ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17ಕ್ಕೆ ಕಾಲೇಜು ಆರಂಭಿಸಲು ಸಜ್ಜಾದ ವಿ.ವಿ

ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಕುಲಪತಿ ಪ್ರೊ. ಶರಣಪ್ಪ ಹಲಸೆ
Last Updated 13 ನವೆಂಬರ್ 2020, 16:16 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನವೆಂಬರ್‌ 17ರಂದು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಕಾರಣಕ್ಕೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದ ಜೊತೆಗೆ ಅವರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.

ಶುಕ್ರವಾರ ಆನ್‌ಲೈನ್‌ ಮೂಲಕ ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಲಗ್ನ ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷವನ್ನು ಎಂಟು ತಿಂಗಳ ನಂತರ ಆರಂಭಿಸಲಾಗುತ್ತಿದೆ ಎಂದರು.

ಯುಜಿಸಿ ಮತ್ತು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದ ಎಲ್ಲಾ ಸೂಚನೆ ಮತ್ತು ನಿಯಮಾವಳಿಗಳನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಲು ಎಲ್ಲಾ ಕಾಲೇಜು ಮತ್ತು ವಿಶ್ವವಿದ್ಯಾಲಯದ ಆವರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯದ ನಿರಂತರ ಮೇಲ್ವಿಚಾರಣೆಯ ಉದ್ದೇಶದಿಂದ ವಿಶ್ವವಿದ್ಯಾಲಯ, ಸ್ನಾತಕೋತ್ತರ ಕೇಂದ್ರಗಳು ಮತ್ತು ಎಲ್ಲಾ ಕಾಲೇಜುಗಳಲ್ಲಿ ಕೋವಿಡ್ ನಿಯಂತ್ರಣ ಕೇಂದ್ರ ಸ್ಥಾಪಿಸಿ, ನೋಡಲ್ ಅಧಿಕಾರಿ ನೇಮಿಸಲಾಗುತ್ತಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ನಡೆಯಲಿವೆ. ಆನ್‍ಲೈನ್‍ನಲ್ಲೂ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

‘ದೈಹಿಕವಾಗಿ ತರಗತಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಯ ಪ್ರಮಾಣಪತ್ರ ಪಡೆಯುವುದು ಕಡ್ಡಾಯ. ಮಾಸ್ಕ್‌ ಧಾರಣೆ, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ವೈಯಕ್ತಿಕ ಜವಾಬ್ದಾರಿಯ ಬಗ್ಗೆ ಪಾಲಕರಿಂದ ಅನುಮತಿ ಪತ್ರವನ್ನೂ ಸಲ್ಲಿಸಬೇಕು. ಜೊತೆಗೆ ಸರ್ಕಾರ ಮತ್ತು ವಿಶ್ವವಿದ್ಯಾಲಯದ ನಿಯಮಗಳನ್ನು ಪಾಲಿಸುವುದಾಗಿ ವೈಯಕ್ತಿಕ ಮುಚ್ಚಳಿಕೆ ಪತ್ರವನ್ನು ಬರೆದುಕೊಡುವುದನ್ನೂ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ದೈಹಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ ಆನ್‍ಲೈನ್‍ನಲ್ಲೂ ಪಾಲ್ಗೊಳ್ಳಬಹುದು. ಹಾಜರಾತಿ ಕಡ್ಡಾಯಗೊಳಿಸಿಲ್ಲ. ಆರಂಭದಲ್ಲಿ ಬೋಧನೆಗೆ ಸೀಮಿತಗೊಳಿಸಿದ್ದು, ಹಂತ–ಹಂತವಾಗಿ ಪ್ರಾಯೋಗಿಕ ತರಬೇತಿಗೆ ಆದ್ಯತೆ ನೀಡಲಾಗುವುದು’ ಎಂದು ವಿವರಿಸಿದರು.

ಕ್ಯಾಂಟೀನ್‌, ಹಾಸ್ಟೆಲ್‌, ಕಾಲೇಜು ಕೊಠಡಿಗಳಲ್ಲಿ ಪ್ರತಿ ದಿನವೂ ಸ್ಯಾನಿಟೈಸೇಷನ್ ಮಾಡುವುದು, ಕಿಡಕಿ, ಬಾಗಿಲುಗಳನ್ನು ಸ್ವಚ್ಛಗೊಳಿಸುವುದು, ಸ್ಪರ್ಶಿಸಲು ಅವಕಾಶವಿರದ ಕಸದ ತೊಟ್ಟಿಯ ವ್ಯವಸ್ಥೆ ಮಾಡಲಾಗುತ್ತಿದೆ. ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಊಟ–ಉಪಾಹಾರದ ಸಂದರ್ಭದಲ್ಲೂ ಸರ್ಕಾರದ ನಿಮಯಗಳನ್ನು ಪಾಲಿಸಲೇಬೇಕು. ಇದರಲ್ಲಿ ಯಾವುದೇ ಲೋಪವಾದರೂ ಕಾಲೇಜಿನ ಪ್ರಾಚಾರ್ಯರು ಮತ್ತು ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ಕುಲಪತಿ ಎಚ್ಚರಿಸಿದರು.

ಸಭೆಯಲ್ಲಿ ಕುಲಸಚಿವ ಪ್ರೊ. ಬಸವರಾಜ ಬಣಕಾರ, ವಿ.ವಿ ಕೋವಿಡ್ ನೋಡಲ್ ಅಧಿಕಾರಿ ಡಾ. ಶರತ್, ವಿವಿಧ ಕಾಲೇಜುಗಳ ಪ್ರಾಚಾರ್ಯರು, ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.

*

ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕಾಲ ಕಾಲಕ್ಕೆ ಧ್ವನಿವರ್ಧಕ ಬಳಸಿ ಸರ್ಕಾರದ ಸೂಚನೆಗಳ ಬಗ್ಗೆ ಮಾಹಿತಿ ನೀಡಬೇಕು. ಅಧ್ಯಯನಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸಬೇಕು.

ಪ್ರೊ. ಶರಣಪ್ಪ ವಿ. ಹಲಸೆ, ಕುಲಪತಿ, ದಾವಣಗೆರೆ ವಿಶ್ವವಿದ್ಯಾಲಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT