ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ರೇಷ್ಮೆ ಮಾರುಕಟ್ಟೆ ಆರಂಭಿಸುವಂತೆ ಜಿಲ್ಲಾಧಿಕಾರಿ ಸೂಚನೆ

Published 27 ಸೆಪ್ಟೆಂಬರ್ 2023, 5:21 IST
Last Updated 27 ಸೆಪ್ಟೆಂಬರ್ 2023, 5:21 IST
ಅಕ್ಷರ ಗಾತ್ರ

ದಾವಣಗೆರೆ: ‘ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಗಿತಗೊಂಡಿರುವ ದಾವಣಗೆರೆಯಲ್ಲಿ ರೇಷ್ಮೆ ಮಾರುಕಟ್ಟೆಯನ್ನು ಪುನಾರಂಭಿಸಬೇಕು' ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಬೆಳೆಗಾರರು ರೇಷ್ಮೆ ಮಾರಾಟಕ್ಕೆ ರಾಮನಗರ ಜಿಲ್ಲೆಗೆ ಹೋಗಬೇಕಾಗಿದೆ. ನೂಲು ಬಿಚ್ಚುವ ಸರ್ಕಾರಿ ಕಿರು ಘಟಕ ಐದು ವರ್ಷಗಳಿಂದ ಅದು ನಿಂತಿದೆ’ ಎಂದು ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಅವರು ಮೇಲಿನಂತೆ ಸೂಚಿಸಿದರು.

‘ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ಹಲವು ಯೋಜನೆಗಳಿಗೆ 2023–24ನೇ ಸಾಲಿಗೆ ಅನುದಾನ ಬಿಡುಗಡೆಯಾಗಿಲ್ಲ. ರಾಮನಗರದಿಂದ ಡೀಲರ್‌ಗಳ ಮನವೊಲಿಸಿ ಅವರನ್ನು ಕರೆತನ್ನಿ. ಕೆಜಿಗೆ ₹5ರಿಂದ  ₹10 ಕಡಿಮೆಯಾದರೂ ಪರ್ವಾಗಿಲ್ಲ. ಇಲ್ಲಿಗೆ ಖರೀದಿಸುವಂತೆ ಮಾಡಿ. ಸ್ಥಳೀಯರಿಗೂ ತರಬೇತಿ ನೀಡಿ’ ಎಂದು ಸೂಚಿಸಿದರು.

ಯೋಜನೆಯಡಿ ಜಲಸಂಪನ್ಮೂಲ ಇಲಾಖೆಗೆ ಎಸ್‌ಸಿಪಿ ಯೋಜನೆಯಡಿ ₹ 34.84 ಕೋಟಿಯಲ್ಲಿ ₹ 9.20 ಕೋಟಿ ಹಾಗೂ ಟಿಎಸ್‌ಪಿ ಅಡಿ ₹19 ಕೋಟಿಯಲ್ಲಿ ₹ 5.55 ಕೋಟಿ ಕಡಿಮೆ ಹಣ ಬಳಕೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಈ ಹಣದಲ್ಲಿ ಭತ್ತಕ್ಕೆ ಹನಿ ನೀರಾವರಿ ವ್ಯವಸ್ಥೆ ಮಾಡಬಹುದಿತ್ತು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಎಸ್‌ಸಿಪಿ, ಟಿಎಸ್‌ಪಿ ಬುಡಕಟ್ಟು ಯೋಜನೆಯ ಸೌಲಭ್ಯವನ್ನು ವಿವಿಧ ಇಲಾಖೆಗಳಿಗೆ ನಿಗದಿಪಡಿಸಿದ ಅನುದಾನದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು. ‌

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸಾಂತ್ವನ ಕೇಂದ್ರಗಳಲ್ಲಿ ಶೋಷಣೆಗೆ ಒಳಪಟ್ಟ ಮಹಿಳೆಯರು ಮಾನಸಿಕವಾಗಿ, ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ವಿವಿಧ ಉತ್ಪನ್ನ ಚಟುವಟಿಕೆ ಕೈಗೊಳ್ಳಬೇಕು. ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಅರ್ಜಿ ಸಲ್ಲಿಸುವಿಕೆಯಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಸೌಲಭ್ಯ ಒದಗಿಸಬೇಕು ಮತ್ತು ಸಖಿ ಕೇಂದ್ರಗಳಿಗೆ ಅಧಿಕಾರಿಗಳು  15 ದಿನಗಳಿಗೊಮ್ಮೆ ಕಡ್ಡಾಯವಾಗಿ ಭೇಟಿ ನೀಡಬೇಕು’ ಎಂದು ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

‘ಕಾರಣಾಂತರದಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ರೇಷ್ಮೆ ಕೈಗಾರಿಕೆಗಳ ನಿಗಮ(ಕೆಎಸ್‌ಐಸಿ)ದ ಮಳಿಗೆಯನ್ನು ಪುನರಾರಂಭಿಸಬೇಕು. ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರೆ ಸಾಲದು ಅವರಿಗೆ ಕೌಶಲ ತರಬೇತಿ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್, ಡಿ.ಡಿ.ಪಿ.ಐ ಕೊಟ್ರೇಶ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ನಾಗರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗಾಯಿತ್ರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಬಿಡುಗಡೆಯಾಗದ ಅನುದಾನ

ಪರಿಶಿಷ್ಟ ಜಾತಿ ಉಪಯೋಜನೆ ಬುಡಕಟ್ಟು ಉಪಯೋಜನೆಯಡಿ ಹಲವು ಇಲಾಖೆಗಳಿಗೆ 2023–24ನೇ ಸಾಲಿಗೆ ಅನುದಾನ ಬಿಡುಗಡೆಯಾಗಿಲ್ಲ. ಮಹಾನಗರ ಪಾಲಿಕೆ ಕೈಮಗ್ಗ ಮತ್ತು ಜವಳಿ ಇಲಾಖೆ ಕೃಷಿ ಸಣ್ಣ ನೀರಾವರಿ ಸಹಕಾರ ಸಂಘ ದಾವಣಗೆರೆ ವಿಶ್ವವಿದ್ಯಾಲಯ ಪದವಿಪೂರ್ವ ಶಿಕ್ಷಣ ಕನ್ನಡ ಮತ್ತು ಸಂಸ್ಕೃತಿ ಪಶುಪಾಲನಾ ತೋಟಗಾರಿಕೆ ಕಂದಾಯ ಹಾಗೂ ಬೆಸ್ಕಾಂ ಸೇರಿದಂತೆ ಇನ್ನೂ ಹಲವು ಇಲಾಖೆಗಳಿಗೆ ಸಭೆಯಲ್ಲಿ ಈ ವಿಷಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT