ಶುಕ್ರವಾರ, ಜೂನ್ 5, 2020
27 °C
ಜನದಟ್ಟಣೆ ಕಡಿಮೆ ಮಾಡಲು ಕ್ರಮ

ಕೊರೊನಾ ಭೀತಿ: ಕೈದಿಗಳಿಗೆ ಮೂರು ತಿಂಗಳ ಬಿಡುಗಡೆ ಭಾಗ್ಯ

ವಿನಾಯಕ ಭಟ್‌ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಜೈಲಿನೊಳಗೆ ಜನದಟ್ಟಣೆ ಕಡಿಮೆ ಮಾಡಲು ಸಣ್ಣ–ಪುಟ್ಟ ಪ್ರಕರಣಗಳಲ್ಲಿ ರಾಜ್ಯದ ಕಾರಾಗೃಹಗಳಲ್ಲಿರುವ ಅರ್ಹ ಕೈದಿಗಳನ್ನು ಜಾಮೀನು ಹಾಗೂ ಪರೋಲ್‌ ಮೇಲೆ ಮೂರು ತಿಂಗಳ ಅವಧಿಗೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೊರೊನಾ ಸೋಂಕು ವ್ಯಾಪಕವಾಗಿ ಹಡುತ್ತಿರುವುದರಿಂದ ಕೈದಿಗಳು ಒಟ್ಟಿಗೆ ಇರುವುದರಿಂದ ಅವರ ಆರೋಗ್ಯ ಕಾಪಾಡಿಕೊಳ್ಳುವುದು ಜೈಲಿನ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ನೀಡುವ ಸಣ್ಣ–ಪುಟ್ಟ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಹಾಗೂ ಶಿಕ್ಷೆಗೊಳಗಾದ ಕೈದಿಗಳನ್ನು ಪರೋಲ್‌ ಮೇಲೆ ಆಯಾ ಜಿಲ್ಲೆಗಳ ಕಾರಾಗೃಹದಿಂದ ಬಿಡುಗಡೆ ಮಾಡಲು ಸರ್ಕಾರ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಮಿತಿ ರಚನೆ: ಕಾರಾಗೃಹದಲ್ಲಿರುವ ಯಾವ ಕೈದಿಗಳನ್ನು ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪಬ್ಲಿಕ್ ಪ್ರಾಸಿಕ್ಯೂಟರ್‌ ಹಾಗೂ ಜಿಲ್ಲಾ ಕಾರಾಗೃಹದ ಅಧೀಕ್ಷಕರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

ದಾವಣಗೆರೆ ಜಿಲ್ಲೆಯಲ್ಲಿ ಸಮಿತಿಯ ಅಧ್ಯಕ್ಷೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಕೆ.ವಿ. ಗೀತಾ ನೇತೃತ್ವದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಲಾಗಿದೆ. ಒಂದೆರಡು ದಿನಗಳಲ್ಲೇ ಯಾವ ಯಾವ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಅರ್ಹತೆ ಏನು?: ಕೊಲೆ, ಅತ್ಯಾಚಾರ, ಡಕಾಯಿತಿ, ರಾಬರಿ, ಹಲ್ಲೆಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರಣಾಧೀನ ಕೈದಿಗಳು ಹಾಗೂ ಶಿಕ್ಷೆಗೊಳಗಾದ ಕೈದಿಗಳನ್ನು ಬಿಡುಗಡೆಗೆ ಪರಿಗಣಿಸುವುದಿಲ್ಲ. ಮನೆ, ಬೈಕ್‌ ಕಳವು, ಅಕ್ರಮ ಮದ್ಯ ಮಾರಾಟ, ಪಿಕ್‌ ಪಾಕೆಟ್‌, ಜಗಳ ಇಂತಹ ಸಣ್ಣ–ಪುಟ್ಟ ಪ್ರಕರಣಗಳಲ್ಲಿ ಬಂಧನಕ್ಕೊಳಗಾದವರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಬಿಡಗಡೆಗೆ ಅರ್ಹರಾಗಿರುವುದಿಲ್ಲ ಎಂದು ಅಧಿಕೃತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

‘ಕಾರಾಗೃಹದಲ್ಲಿ ಅರ್ಹ ವಿಚಾರಣಾಧೀನ ಕೈದಿಗಳಿಂದ ಮುಚ್ಚಳಿಕೆ ಬರೆಸಿಕೊಂಡು ಮೂರು ತಿಂಗಳ ಅವಧಿಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಈ ಅವಧಿ ಪೂರ್ಣಗೊಳ್ಳುವ ಮೊದಲೇ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡರೆ ಜೈಲಿಗೆ ಮರಳಬೇಕಾಗಿಲ್ಲ. ಜಾಮೀನು ಪಡೆದುಕೊಳ್ಳದಿದ್ದರೆ ಅವಧಿ ಮುಗಿದ ದಿನ ವಾಪಸ್ಸಾಗಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ಕೈದಿಗಳನ್ನು ಬಂಧಿಸಿ ಕರೆತರಲಾಗುತ್ತದೆ’ ಎನ್ನುತ್ತಾರೆ ಅಧಿಕಾರಿಗಳು.

‘ಅದೇ ರೀತಿ ಪರೋಲ್‌ ಮೇಲೆ ತೆರಳುವ ಶಿಕ್ಷಗೊಳಗಾದ ಕೈದಿಗಳು ಅವಧಿ ಮುಗಿದ ತಕ್ಷಣವೇ ವಾಪಸ್ಸಾಗಬೇಕು. ಈಗ ಮೂರು ತಿಂಗಳ ಕಾಲ ಹೊರಗೆ ಇರುವುದರಿಂದ ನ್ಯಾಯಾಲಯ ನಿಗದಿಪಡಿಸಿದ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ದಿನಾಂಕ ಮುಗಿದ ಮೇಲೆಯೂ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಜೈಲಿನಲ್ಲೇ ಇರಬೇಕಾಗುತ್ತದೆ’ ಎಂದು ಮೂಲಗಳು ತಿಳಿಸಿವೆ.

ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿರುವ 40ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಇವರ ಪೈಕಿ ಅಂದಾಜು 20 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಗುವ ಸಾಧ್ಯತೆ ಇದೆ.

***

ಸರ್ಕಾರದ ನಿರ್ದೇಶನದಂತೆ ಷರತ್ತಿನ ಮೇಲೆ ಬಿಡುಗಡೆ ಮಾಡಬಹುದಾದ ಅರ್ಹ ಕೈದಿಗಳ ಪಟ್ಟಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ನೇತೃತ್ವದಲ್ಲಿ ತಯಾರಿಸಲಾಗುತ್ತಿದೆ.

– ಹನುಮಂತರಾಯ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

*

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು ಕೆಲ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಹೊರ ಬೀಳಲಿದೆ.

– ಕರ್ಣ ಬಿ. ಕ್ಷತ್ರಿ, ಅಧೀಕ್ಷಕ, ದಾವಣಗೆರೆ ಜಿಲ್ಲಾ ಕಾರಾಗೃಹ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು