ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ತನಿಖೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Published 26 ಜನವರಿ 2024, 15:45 IST
Last Updated 26 ಜನವರಿ 2024, 15:45 IST
ಅಕ್ಷರ ಗಾತ್ರ

ದಾವಣಗೆರೆ: ‘ಸ್ಮಾರ್ಟ್‌ಸಿಟಿ ಅಡಿಯಲ್ಲಿ ನಾವು ರೂಪಿಸಿದ ಯೋಜನೆಗಳಿಗೂ ಬಿಜೆಪಿಯವರು ಮಾಡಿದ ಕೆಲಸಗಳಿಗೂ ಬಹಳ ವ್ಯತ್ಯಾಸವಿದೆ. ಅವರ ಅವಧಿಯಲ್ಲಿ ಆಗಿರುವ ಲೋಪಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

‘ಹಳೇ ಬಸ್ ನಿಲ್ದಾಣದ ಬಗ್ಗೆ ನಮ್ಮ ಚಿಂತನೆ ಬೇರೆಯಾಗಿತ್ತು. ಅವರು ಮಾಡಿದ್ದೇ ಬೇರೆ. ಬಸ್ ಒಳಗೆ ಹೋದರೆ ತಿರುಗಲು ಆಗದಷ್ಟು ಅವೈಜ್ಞಾನಿಕವಾಗಿ ನಿರ್ಮಿಸಿದ್ದಾರೆ. ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಇನ್ನೂ ಕೆಲವು ಕಾಮಗಾರಿಗಳು ಬಾಕಿ ಇವೆ’ ಎಂದು ನಗರದ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

‘ಬಿಜೆಪಿ ಆಡಳಿತ ಅವಧಿಯಲ್ಲಿ ಸರಿಯಾದ ಯೋಜನೆ ಮಾಡದ ಕಾರಣ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಯಿತು. ಮುಂಬರುವ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಶ್ವತ ಕೆಲಸಗಳನ್ನು ಮಾಡಲಾಗುವುದು’ ಎಂದರು.

‘ನಮ್ಮ ಆಡಳಿತದಲ್ಲಿ ಉತ್ತಮ ರಸ್ತೆಗಳು ಸೇರಿದಂತೆ ಕಣ್ಣಿಗೆ ಕಾಣುವಂತೆ ಅಭಿವೃದ್ಧಿ ಮಾಡಿದ್ದೇವೆ. ಜನರಿಗೆ ಆಹಾರ, ಬಟ್ಟೆ, ಸೂರು ಮತ್ತು ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ. ಜಿಲ್ಲೆಗೆ ₹ 100 ಕೋಟಿ ಅನುದಾನ ಬಂದಿದೆ’ ಎಂದು ತಿಳಿಸಿದರು.

‘ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ನಡೆಸುವ ವಿಷಯವನ್ನು ಈ ಬಾರಿಯ ಬಜೆಟ್‌ನಲ್ಲಿ ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ: ‘ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷವು ಒಂದು ಕುಟುಂಬವಿದ್ದಂತೆ. ಯಾವುದೇ ವಿಷಯವಾದರೂ ಒಟ್ಟಿಗೆ ಕುಳಿತು ಸಮಾಲೋಚನೆ ಮಾಡಿದ ನಂತರವೇ ನಿರ್ಧಾರವಾಗುತ್ತದೆ. ಪ್ರಭಾ ಮಲ್ಲಿಕಾರ್ಜುನ್ ಅವರ ಸ್ಪರ್ಧೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ’ ಎಂದು ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT