ಭಾನುವಾರ, ಜುಲೈ 3, 2022
27 °C

6 ತಿಂಗಳು ಮುಂಚೆಯೇ ಟಿಕೆಟ್ ಘೋಷಣೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ವಿಧಾನಸಭಾ ಚುನಾವಣೆ ಆರು ತಿಂಗಳು ಇರುವಾಗಲೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲು ಪ್ರಯತ್ನ ಮಾಡುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಹುಲ್ ಗಾಂಧಿ ಅವರು 150 ಸ್ಥಾನ ಗೆಲ್ಲಬೇಕು ಎಂದು ನಮಗೆ ಟಾರ್ಗೆಟ್ ಕೊಟ್ಟಿದ್ದಾರೆ. ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ಗೆದ್ದ ಶಾಸಕರು ಹಾಗೂ ಹೈಕಮಾಂಡ್ ನಿರ್ಧರಿಸುತ್ತಾರೆ’ ಎಂದು ಸ್ಪಷ್ಪಪಡಿಸಿದರು.

‘ರಾಜ್ಯದಲ್ಲಿ ಬುಲ್ಡೋಜರ್ ಆಡಳಿತ ತರುವುದಾದರೆ ಮೊದಲು ಶ್ರೀರಾಮ ಸೇನೆ ಮೇಲೆಯೇ ಬುಲ್ಡೋಜರ್ ಹರಿಸಲಿ’ ಎಂದು ಸಿದ್ದರಾಮಯ್ಯ ಅವರು ಪ್ರಮೋದ್‌ ಮುತಾಲಿಕ್‌ ಹೇಳಿಕೆಗೆ ತಿರುಗೇಟು ನೀಡಿದರು.

ಹುಬ್ಬಳ್ಳಿ ಗಲಭೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ‘ವಿವಾದಾತ್ಮಕ ಪೋಸ್ಟ್ ಹಾಕಿದ್ದ ಪ್ರಶಾಂತ್ ಹಿರೇಮಠ್ ಹಿಂದೂ ಸಮಾಜದನು. ಅವನ ಹಿಂದೆ ಯಾರಿದ್ದಾರೆ? ನಮ್ಮ ಕಡೆ ಏಕೆ ಬೊಟ್ಟು ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

‘ಯಾವುದೇ ಪಕ್ಷದವರು ತಪ್ಪು ಮಾಡಿದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಏಕೆಂದರೆ ರಾಜ್ಯದಲ್ಲಿ ಶಾಂತಿ, ಸೌಹಾರ್ದ ಮುಖ್ಯ’ ಎಂದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ 75 ಯುನಿಟ್‌ ಉಚಿತ ವಿದ್ಯುತ್ ನೀಡುವುದಾಗಿ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ ಈಗ ವಿದ್ಯುತ್ ಕ್ಷಾಮ ಎದುರಾಗಿದೆ. ಸರ್ಕಾರ ಈವರೆಗೂ ಘೋಷಿಸಿದಂತೆ ಫಲಾನುಭವಿಗಳಿಗೆ ಕೊಟ್ಟಿಲ್ಲ. ಸರ್ಕಾರದ ಆದೇಶ ಬರಲಿ ನೋಡೋಣ’ ಎಂದು ಪ್ರತಿಕ್ರಿಯಿಸಿದರು.

‘ಎಸ್‌ಟಿಪಿ, ಟಿಎಸ್‌ಪಿ ಯೋಜನೆಯಡಿ ₹47 ಸಾವಿರ ಕೋಟಿ ಮೀಸಲಿಡುವ ಬದಲು ₹28 ಸಾವಿರ ಕೋಟಿ ಮೀಸಲಿಟ್ಟಿದೆ. ಈ ಯೋಜನೆಯ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡು ಎಸ್ಸಿ, ಎಸ್ಟಿ ಸಮುದಾಯಗಳ ಕಣ್ಣಿಗೆ ಮಣ್ಣು ಎರೆಚುವ, ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿದೆ. ಮೊದಲು ಅದನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಅಭ್ಯರ್ಥಿ ಹೈಕಮಾಂಡ್ ನಿರ್ಧಾರ: ‘ಸಾಮೂಹಿಕ ನಾಯಕತ್ವದಲ್ಲೇ 2023ರ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದ್ದು, ಗೆದ್ದ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವಧಿಗೆ ಮುನ್ನ ಚುನಾವಣೆ ನಡೆಯುವುದಿಲ್ಲ’ ಎಂದರು.

‘ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಅವರಿಗೆ ಏನು ಕೆಲಸವಿಲ್ಲದಂತೆ ಆಗಿದೆ’ ಎಂದು ವ್ಯಂಗ್ಯವಾಡಿದರು.  

ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ವಿನಯ್‌ ಕುಲಕರ್ಣಿ, ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಎಸ್.ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಮುಖಂಡರಾದ ಪಿ.ರಾಜ್‌ಕುಮಾರ್, ಕೆ.ಎಸ್‌.ಬಸವಂತಪ್ಪ, ದಿನೇಶ್ ಕೆ. ಶೆಟ್ಟಿ, ಎ. ನಾಗರಾಜ್, ನಗರಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್, ಅಯೂಬ್ ಪೈಲ್ವಾನ್, ಶಾಮನೂರು ಲಿಂಗರಾಜ, ಇಟ್ಟಿಗುಡಿ ಮಂಜುನಾಥ್, ನಾಗೇಂದ್ರಪ್ಪ, ಎನ್.ಎಚ್. ಶ್ರೀನಿವಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು