ಶನಿವಾರ, ಸೆಪ್ಟೆಂಬರ್ 21, 2019
21 °C
ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

‘ಬಿಜೆಪಿ ಸರ್ಕಾರದಿಂದ ದ್ವೇಷದ ರಾಜಕಾರಣ’

Published:
Updated:
Prajavani

ದಾವಣಗೆರೆ: ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಆಶ್ರಯದಲ್ಲಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟಿಸಿದರು.

ಜಯದೇವ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧವೂ ವಾಗ್ದಾಳಿ ನಡೆಸಿದರು. ಜಯದೇವ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ವಾಹನಗಳ ಸಂಚಾರವನ್ನು ತಡೆದರು. ಟೈರ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ‘ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡುತ್ತಿದ್ದರೂ ಬಿಜೆಪಿ ಒತ್ತಡಕ್ಕೆ ಮಣಿದು ಇ.ಡಿ. ಅಧಿಕಾರಿಗಳು ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದ್ದಾರೆ. ಪ್ರಧಾನಿ ಮೋದಿ, ಅಮಿತ್‌ ಶಾ ಅವರು ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಿದ್ದರು. ಆದರೆ, ಈಚೆಗೆ ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂ ಅವರನ್ನು ಬಂಧಿಸಲಾಗಿತ್ತು. ಇದೀಗ ಡಿ.ಕೆ.ಶಿ ಸರದಿ ಬಂದಿದೆ. ಕಾಂಗ್ರೆಸ್‌ ಅನ್ನು ಮಾತ್ರ ಗುರಿಯಾಗಿಸಿಕೊಂಡು, ಮೋದಿ ಅವರು ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ದೇಶದಲ್ಲಿ ಆರ್ಥಿಕ ಸ್ಥಿತಿ ಕುಸಿದಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಶೇ 8ರಷ್ಟಿದ್ದ ಜಿಡಿಪಿ ಈಗ ಶೇ 5ಕ್ಕೆ ಕುಸಿದಿದೆ. ಬಡವರ ಪರ ಕೆಲಸ ಮಾಡಲು ಇವರಿಗೆ ಆಗುತ್ತಿಲ್ಲ. ಸಣ್ಣಪುಟ್ಟ ಕೈಗಾರಿಕೆಗಳು ಮುಚ್ಚುತ್ತಿದ್ದು, ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ. ಒಳ್ಳೆಯ ಆಡಳಿತ ನೀಡುವುದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷವನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಬಿಜೆಪಿಯಲ್ಲಿ ಯಾರೂ ಹಗರಣ ಮಾಡಿಲ್ಲವೇ? ಅಮಿತ್‌ ಶಾ ಪುತ್ರನ ಆಸ್ತಿ ಹೆಚ್ಚಾಗಿರುವ ಬಗ್ಗೆ ಏಕೆ ತನಿಖೆ ನಡೆಸುತ್ತಿಲ್ಲ? ನೂರಾರು ಕೋಟಿ ರೂಪಾಯಿ ಆಮಿಷವೊಡ್ಡಿ ಆಪರೇಷನ್‌ ಕಮಲ ನಡೆಸಿರುವ ಬಗ್ಗೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ತಮಗೆ ಬೇಕಾದರಿಗೆ ಸಚಿವ ಸ್ಥಾನ ಕೊಡಿಸುವ ತಾಕತ್‌ ಇಲ್ಲದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಲಿ. ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಮುಂದಾಗಲಿ’ ಎಂದೂ ಸಲಹೆ ನೀಡಿದರು.

ಕಾಂಗ್ರೆಸ್‌ ಮುಖಂಡರಾದ ದಿನೇಶ್‌ ಕೆ. ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್‌. ಬಸವಂತಪ್ಪ, ಅಯೂಬ್‌ ಪೈಲ್ವಾನ್‌, ಡಿ. ವೀರಣ್ಣ, ಎ. ನಾಗರಾಜ್‌, ಚಂದ್ರು, ಖಾಲೀದ್‌, ಮುಜಾಯಿದ್‌, ಹರೀಶ್‌, ಪ್ರಕಾಶ್‌ ಪಾಟೀಲ್‌, ಎಂ. ಹಾಲೇಶ್‌ ಅವರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

**

ನೂರಾರು ಕೋಟಿ ವೆಚ್ಚದಲ್ಲಿ ವಿದೇಶ ಸುತ್ತುವ ಪ್ರಧಾನಿ ರಾಜ್ಯದ ನೆರೆ ಸಂತ್ರಸ್ತರ ಸಂಕಷ್ಟ ವಿಚಾರಿಸಿಲ್ಲ. ದೇಶದ ಜನರ ಬಗ್ಗೆ ಇವರಿಗೆ ಕಾಳಜಿ ಇಲ್ಲ.
– ಎಚ್‌.ಬಿ. ಮಂಜಪ್ಪ, ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್‌ ಸಮಿತಿ

**

ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ಬ್ರಿಟಿಷರಿಗಿಂತ ಅಪಾಯಕಾರಿಯಾಗಿರುವ ಮೋದಿ ಸರ್ಕಾರವನ್ನು ಸ್ವಾತಂತ್ರ್ಯ ಸಂಗ್ರಾಮ ಮಾದರಿಯಲ್ಲೇ ಕಿತ್ತೊಗೆಯಬೇಕು.
– ಡಿ. ಬಸವರಾಜ್‌, ಕೆಪಿಸಿಸಿ ಮಾಜಿ ಕಾರ್ಯದರ್ಶಿ

Post Comments (+)