ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಸಂಸದ ಸಿದ್ದೇಶ್ವರ ವಿರುದ್ಧ ‘ಕೈ’ ಪ್ರತಿಭಟನೆ

Published 17 ಜನವರಿ 2024, 7:12 IST
Last Updated 17 ಜನವರಿ 2024, 7:12 IST
ಅಕ್ಷರ ಗಾತ್ರ

ದಾವಣಗೆರೆ: ‘ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹವಾಲಾ ದಂಧೆಯಲ್ಲಿ ತೊಡಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರೀಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು,  ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಬೆಳಿಗ್ಗೆ ಸೇರಿದ ಪ್ರತಿಭಟನಕಾರರು ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಫಲಕಗಳನ್ನು ಹಿಡಿದು ಮೆರವಣಿಗೆ ಮೂಲಕ ಸಾಗಿ ಹದಡಿ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

‘8-10 ವರ್ಷಗಳಿಂದ ₹ 500 ಕೋಟಿಗೂ ಹೆಚ್ಚು ಹವಾಲಾ ದಂಧೆ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ಸಂಶಯ ಮೂಡುವಂತಹ ಪೋಸ್ಟ್‌ಗಳು ಕಂಡು ಬಂದಿವೆ. ಬೆಂಗಳೂರಿನ ಹಲಸೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಿದ್ದೇಶ್ವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಬಿಜೆಪಿ ಸರ್ಕಾರವಿದ್ದಾಗ ಸಿದ್ದೇಶ್ವರ ಅವರು ಜಿಲ್ಲೆಯ ಒಬ್ಬ ಶಾಸಕರನ್ನೂ ಸಚಿವರನ್ನಾಗಿ ಮಾಡಲಿಲ್ಲ. ಈಗ ಅವರ ವಿರುದ್ಧ ಆರೋಪ ಕೇಳಿಬಂದಿದ್ದು, ಅವರನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಆಗ್ರಹಿಸಿದರು.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಹಗರಣಗಳು ನಡೆದಿವೆ. ಬಿಜೆಪಿಯವರ ತಪ್ಪುಗಳು ಸಾಕಷ್ಟಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸುಳ್ಳು ಆರೋಪ ಹೊರಿಸಿದರು. ಈಗ ರಾಮನ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮೊದಲು ಅವರು ಬಡವರ ಕಷ್ಟಗಳಿಗೆ ಸ್ಪಂದಿಸಲಿ’ ಎಂದು ಹರಿಹರದ ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿದರು.

ಪಾಲಿಕೆ ಸದಸ್ಯ ಚಮನ್‌ಸಾಬ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ರೇವಣಸಿದ್ದಪ್ಪ, ಅಬ್ದುಲ್ ಲತೀಫ್, ಎಲ್.ಎಂ.ಎಚ್. ಸಾಗರ್, ಅಬ್ದುಲ್ ಜಬ್ಬಾರ್, ಕೋಳಿ ಇಬ್ರಾಹಿಂ, ಮೈನುದ್ದೀನ್ ಇನ್ನಿತರ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT