ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ | ಇಲಾಖಾ ಮಟ್ಟದಲ್ಲಿ ಸಮನ್ವಯ ಅಗತ್ಯ: ರುದ್ರೇಶ್

ತಾಲ್ಲೂಕು ಉಸ್ತುವಾರಿ ಅಧಿಕಾರಿಯಿಂದ ಪ್ರಗತಿ ಪರಿಶೀಲನಾ ಸಭೆ
Published 11 ಜನವರಿ 2024, 8:04 IST
Last Updated 11 ಜನವರಿ 2024, 8:04 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಹೊಂದಿ ಕಾರ್ಯನಿರ್ವಹಿಸಿದರೆ ಸಮಗ್ರ ಅಭಿವೃದ್ಧಿ ಸಾಧ್ಯ’ ಎಂದು ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌, ತಾಲ್ಲೂಕು ಉಸ್ತುವಾರಿ ಅಧಿಕಾರಿ ಎಸ್.ಎನ್. ರುದ್ರೇಶ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನ ಬೆಂಕಿಕೆರೆ ಕಣಿವೆಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ನೀಲಗಿರಿ ಮರಗಳನ್ನು ಬೆಳೆಸಲಾಗಿದೆ. ಅವುಗಳನ್ನು ತೆಗೆದು ಪರಿಸರ ಸಮತೋಲನ ಕಾಪಾಡುವ ಗಿಡ–ಮರಗಳನ್ನು ಬೆಳೆಸಬೇಕು. ಬೆಂಕಿಕೆರೆ ಅರಣ್ಯ ಪ್ರದೇಶವನ್ನು ನರೇಗಾ ಯೋಜನೆ ಅಡಿ ‘ಸಾಲು ಮರದ ತಿಮ್ಮಕ್ಕ’ ಉದ್ಯಾನವಾಗಿ ಅಭಿವೃದ್ಧಿಪಡಿಸಿದರೆ ಜನಾಕರ್ಷಣೆ ಕೇಂದ್ರವಾಗಿ ಸರ್ಕಾರಕ್ಕೆ ಹಾಗೂ ಇಲಾಖೆಗೆ ಆದಾಯ ಬರುತ್ತದೆ ಎಂದು ಸೂಚನೆ ನೀಡಿದರು.

ಚನ್ನಗಿರಿ ಪಟ್ಟಣದ ಹೊರವಲಯದಲ್ಲಿರುವ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ 13 ಒಂದೇ ಕಡೆ ಸಂಧಿಸುತ್ತಿದ್ದು, ಪ್ರಥಮ ದರ್ಜೆ ಕಾಲೇಜಿನ ಬಳಿ ವಿಶಾಲವಾದ ವೃತ್ತವನ್ನು ನಿರ್ಮಿಸಬೇಕು. ಸಂತೇಬೆನ್ನೂರಿನಿಂದ ಚನ್ನಗಿರಿ ಕಡೆಗೆ ಬರುವ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆ ಮಾಡುವುದರಿಂದ ಸುಗಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ವಾಹನಗಳ ಸುಗಮ ಸಂಚಾರಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

ಕೃಷಿ, ತೋಟಗಾರಿಕೆ ಹಾಗೂ ತಾಲ್ಲೂಕು ಪಂಚಾಯಿತಿ ಇಲಾಖೆ ಸಮನ್ವಯದಲ್ಲಿ ಅಂತರ್ಜಲಮಟ್ಟ ಹೆಚ್ಚಿಸಲು ಚೆಕ್ ಡ್ಯಾಂಗಳನ್ನು ನಿರ್ಮಿಸಲು ಮುಂದಾಗಬೇಕು. ವಿದ್ಯಾರ್ಥಿನಿಲಯಗಳ ಅನುಕೂಲಕ್ಕಾಗಿ ತೋಟಗಾರಿಕೆ ಇಲಾಖೆಯವರು ನಿಂಬೆ, ಕರಿಬೇವು ಮುಂತಾದ ಗಿಡಗಳನ್ನು ಕೊಡಬೇಕು. ವೈದ್ಯರ ಕೊರತೆ ಇರುವ ಅಸ್ಪತ್ರೆಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಬೇಕು. ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ತಹಶೀಲ್ದಾರ್ ಪಿ.ಎಸ್.ಎರ್ರಿಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ.ಉತ್ತಮ, ಬಿಇಒ ಎಲ್.ಜಯಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT