ಭಾನುವಾರ, ಆಗಸ್ಟ್ 14, 2022
23 °C
ಸ್ನಾತಕ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ದೇಶದ ಮೊದಲ ವಿಶ್ವವಿದ್ಯಾನಿಲಯ

ಜ.6ರಿಂದ ದಾವಣಗೆರೆ ವಿವಿ ವಿಶೇಷ ಪೂರಕ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೋವಿಡ್ ಕಾರಣದಿಂದ ಪರೀಕ್ಷೆಗೆ ಗೈರು ಹಾಜರಾದ ಮತ್ತು ಅನುತ್ತೀರ್ಣರಾದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ದಾವಣಗೆರೆ ವಿಶ್ವವಿದ್ಯಾಲಯವು 2021ರ ಜನವರಿ 6ರಿಂದ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ವಿಶೇಷ ಪರೀಕ್ಷೆ ನಡೆಸುತ್ತಿರುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯ ಇದಾಗಿದೆ. ಪ್ರಸ್ತುತ ವಿಶ್ವವಿದ್ಯಾಲಯದ ಯೋಜನೆಯಿಂದ ಒಟ್ಟು 15,251 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಲ್ಲಿ ಸ್ನಾತಕ ಪದವಿಯ 15,155 ಮತ್ತು ಸ್ನಾತಕೋತ್ತರ ಪದವಿಯ 96 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.

‘ಕೋವಿಡ್ ಸಂದರ್ಭ ಆರೋಗ್ಯ ಅಥವಾ ಇನ್ನಿತರೆ ಕಾರಣಗಳಿಂದ ಹಲವು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಸಾಂಕ್ರಾಮಿಕ ರೋಗದ ಕಾರಣಕ್ಕಾಗಿ ಅವರ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆ ಆಗಬಾರದು ಎಂಬುದು ವಿಶ್ವವಿದ್ಯಾನಿಲಯದ ಆಶಯ. ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಜೊತೆಗೆ ಕಳೆದ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಒಂದು ಬಾರಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಪರೀಕ್ಷೆಗೆ ದಂಡ ಸಹಿತ ಅರ್ಜಿ ಸಲ್ಲಿಸಲು ಡಿಸೆಂಬರ್ 16ರಿಂದ 21ರವರೆಗೆ ಅವಕಾಶ ನೀಡಲಾಗಿದೆ’ ಎಂದು ವಿಶ್ವವಿದ್ಯಾನಿಲಯದ ಕುಲಸಚಿವೆ ಪ್ರೊ. ಎಚ್.ಎಸ್. ಅನಿತಾ ತಿಳಿಸಿದ್ದಾರೆ.

‘ಪ್ರಸ್ತುತ ವಿಶೇಷ ಪೂರಕ ಪರೀಕ್ಷೆಯಿಂದ ವಿಶ್ವವಿದ್ಯಾನಿಲಯದ ಮೇಲೆ ಹೆಚ್ಚುವರಿ ಹೊರೆ ಬೀಳುತ್ತದೆ. ಆದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳಿಂದಲೂ ಉತ್ತಮ ಸ್ಪಂದನೆ ದೊರೆತಿದೆ’ ಎಂದೂ ಹೇಳಿದರು.

‘ಈಗಾಗಲೇ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗಳು 15 ದಿನಗಳಲ್ಲಿ ಪೂರ್ಣಗೊಳ್ಳಲಿವೆ. ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಳಿಸಿದ ಒಂದು ಗಂಟೆಯಲ್ಲಿಯೇ ಫಲಿತಾಂಶ ಪ್ರಕಟಿಸುವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿದ್ದರೆ ಪರಿಹರಿಸಿ ಒಂದೇ ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಭರವಸೆ ನೀಡಿದರು.

‘ವಿಶೇಷ ಪೂರಕ ಪರೀಕ್ಷೆಗೆ ಈಗಾಗಲೇ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್‍ನಲ್ಲಿ ಅನುಮೋದನೆ ಸಿಕ್ಕಿದೆ. ಸರ್ಕಾರದಿಂದಲೂ ಮೌಖಿಕ ಸಹಕಾರ ಸಿಕ್ಕಿದೆ. ವಿದ್ಯಾರ್ಥಿಗಳ ಹಿತ, ಅವರ ಶೈಕ್ಷಣಿಕ ಉನ್ನತಿಗೆ ಸಹಕಾರಿ ಆಗುವ ವಿಶ್ವಾಸವಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು