ತಾಟಗಳು ನಡೆಯುತ್ತವೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ. ಕಾಂಗ್ರೆಸ್ ಸದಸ್ಯರು ಒಗ್ಗಟ್ಟಾಗಿದ್ದು, ಬೆಂಬಲಿತರೇ ಅಧಿಕಾರದಲ್ಲಿ ಇರುವಂತೆ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದು ಅವರು ಕಿವಿಮಾತುಹೇಳಿದರು.

ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವ ಮೂಲಕ ಪಕ್ಷಕ್ಕೆ ಒಳ್ಳೆಯ ವರ್ಚಸ್ಸನ್ನು ತಂದು ಕೊಟ್ಟಿರುವುದು ಶ್ಲಾಘನೀಯ. ಇದೇ ರೀತಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಒಗ್ಗಟ್ಟು ಕಾಪಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಲು ಕೈಜೋಡಿಸಿ’ಎಂದರು.

ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ‘ಇಂದಿನ ಬಿಜೆಪಿ ಸರ್ಕಾರದಲ್ಲಿ ಸಿಡಿ ಮೂಲಕ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ಲಂಚದಿಂದ ಸರ್ಕಾರ ನಡೆಯುತ್ತಿದೆ. ಜಿಲ್ಲೆಯಲ್ಲಿ ಈ ಹಿಂದೆ 7 ಕಾಂಗ್ರೆಸ್ ಶಾಸಕರು ಇದ್ದರು. ಆದರೆ ಸಂಘಟನೆ ಕೊರತೆಯಿಂದಾಗಿ ಆ ಸಂಖ್ಯೆ ಎರಡಕ್ಕೆ ಇಳಿದಿದೆ. ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬೂತ್‌, ವಾರ್ಡ್ ಹಾಗೂ ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಮಾತನಾಡಿ, ‘ಕಳೆದ ಚುನಾವಣೆಯಲ್ಲಿ ಎಸ್‌.ಎಸ್. ಮಲ್ಲಿಕಾರ್ಜುನ ಅವರು ಅಲ್ಪಮತಗಳಿಂದ ಸೋಲನ್ನು ಅನುಭವಿಸಬೇಕಾಯಿತು. ಇದರ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರನ್ನು ಸಂಘಟಿಸುವ ಮೂಲಕ ನಾಯಕರ ಕೈ ಬಲಪಡಿಸಬೇಕು. ಸೋತಿರುವವರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು’ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಕರಿಬಸಪ್ಪ, ಕೆ.ಜಿ.ಬಸವನಗೌಡ, ಎಪಿಎಂಸಿ ಅಧ್ಯಕ್ಷ ಎಸ್‌.ಕೆ.ಚಂದ್ರಶೇಖರ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ.ಶಿವಗಂಗಾ, ಮುಖಂಡರಾದ ಮುದೇಗೌಡ್ರ ಗಿರೀಶ್, ಬಿ.ಎಚ್. ವೀರಭದ್ರಪ್ಪ, ಖಾಲಿದ್ ಅಹಮದ್, ಜಿ.ಸಿ. ನಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT