ದಾವಣಗೆರೆ: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಅರ್ಥಪೂರ್ಣವಾಗಿ ಆಚರಿಸಲು ಆಗಸ್ಟ್ 14 ಹಾಗೂ 15ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
‘ಎಲ್ಲ ತಾಲ್ಲೂಕುಗಳಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ’ ಎಂದರು.
‘ಆ.14ರಂದು ಬೆಳಿಗ್ಗೆ 6.30ಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾಡಳಿತ ಭವನದಿಂದ ಪಿ.ಬಿ.ರಸ್ತೆ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂಜೆ 4.30ಕ್ಕೆ ಹೈಸ್ಕೂಲ್ ಮೈದಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ತಿರಂಗಾ ಮ್ಯಾರಥಾನ್ ಆಯೋಜಿಸಲಾಗಿದೆ’ ಎಂದು ತಿಳಿಸಿದರು.
‘ರಾಷ್ಟ್ರಧ್ವಜದೊಂದಿಗಿನ ಸೆಲ್ಫಿ ಚಿತ್ರವನ್ನು hargartirang.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬಹುದು. ಎಲ್ಲ ತಾಲ್ಲೂಕುಗಳಲ್ಲೂ ಸೆಲ್ಫಿ ಪಾಯಿಂಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ತೋಟಗಾರಿಕೆ ಇಲಾಖೆಯಿಂದ ನಗರದ ಗಾಜಿನಮನೆಯಲ್ಲಿ (ಗ್ಲಾಸ್‌ಹೌಸ್) ಆ.13ರಿಂದ 15ರ ವರೆಗೆ ಪ್ರತಿ ದಿನ ಸಂಜೆ 5 ಗಂಟೆಗೆ ಸಂಗೀತ ಕಾರಂಜಿ ಆಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ವತಿಯಿಂದ 400ಕ್ಕೂ ಅಧಿಕ ಬಸ್‌ಗಳ ಮೇಲೆ ಹರ್ ಘರ್ ತಿರಂಗಾ ಅಭಿಯಾನದ ಪೋಸ್ಟರ್ ಅಂಟಿಸಲಾಗಿದೆ’ ಎಂದರು.