ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ರಿಂದ ಗ್ರಾ.ಪಂ ಕಚೇರಿಗಳ ಮುಂದೆ ಪ್ರತಿಭಟನೆ

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ, ಕೆಪಿಟಿಸಿಎಲ್ ಖಾಸಗೀರಣಕ್ಕೆ ವಿರೋಧ
Last Updated 27 ಜೂನ್ 2020, 12:45 IST
ಅಕ್ಷರ ಗಾತ್ರ

ದಾವಣಗೆರೆ: ರೈತ ವಿರೋಧಿ ನೀತಿಗಳನ್ನು ಕೈಬಿಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಜೂನ್ 29 ಹಾಗೂ 30ರಂದು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡರು ಹೇಳಿದರು.

‘ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಬಿತ್ತನೆ ಬೀಜ ಕಾಯ್ದೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಮಿತಿಯಿಂದ ‘ಕಾರ್ಪೊರೇಟ್ ಕೃಷಿ ಹಿಮ್ಮೆಟ್ಟಿಸಿ–ರೈತಾಪಿ ಕೃಷಿಯನ್ನು ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ರಾಷ್ಟ್ರವ್ಯಾಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು’ ಎಂದು ಆವರಗೆರೆ ಉಮೇಶ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಜೂನ್ 29ರಂದು ಬೆಳಿಗ್ಗೆ 11ಕ್ಕೆ ಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ಪ್ರತಿಭಟನೆ ಆರಂಭಿಸಿ, ಜನರಿಗೆ ಜಾಗೃತಿ ಮೂಡಿಸಲಾಗುವುದು. 30ರಂದು ಅಣಬೇರು, ಕಕ್ಕರಗೊಳ್ಳ, ಕಡ್ಲೇಬಾಳು, ಅಣಜಿ, ಆನಗೋಡು, ಕೊಡಗನೂರು, ಆವರಗೊಳ್ಳ, ಹೆಬ್ಬಾಳು, ಐಗೂರು ಸೇರಿ ಹಲವು ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ)ಯ ಹೊನ್ನೂರು ಮುನಿಯಪ್ಪ ಮಾತನಾಡಿ, ‘ಈ ಕಾನೂನುಗಳು ರೈತರಿಗೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಎಪಿಎಂಸಿ ತಿದ್ದುಪಡಿ ಕಾಯ್ದೆಯಲ್ಲಿ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವುದನ್ನು ಬಿಟ್ಟು ಕಾರ್ಪೊರೇಟ್‌ಗೆ ಮಣೆಹಾಕಿದ್ದಾರೆ’ ಎಂದು ಆರೋಪಿಸಿದರು.

ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ‘ಭೂಸುಧಾರಣಾ ಕಾಯ್ದೆಯನ್ನು ವಾಪಸ್ ಪಡೆದು ಹಿಂದಿನ ಕಾಯ್ದೆಯನ್ನೇ ಮುಂದುವರೆಸಬೇಕು. ನೀರಾವರಿ ಪ್ರದೇಶವನ್ನು ಹೊರಗಿಟ್ಟು ಭೂಸುಧಾರಣೆಗೆ ತರಬೇಕು ಎಂಬ ಮಾತು ಕೇಳಿ ಬರುತ್ತಿದೆ. ನೀರಾವರಿ ಎಂದರೆ ಪಂಪ್‌ಸೆಟ್, ಚಾನಲ್ ನೀರಾವರಿಯೇ ಎಂಬ ಗೊಂದಲ ಉಂಟಾಗಿದೆ. ರಾಜ್ಯದಲ್ಲಿ 13 ಲಕ್ಷ ಹೆಕ್ಟೇರ್ ಬೀಳು ಭೂಮಿ ಇದೆ ಎಂದು ಹೇಳುತ್ತಿದ್ದಾರೆ. ಆದರೆ ದನ ಮೇಯಿಸಲು ಜಾಗವಿಲ್ಲ’ ಎಂದು ಹೇಳಿದರು.

ರೈತ ಕೃಷಿ ಕಾರ್ಮಿಕ ಸಂಘಟನೆಯ ತಿಪ್ಪೇಸ್ವಾಮಿ, ಕರ್ನಾಟಕ ಜನಶಕ್ತಿ ಸತೀಶ್, ಕರ್ನಾಟಕ ಪ್ರಾಂತ ರೈತ ಸಂಘದ ಶ್ರೀನಿವಾಸ್, ಐರಣಿ ಚಂದ್ರು, ರಂಗನಾಥ್, ಪಾಲವನಹಳ್ಳಿ ಪ್ರಸನ್ನಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT